ಭದ್ರಾವತಿ, ಜು. ೭: ನಗರದ ಹೊಸಮನೆ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ವ್ಯಕ್ತಿಯೊಬ್ಬರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಈ ಹಿನ್ನಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಕಂಟೈನ್ಮೆಂಟ್ ವಲಯವೆಂದು ಘೋಷಿಸಲಾಗಿದೆ.
ಕಳೆದ ಒಂದು ವಾರದ ಹಿಂದೆ ಹಳೇನಗರ ಗಾಂಧಿನಗರದ ಮೊದಲಿಯಾರ್ ಸಮುದಾಯ ಭವನದ ಬಳಿ ಒಂದೇ ಮನೆಯ ೫ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಈ ಪೈಕಿ ಸೋಂಕಿಗೆ ಒಳಗಾಗಿದ್ದ ಮಹಿಳೆಯೊಬ್ಬರ ೪೮ ವರ್ಷದ ಪತಿಗೆ ಇದೀಗ ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ ಹಿನ್ನಲೆಯಲ್ಲಿ ವ್ಯಕ್ತಿ ವಾಸವಿದ್ದ ಮನೆಯ ೧೦೦ ಹಾಗೂ ೨೦೦ ಮೀ. ವ್ಯಾಪ್ತಿಯಲ್ಲಿ ಕಂಟೈನ್ಮೆಂಟ್ ವಲಯವನ್ನಾಗಿಸಲಾಗಿದೆ. ತಾಲೂಕಿನಲ್ಲಿ ಒಟ್ಟು ಸುಮಾರು ೨೫ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ದಿನದಿಂದ ದಿನಕ್ಕೆ ಸೀಲ್‌ಡೌನ್ ಪ್ರದೇಶಗಳು ಹೆಚ್ಚಾಗುತ್ತಿದ್ದು, ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ವ್ಯಾಪಾರ-ವಹಿವಾಟು ಸಂಜೆ ೬ಕ್ಕೆ ಬಂದ್:
ರಾಜ್ಯದೆಲ್ಲೆಡೆ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ನಗರದಲ್ಲಿ ಕಳೆದ ೫-೬ ದಿನಗಳಿಂದ ವಿವಿಧ ಅಂಗಡಿ ಮುಂಗಟ್ಟುಗಳ ವ್ಯಾಪಾರಸ್ಥರು, ಬೀದಿಬದಿ ವ್ಯಾಪಾರಿಗಳು ಸ್ವಯಂ ಪ್ರೇರಣೆಯಿಂದ ಸಂಜೆ ೬ ಗಂಟೆಗೆ ವ್ಯಾಪಾರ, ವಹಿವಾಟು ಸ್ಥಗಿತಗೊಳಿಸಿ ಅಂಗಡಿ ಮುಂಗಟ್ಟು ಬಂದ್ ಮಾಡುತ್ತಿದ್ದು, ಇದರಿಂದಾಗಿ ಸಂಜೆ ವೇಳೆ ಪ್ರಮುಖ ವಾಣಿಜ್ಯ ರಸ್ತೆಗಳಲ್ಲಿ ಜನದಟ್ಟಣೆ ನಿಯಂತ್ರಣಕ್ಕೆ ಬರುತ್ತಿದೆ. ಸೋಂಕು ಹೆಚ್ಚಿನ ರೀತಿಯಲ್ಲಿ ಹರಡದಂತೆ ಎಚ್ಚರ ವಹಿಸಲಾಗುತ್ತಿದೆ.
No comments:
Post a Comment