ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ನೇತೃತ್ವದ ತಂಡ ಪರಿಶೀಲನೆ
ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಸೇರಿದ ವಿಐಎಸ್‌ಎಲ್ ಆಸ್ಪತ್ರೆ ಸದ್ಬಳಕೆ ಮಾಡಿಕೊಳ್ಳಲು ಇದೀಗ ಜಿಲ್ಲಾಡಳಿತ ಮುಂದಾಗಿದ್ದು, ಈ ಹಿನ್ನಲೆಯಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ನೇತೃತ್ವದ ತಂಡ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಭದ್ರಾವತಿ, ಜು. ೩: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಸೇರಿದ ವಿಐಎಸ್‌ಎಲ್ ಆಸ್ಪತ್ರೆ ಸದ್ಬಳಕೆ ಮಾಡಿಕೊಳ್ಳಲು ಇದೀಗ ಜಿಲ್ಲಾಡಳಿತ ಮುಂದಾಗಿದೆ.
ಸುಮಾರು ೬೦ ವರ್ಷಗಳಿಗೂ ಹಳೇಯದಾದ ಬೃಹತ್ ಆಸ್ಪತ್ರೆ ಇದಾಗಿದ್ದು, ಈ ಹಿಂದೆ ದೊಡ್ಡಾಸ್ಪತ್ರೆ ಎಂದೇ ಪ್ರಸಿದ್ದಿ ಹೊಂದಿತ್ತು. ವಿಶಾಲವಾದ ಸ್ಥಳಾವಕಾಶ, ಸುಸಜ್ಜಿತ ಕಟ್ಟಡ ಹೊಂದಿರುವ ಆಸ್ಪತ್ರೆ ವಿಐಎಸ್‌ಎಲ್ ಮತ್ತು ಎಂಪಿಎಂ ೨ ಕಾರ್ಖಾನೆಗಳ ಸಾವಿರಾರು ಕಾರ್ಮಿಕರಿಗೆ ಹಾಗೂ ಕುಟುಂಬ ವರ್ಗದವರ ಆರೋಗ್ಯ ಸೇವೆ ಒದಗಿಸುವಲ್ಲಿ ಯಶಸ್ವಿಯಾಗಿತ್ತು.
ವಿಐಎಸ್‌ಎಲ್ ಮತ್ತು ಎಂಪಿಎಂ ಎರಡು ಕಾರ್ಖಾನೆಗಳು ಕಳೆದ ಸುಮಾರು ೨ ದಶಕಗಳಿಂದ ಅವನತಿ ದಾರಿ ಹಿಡಿದಿರುವ ಕಾರಣ ಕಾರ್ಮಿಕ ಕುಟುಂಬಗಳು ಬೇರೆಡೆಗೆ ವಲಸೆ ಹೋಗಿದ್ದು, ಈ ಹಿನ್ನಲೆಯಲ್ಲಿ ಆಸ್ಪತ್ರೆಯಲ್ಲಿ ಆರೋಗ್ಯ ಸೇವೆಗಳು ಕ್ಷೀಣಗೊಂಡಿವೆ. ಪ್ರಸ್ತುತ ಕೊರೋನಾ ವೈರಸ್ ಸೋಂಕು ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿದ್ದು, ಸೋಂಕಿತರಿಗೆ ಚಿಕಿತ್ಸೆ ನೀಡುವುದೇ ದೊಡ್ಡ ಸವಾಲಾಗಿ ಪರಿಣಮಿಸಿದೆ. ಜಿಲ್ಲಾ ಮಟ್ಟದಲ್ಲಿ ಈಗಾಗಲೇ ಮೆಗ್ಗಾನ್ ಆಸ್ಪತ್ರೆಯಲ್ಲಿ ಪತ್ಯೇಕವಾಗಿ ಕೋವಿಡ್-೧೯ ಆಸ್ಪತ್ರೆ ತೆರೆಯಲಾಗಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಇದೀಗ ಜಿಲ್ಲಾಡಳಿತ ತಾಲೂಕು ಮಟ್ಟದಲ್ಲಿಯೇ ಚಿಕಿತ್ಸೆಗೆ ಆಸ್ಪತ್ರೆಗಳನ್ನು ಗುರುತಿಸುವ ಕಾರ್ಯ ಕೈಗೊಂಡಿದೆ. ಈ ಹಿನ್ನಲೆಯಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ನೇತೃತ್ವದ ತಂಡ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಈಗಾಗಲೇ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಪೂರ್ವ ಸಿದ್ದತೆಗಳನ್ನು ಕೈಗೊಳಲಾಗಿದೆ.
ಜಿಲ್ಲಾ ಆರೋಗ್ಯಾಧಿಕಾರಿಗಳು, ತಹಸೀಲ್ದಾರ್ ಶಿವಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ, ಕಂದಾಯಾಧಿಕಾರಿ ಪ್ರಶಾಂತ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment