ಕಾಂಗ್ರೆಸ್ ನಗರ ಘಟಕ ಅಧ್ಯಕ್ಷ ಟಿ. ಚಂದ್ರೇಗೌಡ ಆರೋಪ
ಭದ್ರಾವತಿಯಲ್ಲಿ ಗುರುವಾರ ಯುವ ಕಾಂಗ್ರೆಸ್ ಘಟಕದ ವತಿಯಿಂದ ತಾಲೂಕು ಕಛೇರಿ ಮಿನಿವಿಧಾನಸೌಧದ ಮುಂಭಾಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಿ ತಹಸೀಲ್ದಾಡ್ ಗ್ರೇಡ್-೨ ರಂಗಮ್ಮ ಮೂಲಕ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಜೂ. ೧೮: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದೇಶದಲ್ಲಿ ಜನಸಾಮಾನ್ಯರು ನೆಮ್ಮದಿಯಿಂದ ಬದುಕುವ ವಾತಾವರಣ ರೂಪಿಸಿಕೊಡಲಾಗಿತ್ತು. ಆದರೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ನೆಮ್ಮದಿ ಕಳೆದುಕೊಳ್ಳುವಂತಾಗಿದೆ ಎಂದು ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ ಆರೋಪಿಸಿದರು.
ಅವರು ಗುರುವಾರ ಯುವ ಕಾಂಗ್ರೆಸ್ ಘಟಕದ ವತಿಯಿಂದ ತಾಲೂಕು ಕಛೇರಿ ಮಿನಿವಿಧಾನಸೌಧದ ಮುಂಭಾಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡುವ ಜೊತೆಗೆ ಅಗತ್ಯ ದಿನ ಬಳಕೆ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗಿದೆ. ಪ್ರಸ್ತುತ ದೇಶದಲ್ಲಿ ಜನಸಾಮಾನ್ಯರಿಗೆ ಮಾರಕವಾಗಿರುವ ಹಲವಾರು ಕಾನೂನುಗಳನ್ನು ಜಾರಿಗೆ ತರಲಾಗಿದೆ. ಬಂಡವಾಳಶಾಹಿಗಳು, ಶ್ರೀಮಂತರ ಪರವಾದ ನಿಲುವುಗಳನ್ನು ತೆಗೆದುಕೊಳ್ಳುತ್ತಿದ್ದು, ಶ್ರೀಸಾಮಾನ್ಯರು ಬದುಕುವುದೇ ಕಷ್ಟಕರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಕ್ಷಣ ಪ್ರಧಾನಮಂತ್ರಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡಿ ಜನಸಾಮಾನ್ಯರ ಸಂಕಷ್ಟಕ್ಕೆ ಸ್ಪಂದಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಯುವ ಘಟಕದ ಅಧ್ಯಕ್ಷ ಜಿ. ವಿನೋದ್‌ಕುಮಾರ್ ನೇತೃತ್ವ ವಹಿಸಿದ್ದರು. ಮುಖಂಡರಾದ ಪ್ರಾನ್ಸಿಸ್, ರಾಘವೇಂದ್ರ ಸರಾಟೆ, ಯುವ ಘಟಕದ ನಗರ ಅಧ್ಯಕ್ಷ ಕೇಶವ್, ಜಿಲ್ಲಾ ಕಾರ್ಯದರ್ಶಿಗಳಾದ ಸಚಿನ್ ಸಿಂಧ್ಯಾ, ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕಲ್ಪನಾಹಳ್ಳಿ, ಗಂಗಾಧರ್, ವಿನ್‌ಸ್ಟನ್,ನಾಗೇಶ್, ಕಿರಣ್, ಪ್ರವೀಣ್, ಭರತ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಇನ್ನಿತರರು ಭಾಗವಹಿಸಿದ್ದರು. ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
No comments:
Post a Comment