ಭದ್ರಾವತಿ: ನಗರಸಭೆ ವ್ಯಾಪ್ತಿಯ ಉಜ್ಜನಿಪುರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಿಂಭಾಗ ಹೊಸ ಆನೆಕೊಪ್ಪ ಗ್ರಾಮದಲ್ಲಿ ತೆರೆಯಲಾಗಿರುವ ಎಂಎಸ್‌ಐಎಲ್ ಮದ್ಯಂಗಡಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ಬೇರೆಡೆಗೆ ಸ್ಥಳಾಂತರಿಸುವಂತೆ ಒತ್ತಾಯಿಸಿ ಹಾಗು ನಗರದಲ್ಲಿ ಖಾಸಗಿ ಶಾಲೆಗಳು ಪೋಷಕರಿಂದ ಬಲವಂತವಾಗಿ ಶುಲ್ಕ ವಸೂಲಾತಿ ಮಾಡುತ್ತಿರುವುದನ್ನು ವಿರೋಧಿಸಿ ಆ.12ರಂದು ತಾಲೂಕು ಕಛೇರಿ ಮುಂಭಾಗ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಸಂಯುಕ್ತ ಜನತಾದಳ ರಾಜ್ಯ ಯುವ ಮುಖಂಡ ಶಶಿಕುಮಾರ್ ಎಸ್ ಗೌಡ ತಿಳಿಸಿದ್ದಾರೆ.
ತಾಲೂಕಿನಲ್ಲಿ ಮದ್ಯದಂಗಡಿಗಳಿಂದ ಸಾರ್ವಜನಿಕರಿಗೆ ಉಂಟಾಗುತ್ತಿರುವ ಸಮಸ್ಯೆಗಳ ವಿರುದ್ಧ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರಲಾಗುತ್ತಿದೆ. ಕೆಲವು ದಿನಗಳ ಹಿಂದೆ ಹೊಸ ಆನೆಕೊಪ್ಪ ಗ್ರಾಮಸ್ಥರು ಗ್ರಾಮದಲ್ಲಿರುವ ಎಂಎಸ್‌ಐಎಲ್ ಮದ್ಯದಂಗಡಿ ಎದುರು ಪ್ರತಿಭಟನೆ ನಡೆಸಿ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿದ್ದಾರೆ.
ಈ ಮದ್ಯದಂಗಡಿಯಿಂದ ಪ್ರತಿದಿನ ಇಲ್ಲಿನ ನಿವಾಸಿಗಳಿಗೆ ಕಿರಿಕಿರಿಯಾಗುತ್ತಿದೆ. ಎಂಆರ್‌ಪಿ ದರಗಿಂತ ಹೆಚ್ಚಿನ ದರಕ್ಕೆ ಮದ್ಯ ಮಾರಾಟ ಮಾಡಲಾಗುತ್ತಿದೆ. ಅಲ್ಲದೆ ಮದ್ಯ ಸೇವೆನೆಗೆ ಪ್ರತ್ಯೇಕ ವ್ಯವಸ್ಥೆ ಮಾಡಿಕೊಡಲಾಗಿದೆ. ಈ ಹಿನ್ನಲೆಯಲ್ಲಿ ಈ ಮದ್ಯದಂಗಡಿ ವಿರುದ್ಧ ಅಬಕಾರಿ ಅಧಿಕಾರಿಗಳು ದೂರು ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಬೇಕೆಂದು ಈಗಾಗಲೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ, ತಹಸೀಲ್ದಾರ್‌ಗೆ ಮನವಿ ಸಲ್ಲಿಸಿ ಒತ್ತಾಯಿಸಲಾಗಿತ್ತು.
ನಗರದಲ್ಲಿ ಖಾಸಗಿ ಶಾಲೆಗಳು ಪೋಷಕರಿಂದ ಬಲವಂತದಿಂದ ಶುಲ್ಕ ವಸೂಲಾತಿ ಮಾಡುತ್ತಿವೆ. ಪ್ರಸ್ತುತ ಎಲ್ಲೆಡೆ ಮಹಾಮಾರಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಸೋಂಕು ನಿಯಂತ್ರಣಕ್ಕೆ ಈಗಾಗಲೇ ಸರ್ಕಾರ ಲಾಕ್‌ಡೌನ್ ಸೇರಿದಂತೆ ಇನ್ನಿತರ ಕಠಿಣ ಕ್ರಮಗಳನ್ನು ಕೈಗೊಂಡ ಹಿನ್ನಲೆಯಲ್ಲಿ ವ್ಯಾಪಾರ, ವಹಿವಾಟು, ಉದ್ಯೋಗವಿಲ್ಲದೆ ಶ್ರೀಸಾಮಾನ್ಯರು ಸಾಕಷ್ಟು ಸಂಕಷ್ಟ ಎದುರಿಸುವಂತಾಗಿದೆ. ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ಖಾಸಗಿ ಶಾಲೆಗಳು ಬಲವಂತವಾಗಿ ಶುಲ್ಕ ವಸೂಲಾತಿ ಮಾಡುವುದು ಸರಿಯಲ್ಲ. ಈಗಾಗಲೇ ಸರ್ಕಾರ ಸಹ ಈ ಸಂಬಂಧ ಆದೇಶ ಹೊರಡಿಸಿದ್ದು, ಅಲ್ಲದೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ, ತಹಸೀಲ್ದಾರ್‌ಗೆ ಸಹ ಮನವಿ ಸಲ್ಲಿಸಲಾಗಿದೆ. ಆದರೂ ಸಹ ಇದುವರೆಗೂ ಖಾಸಗಿ ಶಾಲೆಗಳ ವಿರುದ್ಧ ಕ್ರಮ ಕೈಗೊಂಡಿಲ್ಲ. ಈ ಹಿನ್ನಲೆಯಲ್ಲಿ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು, ಸಂಘ-ಸಂಸ್ಥೆಗಳ ಪ್ರಮುಖರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಿದ್ದಾರೆ.
No comments:
Post a Comment