Tuesday, August 18, 2020

ವಿಐಎಸ್‌ಎಲ್-ಎಂಪಿಎಂ ಅಭಿವೃದ್ಧಿಗಾಗಿ ಜಿಲ್ಲಾ ಬಿಜೆಪಿ ಘಟಕ ಹೋರಾಟ : ಮೇಘರಾಜ್


ಭದ್ರಾವತಿಯಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಮೇಘರಾಜ್ ಮಾತನಾಡಿದರು.
ಭದ್ರಾವತಿ, ಆ. ೧೮: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಹಾಗು ರಾಜ್ಯ ಸರ್ಕಾರಿ ಸ್ವಾಮ್ಯದ ಮೈಸೂರು ಕಾಗದ ಕಾರ್ಖಾನೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷದ ಜಿಲ್ಲಾ ಘಟಕ ಸಹ ಕೇಂದ್ರ ಮತ್ತು ರಾಜ್ಯ ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತವಾಗಿದೆ ಎಂದು ಜಿಲ್ಲಾಧ್ಯಕ್ಷ ಮೇಘರಾಜ್ ತಿಳಿಸಿದರು.
        ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ರಾಜಕೀಯ ಪಕ್ಷವಾದರೂ ಸಹ ಇತರೆ ರಾಜಕೀಯ ಪಕ್ಷಗಳಿಗಿಂತ ಭಿನ್ನತೆಯನ್ನು ಹೊಂದಿದೆ. ದೇಶದ ಸಂಸ್ಕೃತಿ, ಆಚಾರ-ವಿಚಾರ, ದೇಶ ಭಕ್ತಿ, ಆದರ್ಶ ಗುಣಗಳನ್ನು ಮೈಗೂಡಿಸಿಕೊಂಡಿದೆ. ಈ ಹಿನ್ನಲೆಯಲ್ಲಿ ಎಲ್ಲಾ ವಿಚಾರಗಳ ಬಗ್ಗೆ ಸಹ ಗಮನ ಹರಿಸುತ್ತಿದೆ ಎಂದರು.
      ಕೋವಿಡ್-೧೯ರ ಹಿನ್ನಲೆಯಲ್ಲಿ ಈ ಬಾರಿ ಪಕ್ಷ ಸಂಘಟನೆ ವಿಳಂಬವಾಗಿದ್ದು, ಇದೀಗ ಜಿಲ್ಲೆಯ ಎಲ್ಲಾ ೧೦ ಮಂಡಲಗಳಲ್ಲಿ ಸಂಘಟನೆಗಳನ್ನು ಪುನಃ ಬಲಪಡಿಸುವ ನಿಟ್ಟಿನಲ್ಲಿ ಪ್ರವಾಸ ಕೈಗೊಳ್ಳಲಾಗಿದೆ. ಈಗಾಗಲೇ ೩ ಮಂಡಲಗಳ ಪ್ರವಾಸ ಮುಕ್ತಾಯಗೊಂಡಿದ್ದು, ಇದೀಗ ೪ನೇ ಪ್ರವಾಸ ಭದ್ರಾವತಿಯಲ್ಲಿ ನಡೆಯುತ್ತಿದೆ. ಭದ್ರಾವತಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷವನ್ನು ಹೆಚ್ಚಿನ ರೀತಿಯಲ್ಲಿ ಸಂಘಟಿಸುವ ಅಗತ್ಯವಿದೆ ಎಂದರು.
     ಮುಂಬರುವ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳು ಕಣಕ್ಕಿಳಿಯದ್ದು, ಅಧಿಕಾರದ ಚುಕ್ಕಾಣಿ ಹಿಡಿಯುವ ವಿಶ್ವಾಸವಿದೆ. ಭದ್ರಾವತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲೂ ಪಕ್ಷವನ್ನು ಅಧಿಕಾರಕ್ಕೆ ತರುವ ಎಲ್ಲಾ ತಂತ್ರಗಾರಿಕೆಗಳನ್ನು ನಡೆಸಲಾಗುತ್ತಿದೆ. ಈಗಾಗಲೇ ಕೇಂದ್ರ ಹಾಗು ರಾಜ್ಯ ಸರ್ಕಾರಗಳ ಅನುದಾನದಿಂದ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕ್ಷೇತ್ರದಲ್ಲಿ ಕೈಗೊಳ್ಳಲಾಗಿದೆ. ಈ ಹಿನ್ನಲೆಯಲ್ಲಿ ಇಲ್ಲಿನ ಮತದಾರರು ಸಹ ಬಿಜೆಪಿ ಪಕ್ಷವನ್ನು ಬೆಂಬಲಿಸುವ ವಿಶ್ವಾಸವಿದೆ ಎಂದರು.
     ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ ಶ್ರೀನಾಥ್, ಜಿ. ಧರ್ಮಪ್ರಸಾದ್, ಕಾರ್ಯದರ್ಶಿಗಳಾದ ಚನ್ನೇಶ್, ಹನುಮಂತನಾಯ್ಕ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment