Sunday, May 31, 2020

೧೦೦ ಹಾಸಿಗೆಯುಳ್ಳ ಸರ್ಕಾರಿ ಆಸ್ಪತ್ರೆಗೆ ಕಾಯಕಲ್ಪ ಪ್ರಶಸ್ತಿ

ಕಾರಣಕರ್ತರಾದ ಸಿಬ್ಬಂದಿಗಳಿಗೆ ಸನ್ಮಾನ 

ಭದ್ರಾವತಿ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸ್ವಚ್ಛತೆ ಹಾಗೂ ನಿರ್ವಹಣೆಯಲ್ಲಿ ಉತ್ತಮ ಸಾಧನೆ ಮಾಡಿದ ಹಿನ್ನಲೆಯಲ್ಲಿ ಕಾಯಕಲ್ಪ ಪ್ರಶಸ್ತಿ ಲಭಿಸಿದ್ದು, ಈ ಹಿನ್ನಲೆಯಲ್ಲಿ ಕಾರಣಕರ್ತರಾದ ಆಸ್ಪತ್ರೆ ಸಿಬ್ಬಂದಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. 

ಕನ್ನಡಪ್ರಭ ವಾರ್ತೆ, ಭದ್ರಾವತಿ: ಸ್ವಚ್ಛತೆ ಹಾಗೂ ನಿರ್ವಹಣೆಯಲ್ಲಿ ಉತ್ತಮ ಸಾಧನೆ ಮಾಡಿದ ಹಿನ್ನಲೆಯಲ್ಲಿ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಈ ಬಾರಿ ಕಾಯಕಲ್ಪ ಪ್ರಶಸ್ತಿ ಲಭಿಸಿದ್ದು, ಈ ಹಿನ್ನಲೆಯಲ್ಲಿ ಪ್ರಶಸ್ತಿಗೆ ಕಾರಣಕರ್ತರಾದ ಆಸ್ಪತ್ರೆಯ ಸಿಬ್ಬಂದಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ನಗರಸಭೆ ವ್ಯಾಪ್ತಿಯಲ್ಲಿರುವ ೧೦೦ ಹಾಸಿಗೆಯುಳ್ಳ ಏಕೈಕ ಸರ್ಕಾರಿ ಆಸ್ಪತ್ರೆ ಇದಾಗಿದ್ದು, ಪ್ರತಿದಿನ ಸಾವಿರಾರು ಮಂದಿ ಆಸ್ಪತ್ರೆಗೆ ಬಂದು ಹೋಗುತ್ತಾರೆ. ಸಾಮಾನ್ಯವಾಗಿ ಸರ್ಕಾರಿ ಆಸ್ಪತ್ರೆ ಎಂದರೆ ಸ್ವಚ್ಛತೆ ಹಾಗೂ ನಿರ್ವಹಣೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿ ಬರುತ್ತವೆ. ಈ ನಡುವೆಯೂ ಇಲ್ಲಿನ ಸಿಬ್ಬಂದಿಗಳು ಸ್ವಚ್ಛತೆ ಹಾಗೂ ನಿರ್ವಹಣೆಯಲ್ಲಿ ಉತ್ತಮ ಸಾಧನೆ ಮಾಡಿರುವುದು ಎಲ್ಲರನ್ನು ಬೆರಗುಗೊಳಿಸುವಂತೆ ಮಾಡಿದೆ.
ಕಾಯಕಲ್ಪ ಪ್ರಶಸ್ತಿ ೨೫ ಸಾವಿರ ರು. ನಗದು ಹಾಗು ಪ್ರಶಸ್ತಿ ಪತ್ರ ಒಳಗೊಂಡಿದೆ. ಪ್ರಶಸ್ತಿಗೆ ಕಾರಣಕರ್ತರಾದ ಆಸ್ಪತ್ರೆಯ ಸುಮಾರು ೨೧  ಡಿ’ ಗ್ರೂಪ್ ಗುತ್ತಿಗೆ ಸಿಬ್ಬಂದಿಗಳು, ೨೧ ಕಾಯಂ ಸಿಬ್ಬಂದಿಗಳು ಹಾಗೂ ೧೫ ಜನ ದಾದಿಯರು, ಆರೋಗ್ಯ ಸಹಾಯಕರು ಸೇರಿದಂತೆ ಇನ್ನಿತರರನ್ನು ಸನ್ಮಾನಿಸಿ ಗೌರವಿಸಲಾಯಿತು.
ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಓ. ಮಲ್ಲಪ್ಪ ಅಧ್ಯಕ್ಷತೆ ವಹಿಸಿದ್ದರು.  ಹಿರಿಯ ವೈದ್ಯ ಡಾ. ರವೀಂದ್ರನಾಥ ಕೋಠಿ, ಡಾ. ವೀರಭದ್ರಪ್ಪ, ಡಾ. ಮಯೂರಿ, ಆರೋಗ್ಯ ರಕ್ಷಾ ಸಮಿತಿಯ ಸುಂದರ್ ಬಾಬು, ನಾಗೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

No comments:

Post a Comment