ಭದ್ರಾವತಿಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಳೇನಗರದ ಕನಕಮಂಟಪ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ೭೪ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ ತಾಲೂಕು ದಂಡಾಧಿಕಾರಿ ತಹಸೀಲ್ದಾರ್ ಎಚ್.ಸಿ ಶಿವಕುಮಾರ್ ಧ್ವಜಾರೋಹಣ ನೆರವೇರಿಸಿದರು.
ಭದ್ರಾವತಿ, ಆ. ೧೫: ಎಲ್ಲರೂ ಒಗ್ಗಟ್ಟಾಗಿ ಕೊರೋನಾ ವೈರಸ್ ನಿರ್ಮೂಲನೆಗೆ ಪಣತೊಡುವ ಮೂಲಕ ದೇಶದ ಸಮಗ್ರ ಅಭಿವೃದ್ಧಿಗೆ ಶ್ರಮಿಸಬೇಕೆಂದು ತಾಲೂಕು ದಂಡಾಧಿಕಾರಿ ತಹಸೀಲ್ದಾರ್ ಎಚ್.ಸಿ ಶಿವಕುಮಾರ್ ತಿಳಿಸಿದರು.
ಅವರು ಶನಿವಾರ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಳೇನಗರದ ಕನಕಮಂಟಪ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ೭೪ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ವ್ಯಾಪಾರಕ್ಕಾಗಿ ದೇಶಕ್ಕೆ ಬಂದ ಬ್ರಿಟಿಷರಿಂದ ಸ್ವಾತಂತ್ರ್ಯ ಪಡೆಯಲು ಸುಧೀರ್ಘ ಹೋರಾಟ ನಡೆಸಲಾಗಿದೆ. ಮಹಾತ್ಮಗಾಂಧಿ ಅವರ ನೇತೃತ್ವದಲ್ಲಿ ಆಹಿಂಸಾ ಮಾರ್ಗದ ಹೋರಾಟದ ಜೊತೆಗೆ ತ್ಯಾಗ-ಬಲಿದಾನಗಳು ನಡೆದಿವೆ. ದೇಶದ ಸ್ವಾತಂತ್ರ್ಯದ ಮಹತ್ವ ಪ್ರತಿಯೊಬ್ಬರು ಅರಿತುಕೊಳ್ಳಬೇಕೆಂದರು.
ಪ್ರಸ್ತುತ ವಿಶ್ವದೆಲ್ಲೆಡೆ ಭಯೋತ್ಪಾದನೆ ಚಟುವಟಿಕೆಗಳು ಹೆಚ್ಚಾಗುತ್ತಿದ್ದು, ಈ ಹಿನ್ನಲೆಯಲ್ಲಿ ಭಯೋತ್ಪಾದನೆ ನಿರ್ಮೂಲನೆಯಾಗಬೇಕು. ದೇಶದಲ್ಲಿ ಎಲ್ಲಾ ಧರ್ಮದವರು ಸೌಹಾರ್ದತೆಯಿಂದ, ಶಾಂತಿಯಿಂದ ಒಗ್ಗಟ್ಟಾಗಿ ಬದುಕಬೇಕಾಗಿದೆ. ಮಹಾತ್ಮಗಾಂಧಿ ಅವರ ರಾಮರಾಜ್ಯದ ಕನಸು ನನಸಾಗಬೇಕು. ಇದೀಗ ವಿಶ್ವದ ಎಲ್ಲಾ ರಾಷ್ಟ್ರಗಳಲ್ಲೂ ಜನರನ್ನು ಭಯಭೀತರನ್ನಾಸುತ್ತಿರುವ, ಸಂಕಷ್ಟಕ್ಕೆ ತಳ್ಳುತ್ತಿರುವ ಕೆಟ್ಟ ಮಹಾಮಾರಿ ಕೊರೋನಾ ವೈರಸ್ ದೇಶದಿಂದ ನಿರ್ಮೂಲನೆಯಾಗಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ತಮ್ಮ ಜವಾಬ್ದಾರಿಗಳನ್ನು ಅರಿತು ಇದರ ನಿರ್ಮೂಲನೆ ಮುಂದಾಗಬೇಕೆಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ಕ್ಷೇತ್ರದ ಸರ್ವತೋಮುಖ ಅಭಿವೃದ್ದಿಗೆ ಹೆಚ್ಚಿನ ಗಮನ ನೀಡಲಾಗುತ್ತಿದೆ. ಕ್ಷೇತ್ರದ ಎಲ್ಲಾ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಜನರ ಸಮಸ್ಯೆಗಳನ್ನು ಅರಿತು ಸ್ಪಂದಿಸಬೇಕು. ಪ್ರಸ್ತುತ ಕ್ಷೇತ್ರದಲ್ಲಿ ವಿಐಎಸ್‌ಎಲ್ ಮತ್ತು ಎಂಪಿಎಂ ಎರಡು ಕಾರ್ಖಾನೆಗಳು ಸಂಕಷ್ಟಕ್ಕೆ ಒಳಗಾಗಿದ್ದು, ಎಂಪಿಎಂ ಕಾರ್ಖಾನೆ ಪುನರ್ ಆರಂಭಗೊಳ್ಳಬೇಕು. ಆ ಮೂಲಕ ಸಾವಿರಾರು ನಿರುದ್ಯೋಗಿಗಳಿಗೆ ಉದ್ಯೋಗ ಲಭಿಸಬೇಕು ಎಂದರು.
ತಾಲೂಕು ಪಂಚಾಯಿತಿ ಅಧ್ಯಕ್ಷೆ ಡಿ. ಲಕ್ಷ್ಮೀದೇವಿ, ಕಾರ್ಯನಿರ್ವಹಣಾಧಿಕಾರಿ ಡಾ. ಜಿ. ಮಂಜುನಾಥ್, ನಗರಸಭೆ ಪೌರಾಯುಕ್ತ ಮನೋಹರ್, ಜಿಲ್ಲಾಪಂಚಾಯಿತಿ ಸದಸ್ಯ ಎಸ್. ಮಣಿಶೇಖರ್, ಪೊಲೀಸ್ ಉಪಾಧೀಕ್ಷಕ ಸುಧಾಕರ ಎಸ್. ನಾಯ್ಕ, ಎಪಿಎಂಸಿ ಅಧ್ಯಕ್ಷ ಐ.ಈ ಲವೇಶ್‌ಗೌಡ, ವಲಯ ಅರಣ್ಯಾಧಿಕಾರಿ ಮಂಜುನಾಥ್, ರಂಗದಾಸೋಹಿ ಎಸ್.ಜಿ ಶಂಕರಮೂರ್ತಿ, ಮುಖಂಡರಾದ ರಮಾಕಾಂತ, ಗಂಗಾಧರ್, ಬಾಷಾ, ಮಂಜುಳರಾಮಚಂದ್ರಪ್ಪ, ರೂಪನಾರಾಯಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಇದಕ್ಕೂ ಮೊದಲು ಧ್ವಜಾರೋಹಣ ಕಾರ್ಯಕ್ರಮದಲ್ಲಿ ನಗರದ ಸಶಸ್ತ್ರ ಮೀಸಲುಪಡೆ ಪೊಲೀಸ್ ಠಾಣಾಧಿಕಾರಿ ರಂಗಸ್ವಾಮಿ ಧ್ವಜವಂದನೆ ಗೌರವ ಸ್ವೀಕರಿಸಿದರು. ಸಶಸ್ತ್ರ ಮೀಸಲು ಪಡೆ, ಗೃಹ ರಕ್ಷಕ ದಳ ಪಾಲ್ಗೊಂಡಿದ್ದವು. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಜೊತೆಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರಿಗೆ ಉಚಿತವಾಗಿ ಮಾಸ್ಕ್, ಹ್ಯಾಂಡ್‌ಗ್ಲೋಸ್‌ಗಳನ್ನು ವಿತರಿಸಲಾಯಿತು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಅಪೇಕ್ಷ ಮಂಜುನಾಥ್ ಕಾರ್ಯಕ್ರಮ ನಿರೂಪಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ಸ್ವಾಗತಿಸಿದರು.
No comments:
Post a Comment