ಭದ್ರಾವತಿ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಹೆಸರಿಡಲು ಆಗ್ರಹಿಸಿ ಸೋಮವಾರ ಸತ್ಯಾಗ್ರಹ ನಡೆಸುವ ಮೂಲಕ ತಹಸೀಲ್ದಾರ್ ಎಚ್.ಸಿ ಶಿವಕುಮಾರ್‌ಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಸೆ. ೧೪: ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಹೆಸರು ನಾಮಕರಣ ಮಾಡಲು ಕ್ಷೇತ್ರದ ಎಲ್ಲರೂ ಸಹಕಾರ ನೀಡಬೇಕೆಂದು ಮಾಜಿ ಶಾಸಕ ವೈಎಸ್‌ವಿ ದತ್ತಾ ಮನವಿ ಮಾಡಿದರು.
ಅವರು ಸೋಮವಾರ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಲ್ಲಿ ಮಾನವ ಹಕ್ಕುಗಳ ಹೋರಾಟ ಸಮಿತಿ ಮತ್ತು ಎಂ.ಜೆ ಅಪ್ಪಾಜಿ ಅಭಿಮಾನಿಗಳ ಸಂಘದ ವತಿಯಿಂದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಹೆಸರು ನಾಮಕರಣಗೊಳಿಸಲು ಆಗ್ರಹಿಸಿ ಹಮ್ಮಿಕೊಳ್ಳಲಾಗಿದ್ದ ಸತ್ಯಾಗ್ರಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಅಪ್ಪಾಜಿ ಅವರೊಂದಿಗೆ ಸುಮಾರು ೨ ದಶಕಗಳಿಗೂ ಹೆಚ್ಚು ಕಾಲದ ಒಡನಾಟ ಹೊಂದಿದ್ದು, ಅಪ್ಪಾಜಿ ಕೇವಲ ರಾಜಕಾರಣಿಯಾಗಿರಲಿಲ್ಲ. ಭದ್ರಾವತಿ ಕ್ಷೇತ್ರದ ಜನನಾಯಕರಾಗಿದ್ದ ಅವರು ಎಂದೆಂದಿಗೂ ಜನರ ಮನಸ್ಸಿನಲ್ಲಿ ಉಳಿದುಕೊಳ್ಳುವ ವ್ಯಕ್ತಿಯಾಗಿದ್ದಾರೆ. ಬಸ್ ನಿಲ್ದಾಣ ನಿರ್ಮಾಣಕ್ಕಾಗಿ ಅವರ ಶ್ರಮ ಹೆಚ್ಚಿನದ್ದಾಗಿದ್ದು, ಈ ಹಿನ್ನಲೆಯಲ್ಲಿ ಅವರ ಹೆಸರು ನಾಮಕರಣಗೊಳಿಸುವಲ್ಲಿ ಯಾವುದೇ ತಪ್ಪಿಲ್ಲ ಎಂದರು.
ಪ್ರಸ್ತುತ ನಡೆಯುತ್ತಿರುವ ಹೋರಾಟ ಸದ್ಯಕ್ಕೆ ಯಶಸ್ವಿಯಾಗುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿವೆ. ಇದೊಂದು ಪಕ್ಷಾತೀತ ಹೋರಾಟವಾಗಿದ್ದು, ಈ ಹೋರಾಟಕ್ಕೆ ಕ್ಷೇತ್ರದ ಎಲ್ಲರೂ ಸಹಕಾರ ನೀಡುತ್ತಾರೆಂಬ ವಿಶ್ವಾಸವಿದೆ. ಒಂದು ವೇಳೆ ಇದು ರಾಜಕೀಯ ತಿರುವು ಪಡೆದುಕೊಂಡಲ್ಲಿ ನಮ್ಮ ಹೋರಾಟ ಸಹ ಬೇರೆ ರೀತಿಯಲ್ಲಿ ಸಾಗಲಿದೆ. ಸರ್ಕಾರ ಸಹ ಈ ನಿಟ್ಟಿನಲ್ಲಿ ಸಹಕಾರ ನೀಡುವ ಜೊತೆಗೆ ಈ ಕ್ಷೇತ್ರದ ಜನರ ಮನಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕೆಂದರು.
ಅಪ್ಪಾಜಿ ಒಡನಾಡಿ, ನಗರಸಭೆ ಮಾಜಿ ಅಧ್ಯಕ್ಷ ಆರ್. ಕರುಣಾಮೂರ್ತಿ ಮಾತನಾಡಿ, ಅಪ್ಪಾಜಿ ಅಂದು ಈ ಬಸ್ ನಿಲ್ದಾಣ ನಿರ್ಮಾಣಕ್ಕೆ ಕೈಗೊಂಡ ಶ್ರಮ ಯಾರು ಸಹ ಮರೆಯುವಂತಿಲ್ಲ. ಯಾವುದೇ ಸ್ವಾರ್ಥವಿಲ್ಲದೆ, ಜನರ ಕಲ್ಯಾಣಕ್ಕಾಗಿ ಅನೇಕ ಸವಾಲುಗಳನ್ನು ಸ್ವೀಕರಿಸಿ ಬಸ್ ನಿಲ್ದಾಣ ನಿರ್ಮಾಣಗೊಳ್ಳುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಈ ಹಿನ್ನಲೆಯಲ್ಲಿ ಕೇವಲ ಅಪ್ಪಾಜಿ ಹೆಸರನ್ನು ನಾಮಕರಣಗೊಳಿಸಿದರೆ ಸಾಲದು ಅವರ ಪುತ್ಥಳಿಯನ್ನು ನಿರ್ಮಿಸಬೇಕು. ಆ ಮೂಲಕ ಈ ಬಸ್ ನಿಲ್ದಾಣದ ರೂವಾರಿ ಯಾರು ಎಂಬುದು ಭವಿಷ್ಯದ ಜನರಿಗೆ ತಿಳಿದುಕೊಳ್ಳಲು ಸಹಕಾರಿಯಾಗುತ್ತದೆ ಎಂದರು.
ಭದ್ರಾವತಿ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಹೆಸರಿಡಲು ಸೋಮವಾರ ಹಮ್ಮಿಕೊಳ್ಳಲಾಗಿದ್ದ ಸತ್ಯಾಗ್ರಹದಲ್ಲಿ ಆಗ್ರಹಿಸಲಾಯಿತು.
ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಮಾತನಾಡಿ, ಅಪ್ಪಾಜಿಯವರು ತಮ್ಮ ೩ ದಶಕಗಳ ರಾಜಕೀಯ ಜೀವನದಲ್ಲಿ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಎಲ್ಲಾ ವರ್ಗದ ಜನರ ಏಳಿಗೆಗೆ ಶ್ರಮಿಸುವ ಮೂಲಕ ಜನರ ಮನಸ್ಸಿನಲ್ಲಿ ಅಚ್ಚಳಿಯದಂತೆ ಉಳಿದುಕೊಂಡಿದ್ದಾರೆ. ನಗರದಲ್ಲಿ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣ ಮಾಡುವುದು ಅಸಾಧ್ಯವಾಗಿದ್ದ ಸಂದರ್ಭದಲ್ಲಿ ಹಲವು ಸವಾಲುಗಳನ್ನು ಯಶಸ್ವಿಯಾಗಿ ಎದುರಿಸುವ ಮೂಲಕ ಬಸ್ ನಿಲ್ದಾಣ ನಿರ್ಮಿಸಿದ್ದು, ಇದೊಂದು ಸವಾಲಿನ ಕೆಲಸವಾಗಿದೆ. ಈ ಹಿನ್ನಲೆಯಲ್ಲಿ ಅವರ ಸ್ಮರಣಾರ್ಥ, ಅವರಿಗೆ ಗೌರವ ಸಲ್ಲಿಸುವ ಹಿನ್ನಲೆಯಲ್ಲಿ ನಿಲ್ದಾಣಕ್ಕೆ ಅವರ ಹೆಸರನ್ನು ನಾಮಕರಣಗೊಳಿಸಬೇಕು. ಇದಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಸಹ ಹೆಚ್ಚಿನ ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಡಾ. ಶ್ರೀನಿವಾಸ್ ಕರಿಯಣ್ಣ, ಜಿಲ್ಲಾ ಪಂಚಾಯಿತಿ ಸದಸ್ಯ ಎಸ್. ಮಣಿಶೇಖರ್, ಶಿವಮೊಗ್ಗ ಹಾಲು ಒಕ್ಕೂಟ(ಶಿಮೂಲ್) ಅಧ್ಯಕ್ಷ ಆನಂದ್, ಮುಖಂಡರಾದ ಬದರಿನಾರಾಯಣ, ಎಚ್.ಬಿ ರವಿಕುಮಾರ್, ಕರಿಯಪ್ಪ, ಫೀರ್ ಷರೀಫ್, ಎಸ್. ಮಂಜುನಾಥ್, ಜೆ.ಎನ್ ಚಂದ್ರಹಾಸ, ಬಿ.ವಿ ಗಿರೀಶ್, ಸಂದೇಶ್‌ಕುಮಾರ್, ಎನ್. ರಾಮಕೃಷ್ಣ, ಮೋಹನ್ ರಾವ್, ವಿಶಾಲಾಕ್ಷಿ, ಪುಷ್ಪಾವತಿ, ನೀಲಮ್ಮ, ಪಾರ್ವತಮ್ಮ, ಸರಸ್ವತಿ, ಟಿ.ಎನ್ ಲಕ್ಷ್ಮಮ್ಮ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. ಕೊನೆಯಲ್ಲಿ ತಹಸೀಲ್ದಾರ್ ಎಚ್.ಸಿ ಶಿವಕುಮಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
No comments:
Post a Comment