ಭದ್ರಾವತಿಯಲ್ಲಿ ಮಂಗಳವಾರ ಬಿ.ಎಚ್ ರಸ್ತೆ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಅಭಿನಂದನಾ ಸಮಾರಂಭದಲ್ಲಿ ಸಂಸದ ಬಿ.ವೈ ರಾಘವೇಂದ್ರ ಮಾತನಾಡಿದರು.
ಭದ್ರಾವತಿ, ಜೂ. ೧೬: ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಸೇವೆ ಅನನ್ಯವಾಗಿದ್ದು, ಇವರ ಸೇವೆಗೆ ಯಾರಿಂದಲೂ ಬೆಲೆ ಕಟ್ಟಲು ಸಾಧ್ಯವಿಲ್ಲ. ಈ ಹಿನ್ನಲೆಯಲ್ಲಿ ಇವರಿಗೂ ದೇಶದ ಅತ್ಯುನ್ನತ ನಾಗರೀಕ ಪ್ರಶಸ್ತಿ ಲಭಿಸುವಂತಾಗಬೇಕೆಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.
ಅವರು ಮಂಗಳವಾರ ನಗರದ ಬಿ.ಎಚ್ ರಸ್ತೆ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಸಂದರ್ಭದಲ್ಲಿ ಯಾವುದೇ ಜೀವ ಭಯವಿಲ್ಲದೆ ಸೇವೆ ಸಲ್ಲಿಸುತ್ತಿರುವುದು ನಿಜವಾಗಿಯೂ ಶ್ಲಾಘನೀಯ ಕಾರ್ಯವಾಗಿದೆ. ಈ ಮಹಿಳೆಯರ ಮೇಲೂ ಹಲ್ಲೆ ಪ್ರಕರಣಗಳು ನಡೆದಿರುವುದು ವಿಪರ್ಯಾಸದ ಸಂಗತಿಯಾಗಿದೆ. ಅದರಲ್ಲೂ ಕಂಟೈನ್‌ಮೆಂಟ್ ವಲಯಗಳಲ್ಲಿ ಕಾರ್ಯ ನಿರ್ವಹಿಸುವ ಮಹಿಳೆಯರ ಧೈರ್ಯ ಮೆಚ್ಚುವಂತದ್ದಾಗಿದೆ ಎಂದರು.
ಪ್ರಧಾನಿ ಮೋದಿಯವರು ಈ ಮಹಿಳೆಯರ ಕಾರ್ಯವನ್ನು ಪ್ರಶಂಸಿದ್ದಾರೆ. ಕರ್ತವ್ಯದ ವೇಳೆ ಕೊರೋನಾ ವೈರಸ್ ತಗುಲಿ ಮೃತಪಟ್ಟಲ್ಲಿ ಈ ಮಹಿಳೆಯರಿಗೂ ಸಹ ೫೦ ಲಕ್ಷ ರು. ಪರಿಹಾರ ನೀಡುವ ಕುರಿತು ಸರ್ಕಾರದಲ್ಲಿ ಚರ್ಚೆಗಳು ನಡೆಯುತ್ತಿವೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಹಲವು ಬೇಡಿಕೆಗಳನ್ನು ಈಡೇರಿಸಿಕೊಡಲಾಗಿದೆ. ಮುಂದಿನ ದಿನಗಳಲ್ಲಿ ವೇತನ ಸಹ ಹೆಚ್ಚಾಗಲಿದೆ ಎಂದರು.
ಕೇವಲ ಶ್ರೀಮಂತ ವರ್ಗದವರಿಗೆ ಮಾತ್ರ ಮೀಸಲಾಗಿರುವ ವಿಮಾನ ಪ್ರಯಾಣ ಇನ್ನೂ ಮುಂದೆ ಸಾಮಾನ್ಯ ವರ್ಗದವರಿಗೂ ಸಹ ತಲುಪವಂತಾಗಬೇಕು. ಈ ನಿಟ್ಟಿನಲ್ಲಿ ಬಿಜೆಪಿ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ. ಹಲವು ವರ್ಷಗಳ ನಿರಂತರ ಪ್ರಯತ್ನದ ಫಲವಾಗಿ ಶಿವಮೊಗ್ಗದಲ್ಲಿ ನೂತನ ವಿಮಾನ ನಿಲ್ದಾಣ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಮುಂದಿನ ದಿನಗಳಲ್ಲಿ ಅಂಗನವಾಡಿ, ಆಶಾ ಕಾರ್ಯಕರ್ತೆಯರೂ ಸಹ ರಿಯಾಯಿತಿ ದರದಲ್ಲಿ ವಿಮಾನಗಳಲ್ಲಿ ಪ್ರಯಾಣಿಸಬಹುದಾಗಿದೆ ಎಂದರು.
ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಬಿ ಅಶೋಕನಾಯ್ಕ್ ಮಾತನಾಡಿ, ದೇಶದಲ್ಲಿ ಮಹಾಮಾರಿ ವ್ಯಾಪಕವಾಗಿ ಹರಡುತ್ತಿದೆ. ಇಂತಹ ಸಂದರ್ಭದಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಕೈಗೊಂಡ ಹಲವು ದಿಟ್ಟ ಕ್ರಮಗಳಿಂದಾಗಿ ವೈರಸ್ ನಿಯಂತ್ರಣದಲ್ಲಿದೆ. ಕೊರೋನಾ ಬಾಧಿತ ಇತರೆ ರಾಜ್ಯಗಳಿಗೆ ಹೋಲಿಕೆ ಮಾಡಿ ನೋಡಿದಾಗ ನಿಜವಾದ ಪರಿಶ್ರಮ ಅರ್ಥವಾಗುತ್ತದೆ. ಶಿವಮೊಗ್ಗ ಜಿಲ್ಲೆಯಲ್ಲೂ ಸಹ ವ್ಯಾಪಕ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಲಾಕ್‌ಡೌನ್ ಸಡಿಲಗೊಂಡ ಪರಿಣಾಮ ಬೇರೆ ರಾಜ್ಯಗಳಿಂದ ಜಿಲ್ಲೆಯಲ್ಲಿ ಕೊರೋನಾ ವೈರಸ್ ವ್ಯಾಪಿಸಿದೆ. ಆದರೂ ಸಹ ನಿಯಂತ್ರಿಸುವಲ್ಲಿ ಜಿಲ್ಲಾಡಳಿತ ಯಶಸ್ವಿಯಾಗಿದೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಮೇಘರಾಜ್ ಮಾತನಾಡಿ, ಪ್ರಧಾನಿ ಮೋದಿಯವರು ಮೊದಲ ಬಾರಿಗೆ ಪೌರಕಾರ್ಮಿಕರ ಸೇವೆಯನ್ನು ವಿಶ್ವಕ್ಕೆ ತೋರಿಸುವ ಮೂಲಕ ಅವರ ಸೇವೆಗೆ ಬೆಲೆ ತಂದುಕೊಟ್ಟಿದ್ದರು. ಇದೀಗ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಸೇವೆಯನ್ನೂ ಸಹ ಗುರುತಿಸಿ ಅವರ ಅಭಿನಂದಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಲೋಕಸಭಾ ಸದಸ್ಯ ಬಿ.ವೈ ರಾಘವೇಂದ್ರ ಪೂರಕವಾಗಿ ಸ್ಪಂದಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಮಾದರಿಯಾಗಿದ್ದಾರೆಂದು ಪ್ರಶಂಸೆ ವ್ಯಕ್ತಪಡಿಸಿದರು.
ವೇದಿಕೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ರಾಜೇಶ್ ಸುರಗಿಹಳ್ಳಿ, ತಹಸೀಲ್ದಾರ್ ಶಿವಕುಮಾರ್, ನಗರಸಭೆ ಪೌರಾಯುಕ್ತ ಮನೋಹರ್, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುರೇಶ್, ಬಿಜೆಪಿ ಪಕ್ಷದ ಮುಖಂಡರಾದ ಎಂ. ಪ್ರಭಾಕರ್, ವಿ. ಕದಿರೇಶ್, ವಿಶ್ವನಾಥಕೋಠಿ, ಬಿ.ಕೆ ಶ್ರೀನಾಥ್, ಜಿ. ಧರ್ಮಪ್ರಸಾದ್, ಮಂಗೋಟೆ ರುದ್ರೇಶ್, ಜಿ. ಆನಂದಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment