Tuesday, August 11, 2020

ವೃದ್ಧಾಪ್ಯ ವೇತನ ಮಂಜೂರಾತಿಗೆ ಎಎಪಿ ಆಗ್ರಹ

ಸುಮಾರು ೭-೮ ತಿಂಗಳುಗಳಿಂದ ಹಿರಿಯ ನಾಗರೀಕರಿಗೆ ವೃದ್ಧಾಪ್ಯ ವೇತನ ಸಿಗದೆ ಸಂಕಷ್ಟಕ್ಕೆ ಒಳಗಾಗಿದ್ದು, ತಕ್ಷಣ ವೇತನ ಮಂಜೂರಾತಿ ಮಾಡುವಂತೆ ಆಗ್ರಹಿಸಿ ಆಮ್ ಆದ್ಮಿ ಪಾರ್ಟಿ ವತಿಯಿಂದ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ

ಭದ್ರಾವತಿ, ಆ. ೧೧: ಸುಮಾರು ೭-೮ ತಿಂಗಳುಗಳಿಂದ ಹಿರಿಯ ನಾಗರೀಕರಿಗೆ ವೃದ್ಧಾಪ್ಯ ವೇತನ ಸಿಗದೆ ಸಂಕಷ್ಟಕ್ಕೆ ಒಳಗಾಗಿದ್ದು, ತಕ್ಷಣ ವೇತನ ಮಂಜೂರಾತಿ ಮಾಡುವಂತೆ ಆಗ್ರಹಿಸಿ ಆಮ್ ಆದ್ಮಿ ಪಾರ್ಟಿ ವತಿಯಿಂದ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಪ್ರಸ್ತುತ ಎಲ್ಲೆಡೆ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಸರಿಯಾಗಿ ಯಾವುದೇ ಉದ್ಯೋಗ, ವಹಿವಾಟುಗಳಿಲ್ಲದೆ ಶ್ರೀಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಮತ್ತೊಂದೆಡೆ ವೃದ್ದಾಪ್ಯ ವೇತನವಿಲ್ಲದೆ ಹಿರಿಯ ನಾಗರೀಕರು ತೊಂದರೆ ಅನುಭವಿಸುವಂತಾಗಿದೆ. ತಕ್ಷಣ ಹಿರಿಯ ನಾಗರೀಕರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಆಗ್ರಹಿಸಲಾಯಿತು.
ತಾಲೂಕು ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುಮಾರು ೧೦ ಮಂದಿಗೆ ಸೋಂಕು ತಗುಲಿರುವ ಹಿನ್ನಲೆಯಲ್ಲಿ ಕಳೆದ ೪ ದಿನಗಳಿಂದ ಸೀಲ್‌ಡೌನ್ ಮಾಡಲಾಗಿದ್ದು, ಈ ಹಿನ್ನಲೆಯಲ್ಲಿ ಶಿರಸ್ತೇದಾರ್ ಮಂಜಾನಾಯ್ಕರವರು ಮೊಬೈಲ್ ಮೂಲಕ ಪ್ರತಿಭಟನಾಕಾರರ ಮನವಿಯನ್ನು ಆಲಿಸಿ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಪ್ರತಿಭಟನಾಕಾರರು ಪತ್ರಿಕೆಗೆ ಮಾಹಿತಿ ನೀಡಿದರು.
ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್ ಪ್ರತಿಭಟನೆ ನೇತೃತ್ವ ವಹಿಸಿದ್ದರು. ತಾಲೂಕು ಉಪಾಧ್ಯಕ್ಷ ಇಬ್ರಾಹಿಂ ಖಾನ್, ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್ ಶೆಟ್ಟಿ ಬಣ) ತಾಲೂಕು ಅಧ್ಯಕ್ಷ ಬಿ.ವಿ ಗಿರೀಶ್, ಮುಖಂಡ ರಾಜೇಂದ್ರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

No comments:

Post a Comment