ಗ್ರಾಹಕರಿಗೆ ಹೊರೆಯಾಗದಂತೆ ಕ್ರಮ ಕೈಗೊಳ್ಳಲು ಮನವಿ
ಭದ್ರಾವತಿಯಲ್ಲಿ ಗುರುವಾರ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಮೆಸ್ಕಾಂ ಕಛೇರಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಭದ್ರಾವತಿ, ಮೇ. ೧೪: ಗ್ರಾಹಕರ ವಿದ್ಯುತ್ ಬಳಕೆಗೆ ಸಂಬಂಧಿಸಿದಂತೆ ಮೆಸ್ಕಾಂ ವತಿಯಿಂದ ನೀಡಲಾಗಿರುವ ಬಿಲ್‌ಗಳು ಅವೈಜ್ಞಾನಿಕವಾಗಿದ್ದು, ಪ್ರಸ್ತುತ ಎದುರಾಗಿರುವ ಸಂದಿಗ್ದ ಪರಿಸ್ಥಿತಿಯಲ್ಲಿ ಅಧಿಕ ಮೊತ್ತದ ಬಿಲ್ ಪಾವತಿಸುವುದು ಅಸಾಧ್ಯವಾಗಿದೆ. ಈ ಸಂಬಂಧ ಪರಿಶೀಲಿಸಿ ಗ್ರಾಹಕರಿಗೆ ಹೊರೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಮೆಸ್ಕಾಂ ಅಧಿಕಾರಿಗಳಿಗೆ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಮನವಿ ಮಾಡಿದರು.ಗುರುವಾರ ಮೆಸ್ಕಾಂ ಕಛೇರಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಕೊರೋನಾ ವೈರಸ್ ಹಿನ್ನಲೆಯಲ್ಲಿ ಲಾಕ್‌ಡೌನ್ ಘೋಷಿಸಿದ ಪರಿಣಾಮ ಉದ್ಯೋಗವಿಲ್ಲದೆ ಶ್ರೀಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ನಡುವೆ ವಿದ್ಯುತ್ ಬಳಕೆ ಬಿಲ್‌ಗಳನ್ನು ನೀಡಲಾಗಿದ್ದು, ಅವೈಜ್ಞಾನಿಕವಾಗಿ ಅಧಿಕ ಮೊತ್ತ ವಿಧಿಸಲಾಗಿದೆ. ಯೂನಿಟ್‌ಗೆ ನಿಗದಿತ ದರಕ್ಕಿಂತ ಹೆಚ್ಚಿನ ದರ ವಿಧಿಸಿರುವುದು ಸರಿಯಲ್ಲ. ಇದರಿಂದಾಗಿ ಬಿಲ್ ಪಾವತಿಸುವುದು ಗ್ರಾಹಕರಿಗೆ ಕಷ್ಟವಾಗಿದೆ. ಯಾವುದೇ ರೀತಿ ಹೊರೆಯಾಗದಂತೆ ಬಿಲ್ ಪಾವತಿಸಲು ಅನುಕೂಲ ಕಲ್ಪಿಸಿಕೊಡಬೇಕೆಂದರು.
ಇದಕ್ಕೆ ಪ್ರತಿಕ್ರಿಯಿಸಿದ ಕಾರ್ಯಪಾಲಕ ಇಂಜಿನಿಯರ್ ಮೋಹನ್‌ಕುಮಾರ್, ಇಲಾಖೆಯ ಮಾರ್ಗಸೂಚಿಯಂತೆ ಬಿಲ್ ನೀಡಲಾಗಿದೆ. ಗ್ರಾಹಕರಿಗೆ ಯಾವುದೇ ರೀತಿ ಅನುಮಾನ ಕಂಡು ಬಂದಲ್ಲಿ ಕಛೇರಿ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ. ಗ್ರಾಹಕರಿಗೆ ಉಂಟಾಗಿರುವ ಗೊಂದಲ ಬಗೆಹರಿಸುವುದಾಗಿ ಭರವಸೆ ನೀಡಿದರು.
ಮೆಸ್ಕಾಂ ಅಧಿಕಾರಿ ರಾಮಚಂದ್ರ, ಹಿರಿಯ ಕಾರ್ಮಿಕ ಮುಖಂಡರಾದ ಎಸ್.ಎನ್ ಬಾಲಕೃಷ್ಣ, ನರಸಿಂಹಚಾರ್, ಡಿ.ಟಿ ಶ್ರೀಧರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment