ಭದ್ರಾವತಿ ತಾಲೂಕು ಪಂಚಾಯಿತಿಯಲ್ಲಿ ಮಂಗಳವಾರ ನಡೆದ ಪ್ರಗತಿಪರಿಶೀಲನಾ ಸಭೆಯಲ್ಲಿ ಸಂಸದ ಬಿ.ವೈ ರಾಘವೇಂದ್ರ, ಶಾಸಕರಾದ ಬಿ.ಕೆ ಸಂಗಮೇಶ್ವರ್, ಕೆ.ಬಿ ಅಶೋಕನಾಯ್ಕ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ, ಜೂ. ೧೬: ಕೇಂದ್ರ ಉಕ್ಕು ಪ್ರಾಧಿಕಾರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಹಾಗೂ ರಾಜ್ಯ ಸರ್ಕಾರಿ ಸ್ವಾಮ್ಯದ ಮೈಸೂರು ಕಾಗದ ಕಾರ್ಖಾನೆ ಈ ಎರಡು ಕಾರ್ಖಾನೆಗಳನ್ನು ಅಭಿವೃದ್ಧಿಗೊಳಿಸುವ ಜೊತೆಗೆ ಭದ್ರಾವತಿ ತಾಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಸಂಬಂಧಿಸಿದಂತೆ ಈಗಾಗಲೇ ಕಾರ್ಯಯೋಜನೆಗಳನ್ನು ಸಿದ್ದಪಡಿಸಲಾಗಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.
ಅವರು ತಾಲೂಕು ಪಂಚಾಯಿತಿಯಲ್ಲಿ ಮಂಗಳವಾರ ನಡೆದ ಪ್ರಗತಿಪರಿಶೀಲನಾ ಸಭೆಯಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.
ಹಲವಾರು ಮಹಾನ್ ವ್ಯಕ್ತಿಗಳು, ಹಿರಿಯರು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾಯಿತ ಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದಾರೆ. ಚುನಾಯಿತ ಪ್ರತಿನಿಧಿಯಾಗಿ ಅವರ ಸ್ಥಾನದಲ್ಲಿ ನಾನು ಸಹ ಸೇವೆ ಸಲ್ಲಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.
ಸಂಸದನಾಗಿ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಹ ಸಾಕಷ್ಟು ಶ್ರಮಿಸಿದ್ದು, ಜಿಲ್ಲೆಗೆ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ. ಇದೀಗ ಸುಮಾರು ೧೨೦ ಕೋ.ರು. ವೆಚ್ಚದ ವಿಮಾನ ನಿಲ್ದಾಣದ ಶಂಕಸ್ಥಾಪನೆ ನೆರವೇರಿಸಲಾಗಿದ್ದು, ಶೀಘ್ರದಲ್ಲಿಯೇ ಮುಕ್ತಾಯಗೊಳ್ಳಲಿದೆ. ಮುಂದಿನ ದಿನಗಳಲ್ಲಿ ಶಿವಮೊಗ್ಗ ಜಿಲ್ಲೆ ಮತ್ತಷ್ಟು ಅಭಿವೃದ್ಧಿ ಹೊಂದಲಿದೆ ಎಂದರು.
ಭದ್ರಾವತಿ ತಾಲೂಕಿನಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆಯಬೇಕಾಗಿದೆ. ಮುಖ್ಯವಾಗಿ ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆಗಳನ್ನು ಅಭಿವೃದ್ಧಿಗೊಳಿಸಬೇಕಾಗಿದೆ. ಈಗಾಗಲೇ ಎಂಪಿಎಂ ಕಾರ್ಖಾನೆಯನ್ನು ಪುನರ್ ಆರಂಭಿಸುವ ಕುರಿತು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಕಾರ್ಖಾನೆಗೆ ಈ ಹಿಂದೆ ನೀಡಲಾಗಿದ್ದ ಅರಣ್ಯ ಭೂಮಿಯನ್ನು ಅರಣ್ಯ ಇಲಾಖೆಗೆ ಹಿಂದಿರುಗಿಸದೆ ಉಳಿಸಿಕೊಳ್ಳಲಾಗಿದೆ. ಕಾರ್ಖಾನೆಯನ್ನು ಆರಂಭಿಸುವ ಸಂಬಂಧ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಯೋಜನೆಗಳನ್ನು ಸಿದ್ದಪಡಿಸಿಕೊಳ್ಳಲಾಗುವುದು. ಇದೆ ರೀತಿ ವಿಐಎಸ್‌ಎಲ್ ಕಾರ್ಖಾನೆಯನ್ನು ಸಹ ಬಂಡವಾಳ ಹಿಂಪಡೆಯುವ ಪಟ್ಟಿಯಿಂದ ಹೊರತಂದು ಹಂತ ಹಂತವಾಗಿ ಅಭಿವೃದ್ಧಿಪಡಿಸಲು ಪ್ರಯತ್ನಿಸಲಾಗುವುದು ಎಂದರು.
ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆಯಬೇಕಾಗಿದೆ. ಬಹುಮುಖ್ಯವಾಗಿ ರಸ್ತೆಗಳು ನಿರ್ಮಾಣವಾಗಬೇಕಾಗಿದೆ. ಕೇಂದ್ರ ಸರ್ಕಾರದ ಅನುದಾನಗಳನ್ನು ಸದ್ಬಳಕೆಮಾಡಿಕೊಂಡು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ತಾಲೂಕು ಪಂಚಾಯಿತಿಗೆ ಹೊಸ ಕಟ್ಟಡದ ಅವಶ್ಯಕತೆ ಇದ್ದು, ಈ ಕುರಿತು ಶಾಸಕರು ಸಹ ಮನವರಿಕೆ ಮಾಡಿಕೊಟ್ಟಿದ್ದಾರೆ. ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ತಕ್ಷಣ ನೀಲನಕ್ಷೆ ಸಿದ್ದಪಡಿಸಿದ್ದಲ್ಲಿ ಶಾಸಕರೊಂದಿಗೆ ಕಟ್ಟಡ ನಿರ್ಮಾಣಕ್ಕೆ ತಾವು ಸಹ ಕೈಜೋಡಿಸುವುದಾಗಿ ಭರವಸೆ ನೀಡಿದರು.
ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಸಂಸದರು ಮುಂದಾಗಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಹೆಚ್ಚಿನ ಅನುದಾನ ಬಿಡುಗಡೆಗೊಳಿಸುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸುವ ಜೊತೆಗೆ ಹೊಸ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕೆಂದು ಮನವಿ ಮಾಡಿದರು.
ಶಾಸಕರಾದ ಕೆ.ಬಿ ಅಶೋಕನಾಯ್ಕ, ತಹಸೀಲ್ದಾರ್ ಶಿವಕುಮಾರ್, ತಾಲೂಕು ಪಂಚಾಯಿತಿ ಅಧ್ಯಕ್ಷೆ ಆಶಾ ಶ್ರೀಧರ್, ಉಪಾಧ್ಯಕ್ಷೆ ಸರೋಜಮ್ಮ ಹಾಜ್ಯನಾಯ್ಕ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ರಮೇಶ್, ಸದಸ್ಯರಾದ ಧರ್ಮೇಗೌಡ, ಕೆ. ಮಂಜುನಾಥ್, ರುದ್ರಪ್ಪ, ತಿಪ್ಪೇಶ್‌ರಾವ್, ಎಂ.ಜಿ ದಿನೇಶ್, ಅಣ್ಣಾ ಮಲೈ, ಡಿ. ಲಕ್ಷ್ಮಿದೇವಿ, ನೇತ್ರಾಬಾಯಿ, ತುಂಗಮ್ಮ, ಸಿ. ಮಂಜುಳ, ಗೀತಾ ಜಗದೀಶ್, ಎಂ. ನಾಗರಾಜ, ಉಷಾಕಿರಣ, ಶಮಾಬಾನು, ಪ್ರೇಮ್‌ಕುಮಾರ್, ಕಾರ್ಯನಿರ್ವಹಣಾಧಿಕಾರಿ ಡಾ. ಕೊಟ್ರೇಶಪ್ಪ, ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment