Saturday, June 27, 2020

ಕೆಂಪೇಗೌಡರ ಆದರ್ಶ ಗುಣಗಳನ್ನು ಮೈಗೂಡಿಸಿಕೊಳ್ಳಿ : ಬಿ.ಕೆ ಸಂಗಮೇಶ್ವರ್

ಭದ್ರಾವತಿಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಪಾಲ್ಗೊಂಡು ಮಾತನಾಡಿದರು. 
ಭದ್ರಾವತಿ, ಜೂ. ೨೭: ನಾಡಪ್ರಭು ಕೆಂಪೇಗೌಡರು ಎಲ್ಲಾ ಸಮುದಾಯಕ್ಕೂ ಮಾದರಿ ವ್ಯಕ್ತಿಯಾಗಿದ್ದು, ಅವರ ಆದರ್ಶ ಗುಣಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು. 
ಅವರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 
ಸಮಾಜದ ಎಲ್ಲಾ ಆದರ್ಶ ವ್ಯಕ್ತಿಗಳ ವಿಚಾರಧಾರೆಗಳನ್ನು ಅರಿತುಕೊಂಡು ಮುನ್ನಡೆದಾಗ ಮಾತ್ರ ಭವಿಷ್ಯದಲ್ಲಿ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ. ಒಕ್ಕಲಿಗರ ಸಮುದಾಯ ತನ್ನದೇ ಆದ ಕೊಡುಗೆಯನ್ನು ಈ ನಾಡಿಗೆ ನೀಡಿದೆ. ನಗರದಲ್ಲಿ ಈ ಸಮುದಾಯಕ್ಕೆ ಅಗತ್ಯವಿರುವ ಸಮುದಾಯ ಭವನ ನಿರ್ಮಾಣಕ್ಕೆ ಎಲ್ಲಾ ರೀತಿಯ ಸಹಕಾರ ನೀಡಲು ಬದ್ಧ ಎಂದರು. 
ಚುಂಚಾದ್ರಿ ಮಹಿಳಾ ವೇದಿಕೆ ಮಾಜಿ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಪ್ರಾಸ್ತಾವಿಕ ನುಡಿಗಳನ್ನಾಡಿ, ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರು ಹಲವು ಯೋಜನೆಗಳ ರೂವಾರಿಗಳಾಗಿದ್ದಾರೆ. ಅವರು ಇಂದಿಗೂ ಸಮಾಜಕ್ಕೆ ಸ್ಪೂರ್ತಿದಾಯಕ ಆದರ್ಶ ವ್ಯಕ್ತಿಗಳಾಗಿದ್ದು, ಇಂದಿನ ಯುವ ಪೀಳಿಗೆ ಅವರ ದಾರಿಯಲ್ಲಿ ಸಾಗುವಂತಾಗಬೇಕೆಂದರು. 
ಒಕ್ಕಲಿಗರ ಸಂಘದ ಕಾರ್ಯದರ್ಶಿ ಪ್ರಶಾಂತ್ ಮಾತನಾಡಿ,  ಒಕ್ಕಲಿಗರು ತಾಲೂಕಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದು, ಸಮುದಾಯ ಭವನದ ಅಗತ್ಯವಿದೆ. ಈ ಹಿನ್ನಲೆಯಲ್ಲಿ ಶಾಸಕರು ಸರ್ಕಾರದಿಂದ ಜಾಗ ಮಂಜೂರಾತಿ ಮಾಡಿಸಿಕೊಡಬೇಕೆಂದು ಮನವಿ ಮಾಡಿದರು. 
ತಹಸೀಲ್ದಾರ್ ಶಿವಕುಮಾರ್, ಒಕ್ಕಲಿಗರ ಸಂಘದ ಅಧ್ಯಕ್ಷ ರಮೇಶ್ ರಾಮನಗರ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ತಾಲೂಕು ಪಂಚಾಯಿತಿ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಡಾ. ಕೊಟ್ರೇಶಪ್ಪ, ಕಂದಾಯಾಧಿಕಾರಿ ಪ್ರಶಾಂತ್, ಒಕ್ಕಲಿಗ ಮಹಿಳಾ ವೇದಿಕೆ ಅಧ್ಯಕ್ಷೆ ಅನ್ನಪೂರ್ಣ ಸತೀಶ್, ಸಮಾಜದ ಪ್ರಮುಖರಾದ ಎ.ಟಿ ರವಿ, ಲೋಹಿತಾ ನಂಜಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.   


No comments:

Post a Comment