Thursday, June 25, 2020

೪೦೦೧ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರು

ಭದ್ರಾವತಿ ನ್ಯೂಟೌನ್ ಸರ್ಕಾರಿ ರಜಿತ ಮಹೋತ್ಸವ ಬಾಲಕರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.
ಭದ್ರಾವತಿ, ಜೂ. ೨೫: ತಾಲೂಕಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮೊದಲ ದಿನವಾದ ಗುರುವಾರ ಯಶಸ್ವಿಯಾಗಿ ನಡೆದಿದ್ದು, ಪರೀಕ್ಷೆಗೆ ಹಾಜರಾಗಬೇಕಿದ್ದ ಒಟ್ಟು ೪೧೭೬ ವಿದ್ಯಾರ್ಥಿಗಳ ಪೈಕಿ ೪೦೦೧ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.
ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಹೆಚ್ಚಿನ ಸುರಕ್ಷತಾ ಕ್ರಮಗಳೊಂದಿಗೆ ಕಳೆದ ಸುಮಾರು ೨ ತಿಂಗಳಿನಿಂದ ಆರೋಗ್ಯ ಮತ್ತು ಪೊಲೀಸ್ ಇಲಾಖೆ ಸೇರಿದಂತೆ ಸರ್ಕಾರದ ಇನ್ನಿತರ ಇಲಾಖೆಗಳ ಸಹಕಾರದೊಂದಿಗೆ ಶಿಕ್ಷಣ ಇಲಾಖೆ ನಿರಂತರವಾಗಿ ಸಿದ್ದತಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿತ್ತು. ಇದರ ಪರಿಣಾಮ ಪರೀಕ್ಷೆ ಮೊದಲ ದಿನ ಯಶಸ್ವಿಯಾಗಿದೆ.
ಪತ್ರಿಕೆಯೊಂದಿಗೆ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ಈ ಬಾರಿ ಪರೀಕ್ಷೆಗೆ ಹಾಜರಾಗಬೇಕಿದ್ದ ಒಟ್ಟು ೪೧೭೬ ವಿದ್ಯಾರ್ಥಿಗಳ ಪೈಕಿ ೪೦೦೧ ವಿದ್ಯಾರ್ಥಿಗಳು ಹಾಜರಿದ್ದು, ೧೭೫ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಉಳಿದಂತೆ ೨ ವಿದ್ಯಾರ್ಥಿಗಳು ಕಂಟೈನ್‌ಮೆಂಟ್ ಪ್ರದೇಶಗಳಿಂದ ಬಂದಿದ್ದು,  ಅನಾರೋಗ್ಯ ಕಾರಣದಿಂದ ವಿಶೇಷ ಕೊಠಡಿಯಲ್ಲಿ ೮ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಉಳಿದಂತೆ ಸರ್ಕಾರಿ ಹಾಗೂ ಖಾಸಗಿ ವಸತಿ ನಿಲಯಗಳಲ್ಲಿ ಒಟ್ಟು ೩೮ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ೭೭ ವಲಸೆ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದಾರೆ.  ೧೫ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ಬರಲು ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿತ್ತು ಎಂದರು.
ಪರೀಕ್ಷಾ ಕೇಂದ್ರದ ಸುತ್ತಮುತ್ತ ಬ್ಯಾರಿಗೇಡ್‌ಗಳನ್ನು ಅಳವಡಿಸಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಪರೀಕ್ಷಾ ಕೇಂದ್ರದ ಹೊರ ಭಾಗದಲ್ಲಿ ವಿದ್ಯಾರ್ಥಿಗಳಿಗೆ ಥರ್ಮೋ ಸ್ಕ್ರೀನಿಂಗ್ ಯಂತ್ರದ ಮೂಲಕ ಆರೋಗ್ಯ ತಪಾಸಣೆ ನಡೆಸಲಾಯಿತು. ಪರೀಕ್ಷೆ ಹಾಜರಾದ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ವತಿಯಿಂದ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸಲಾಯಿತು.

No comments:

Post a Comment