Tuesday, August 18, 2020

ಸಿಂಗನಮನೆ ಗ್ರಾ.ಪಂ. ನರೇಗಾ ಉತ್ತಮ ಸ್ಥಾನ : ಪಿಡಿಓ ಸೋಮಶೇಖರಪ್ಪಗೆ ಪ್ರಶಸ್ತಿ

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿರುವ ಭದ್ರಾವತಿ ತಾಲೂಕಿನ ಸಿಂಗನಮನೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂ.ಎಲ್ ಸೋಮಶೇಖರಪ್ಪ ಅವರಿಗೆ ಈ ಬಾರಿ ತಾಲೂಕು ಮಟ್ಟದ ಪ್ರಶಸ್ತಿ ಲಭಿಸಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್, ತಾ.ಪಂ. ಡಿ. ಲಕ್ಷ್ಮೀದೇವಿ ಸೇರಿದಂತೆ ಇನ್ನಿತರರು ಪ್ರಶಸ್ತಿ ಪತ್ರ ವಿತರಿಸಿ ಅಭಿನಂದಿಸಿದರು.
ಭದ್ರಾವತಿ, ಆ. ೧೮: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿರುವ ತಾಲೂಕಿನ ಸಿಂಗನಮನೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂ.ಎಲ್ ಸೋಮಶೇಖರಪ್ಪ ಅವರಿಗೆ ಈ ಬಾರಿ ತಾಲೂಕು ಮಟ್ಟದ ಪ್ರಶಸ್ತಿ ಲಭಿಸಿದೆ.
      ಒಂದೆಡೆ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಈ ನಡುವೆ ಉದ್ಯೋಗವಿಲ್ಲದೆ ಗ್ರಾಮೀಣ ಭಾಗದ ನಿವಾಸಿಗಳು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ವರದಾನವಾಗಿದ್ದು, ಈ ಯೋಜನೆಯನ್ನು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಸೋಮಶೇಖರಪ್ಪ ಹೆಚ್ಚಿನ ಶ್ರಮವಹಿಸಿದ್ದು, ಉತ್ತಮ ಸ್ಥಾನ ಲಭಿಸಿದೆ. ಈ ಹಿನ್ನಲೆಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೭೪ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ತಾಲೂಕು ಪಂಚಾಯಿತಿ ವತಿಯಿಂದ ಪ್ರಶಸ್ತಿ ಪತ್ರ ವಿತರಿಸಿ ಸನ್ಮಾನಿಸಿ ಅಭಿನಂದಿಸಲಾಯಿತು.
    ಶಾಸಕ ಬಿ.ಕೆ ಸಂಗಮೇಶ್ವರ್, ತಾ.ಪಂ. ಅಧ್ಯಕ್ಷೆ ಡಿ. ಲಕ್ಷ್ಮೀದೇವಿ, ತಹಸೀಲ್ದಾರ್ ಎಚ್.ಸಿ ಶಿವಕುಮಾರ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಡಾ. ಜಿ. ಮಂಜುನಾಥ್, ನಗರಸಭೆ ಪೌರಾಯುಕ್ತ ಮನೋಹರ್, ಜಿ.ಪಂ. ಸದಸ್ಯ ಎಸ್. ಮಣಿಶೇಖರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment