Monday, September 28, 2020

ಕರ್ನಾಟಕ ಬಂದ್‌ಗೆ ಬಹುತೇಕ ಸಂಘಟನೆಗಳ ಬೆಂಬಲ : ರೈತ ವಿರೋಧಿ ಕಾಯ್ದೆ ಹಿಂಪಡೆಯಲು ಆಗ್ರಹ

ಭದ್ರಾವತಿಯಲ್ಲಿ ಸೋಮವಾರ ಕರ್ನಾಟಕ ಬಂದ್‌ಗೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿ ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಸೆ. ೨೮: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತರಲು ಮುಂದಾಗಿರುವ ಜನ ವಿರೋಧಿ ಹಾಗು ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ರಾಜ್ಯಾದ್ಯಂತ ರೈತ ಸಂಘ ಸೇರಿದಂತೆ ಇನ್ನಿತರ ಸಂಘಟನೆಗಳಿಂದ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಕರ್ನಾಟಕ ಬಂದ್‌ಗೆ ನಗರದಲ್ಲಿ ಬಹುತೇಕ ಸಂಘಟನೆಗಳು ಬೆಂಬಲ ಸೂಚಿಸಿ ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದವು.
       ನಗರದ ಅಂಡರ್ ಬ್ರಿಡ್ಜ್ ಬಳಿ ಇರುವ ಅಂಬೇಡ್ಕರ್ ಪ್ರತಿಮೆ ಮಾಲಾರ್ಪಣೆ ಮಾಡಿದ ವಿವಿಧ ಸಂಘಟನೆಗಳ ಪ್ರಮುಖರು ಕೇಂದ್ರ ಹಾಗು ರಾಜ್ಯ ಸರ್ಕಾರಗಳ ಜನ ವಿರೋಧಿ ಮತ್ತು ರೈತ ವಿರೋಧಿ ಧೋರಣೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ತಕ್ಷಣ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿದರು.
       ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ, ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘ, ಭಾರತ ಕಮ್ಯೂನಿಸ್ಟ್ ಪಕ್ಷ(ಸಿಪಿಐ), ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ, ಜಾತ್ಯಾತೀತ ಜನತಾದಳ, ಆಮ್ ಆದ್ಮಿ ಪಾರ್ಟಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ, ಸ್ನೇಹಜೀವಿ ಬಳಗ, ಉಸ್ಮಾನಿಯಾ ಚಾರಿಟಬಲ್ ಟ್ರಸ್ಟ್, ವೆಲೆಫೇರ್ ಪಾರ್ಟಿ ಆಫ್ ಇಂಡಿಯಾ, ಕರ್ನಾಟಕ ರಕ್ಷಣಾ ವೇದಿಕೆ(ನಾರಾಯಣಗೌಡ ಬಣ), ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್‌ಶೆಟ್ಟಿ ಬಣ), ಸಿಐಟಿಯು, ಹಮಾಲರ ಸಂಘ, ಜನಕರ್ನಾಟಕ ಸಂಘಟನೆ, ಆದಿ ದ್ರಾವಿಡ ಹಿತರಕ್ಷಣಾ ಸಮಿತಿ, ತರಕಾರಿ ಮಂಡಿ ಮಾಲೀಕರ ಸಂಘ, ಕರ್ನಾಟಕ ಕೋಮು ಸೌಹಾರ್ದ ವೇದಿಕೆ, ಕರ್ನಾಟಕ ಜನಶಕ್ತಿ, ಮಹಿಳಾ ಮುನ್ನಡೆ, ಕೆ.ಜಿ.ಎನ್ ನೌಜವಾನ್ ಕಮಿಟಿ ಯುವ ಪಡೆ, ತಾಲೂಕು ಛಾಯಗ್ರಾಹಕರ ಸಂಘ, ಛಲವಾದಿ ಮಹಾಸಭಾ, ಫಾರುಕ್ ಎ.ಅಜಮ್ ಚಾರಿಟಬಲ್ ಟ್ರಸ್ಟ್, ಕನಾಟಕ ಜನ ಸೈನ್ಯ, ಕುವೆಂಪು ಪ್ರವಾಸಿ ವಾಹನ ಚಾಲಕರ ಮತ್ತು ಮಾಲೀಕರ ಸಂಘ, ಸಂಗೊಳ್ಳಿ ರಾಯಣ್ಣ ಸೇವಾ ಸಮಿತಿ, ಅಂಬೇಡ್ಕರ್ ಯುವಕರ ಸಂಘ, ಮಾದಗ ದಂಂಡೋರ, ತಾಲೂಕು ಕುಂಚ ಕಲಾವಿದರ ಸಂಘ ಸೇರಿದಂತೆ ಇನ್ನಿತರ ಸಂಘಟನೆಗಳು ಪಾಲ್ಗೊಂಡಿದ್ದವು.


ಭದ್ರಾವತಿಯಲ್ಲಿ ಸೋಮವಾರ ಕರ್ನಾಟಕ ಬಂದ್ ಬೆಂಬಲಿಸಿ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಮೆರವಣಿಗೆ ನಡೆಸಿ ಕೇಂದ್ರ ಹಾಗು ರಾಜ್ಯ ಸರ್ಕಾರಗಳ ರೈತ ವಿರೋಧಿ ಧೋರಣೆಗಳನ್ನು ಖಂಡಿಸಿದವು.
      ನಗರದಲ್ಲಿ ಬಂದ್ ಬಹುತೇಕ ಯಶಸ್ವಿಯಾಗಿದ್ದು, ಪೆಟ್ರೋಲ್ ಬಂಕ್, ಹೋಟೆಲ್, ಮಾಲ್‌ಗಳು, ಮಾರುಕಟ್ಟೆ ಸೇರಿದಂತೆ ಹಲವೆಡೆ ವ್ಯಾಪಾರ-ವಹಿವಾಟು ಸ್ಥಗಿತಗೊಂಡಿತ್ತು. ಬೆಳಿಗ್ಗೆಯಿಂದಲೇ ಅಂಗಡಿ ಮುಂಗಟ್ಟು ಮುಚ್ಚಲ್ಪಟ್ಟಿದ್ದವು. ಆಟೋ, ಟ್ಯಾಕ್ಸಿ, ಖಾಸಗಿ ಬಸ್‌ಗಳ ಸಂಚಾರ ಸ್ಥಗಿತಗೊಂಡಿತ್ತು. ಉಳಿದಂತೆ ಸರ್ಕಾರಿ ಬಸ್‌ಗಳು ಎಂದಿನಂತೆ ಸಂಚರಿಸಿದವು. ಸರ್ಕಾರಿ ಕಛೇರಿಗಳು ಎಂದಿನಂತೆ ತೆರೆಯಲ್ಪಟ್ಟಿದ್ದವು.

No comments:

Post a Comment