ಶಿಶು ಅಭಿವೃದ್ಧಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಭದ್ರಾವತಿ ಹೊಸಮನೆ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರಸೇನಾ ವಿನಾಯಕ ಸೇವಾ ಸಮಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೋಷಣ್ ಅಭಿಯಾನ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಸದಸ್ಯ ಎಸ್. ಮಣಿಶೇಖರ್, ವಿ. ಕದಿರೇಶ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
ಭದ್ರಾವತಿ, ಸೆ. ೩೦: ಮಗು ಜನಿಸುವ ಆರಂಭಕ್ಕೂ ಮೊದಲೇ ಗರ್ಭಿಣಿ ತಾಯಿ ಹಾಗು ಮಗುವಿನ ಆರೋಗ್ಯಕ್ಕೆ ಹೆಚ್ಚಿನ ಕಾಳಜಿ ವಹಿಸಲಾಗುತ್ತಿದ್ದು, ಇದರಿಂದಾಗಿ ಆರೋಗ್ಯವಂತ ಹಾಗು ಸದೃಢವಾದ ಮಕ್ಕಳ ಬೆಳವಣಿಗೆ ಸಾಧ್ಯವಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುರೇಶ್ ತಿಳಿಸಿದರು.
ಅವರು ಬುಧವಾರ ಶಿಶು ಅಭಿವೃದ್ಧಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹೊಸಮನೆ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರಸೇನಾ ವಿನಾಯಕ ಸೇವಾ ಸಮಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೋಷಣ್ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಾಸ್ತಾವಿಕವಾಗಿ ಮಾತನಾಡಿದರು.
ಪ್ರತಿ ವರ್ಷ ಸೆಪ್ಟಂಬರ್ ಮತ್ತು ಅಕ್ಟೋಬರ್ ತಿಂಗಳಿನಲ್ಲಿ ಪೋಷಣ್ ಅಭಿಯಾನ ಕೈಗೊಳ್ಳುವ ಮೂಲಕ ಗರ್ಭಿಣಿ, ಬಾಣಂತಿ ಮಹಿಳೆಯರಿಗೆ ಆರೋಗ್ಯ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಅಪೌಷ್ಠಿಕತೆ ಎದುರಾಗದಂತೆ ಎಚ್ಚರ ವಹಿಸುವುದು ಈ ಅಭಿಯಾನದ ಗುರಿಯಾಗಿದೆ. ಈ ಬಾರಿ ೪ ಉದ್ದೇಶಗಳೊಂದಿಗೆ ಸರ್ಕಾರದ ಇತರೆ ಇಲಾಖೆಗಳ, ಸ್ಥಳೀಯ ಸಂಸ್ಥೆಗಳ ಹಾಗು ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಅಭಿಯಾನ ಯಶಸ್ವಿಗೆ ಇಲಾಖೆ ಮುಂದಾಗಿದೆ ಎಂದರು.
ತಾಲೂಕಿನಾದ್ಯಂತ ಸುಮಾರು ೨೬೦ಕ್ಕೂ ಹೆಚ್ಚು ಅಂಗನವಾಡಿ ಕೇಂದ್ರಗಳಲ್ಲಿ ಈ ಬಾರಿ ಪೌಷ್ಠಿಕಾಂಶ ನೀಡುವ ಸಸಿಗಳನ್ನು ನೆಡುವ ಮೂಲಕ ಭವಿಷ್ಯದಲ್ಲಿ ಆ ಸಸಿಗಳು ಬೆಳವಣಿಗೆ ಹೊಂದಿ ಮಹಿಳೆಯರು ಮತ್ತು ಮಕ್ಕಳ ನೆರವಿಗೆ ಬರುವಂತಾಗಬೇಕೆಂಬ ಉದ್ದೇಶ ಹೊಂದಲಾಗಿದೆ. ಮಹಿಳೆಯರು ಮತ್ತು ಮಕ್ಕಳಲ್ಲಿ ಅಪೌಷ್ಠಿಕತೆ ಎದುರಾಗದಂತೆ ಅಂಗನವಾಡಿ ಕೇಂದ್ರಗಳಲ್ಲಿಯೇ ಪೌಷ್ಠಿಕ ಆಹಾರಗಳನ್ನು ಸಿದ್ದಪಡಿಸುವ ತರಬೇತಿ ಸಹ ನೀಡಲಾಗುತ್ತಿದೆ. ಅಲ್ಲದೆ ಪೌಷ್ಠಿಕ ಆಹಾರ ಪದಾರ್ಥಗಳನ್ನು ಗರ್ಭಿಣಿ ಹಾಗು ಬಾಣಂತಿ ಮಹಿಳೆಯರಿಗೆ ಇಲಾಖೆ ವತಿಯಿಂದ ಉಚಿತವಾಗಿ ನೀಡಲಾಗುತ್ತಿದೆ. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಈ ಯೋಜನೆ ಯಶಸ್ವಿಗೊಳಿಸಲು ಸಹಕರಿಯಾಗುವಂತೆ ಮೊಬೈಲ್‌ಗಳನ್ನು ಸಹ ನೀಡಲಾಗಿದೆ. ಈ ಅಭಿಯಾನಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯವಿದ್ದು, ಆಗ ಮಾತ್ರ ಯಶಸ್ವಿಯಾಗಲಿದೆ ಎಂದರು.
ಶಿಶು ಅಭಿವೃದ್ಧಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಭದ್ರಾವತಿ ಹೊಸಮನೆ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರಸೇನಾ ವಿನಾಯಕ ಸೇವಾ ಸಮಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೋಷಣ್ ಅಭಿಯಾನ ಕಾರ್ಯಕ್ರಮದಲ್ಲಿ ಮಕ್ಕಳಿಂದಲೇ ಅಭಿಯಾನ ಕುರಿತು ಹೆಚ್ಚಿನ ಮಾಹಿತಿ ಹಾಗು ಜಾಗೃತಿ ಮೂಡಿಸಲಾಯಿತು.
ತಾಲೂಕು ಪಂಚಾಯಿತಿ ಹಿರಿಯ ಸದಸ್ಯ ಧರ್ಮೇಗೌಡ ಮಾತನಾಡಿ, ಪ್ರಸ್ತುತ ಹಮ್ಮಿಕೊಂಡಿರುವ ಅಭಿಯಾನ ಮಹತ್ವಪೂರ್ಣವಾಗಿದೆ. ದೇಶದ ಭವಿಷ್ಯದ ಸದೃಢ ಪ್ರಜೆಯನ್ನು ರೂಪಿಸುವ ಕಾರ್ಯ ನಿಜಕ್ಕೂ ಶ್ಲಾಘನೀಯ. ಮಹಿಳೆಯರ ಮತ್ತು ಮಕ್ಕಳ ಆರೋಗ್ಯಕ್ಕೆ ಹೆಚ್ಚಿನ ಕಾಳಜಿ ವಹಿಸುತ್ತಿರುವುದು ಪ್ರಸ್ತುತ ಉತ್ತಮ ಬೆಳವಣಿಗೆಯಾಗಿದೆ ಎಂದರು.
ಜಿಲ್ಲಾ ಪಂಚಾಯಿತಿ ಸದಸ್ಯ ಎಸ್. ಮಣೆಶೇಖರ್, ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ವಿನಾಯಕ ಸೇವಾ ಸಮಿತಿ ಅಧ್ಯಕ್ಷ ವಿ. ಕದಿರೇಶ್, ತಾ.ಪಂ. ಸದಸ್ಯ ಕೆ. ಮಂಜುನಾಥ್, ನಗರಸಭಾ ಸದಸ್ಯರಾದ ಬದರಿನಾರಾಯಣ, ಮಣಿ ಎ.ಎನ್.ಎಸ್, ರೇಣುಕಾ ಸುದೀಪ್‌ಕುಮಾರ್, ಸಹಾಯಕ ಶಿಶು ಅಬಿವೃದ್ಧಿ ಯೋಜನಾಧಿಕಾರಿ ಸಾವಿತ್ರಿ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಕ್ಕಳಿಂದಲೇ ಅಭಿಯಾನ ಕುರಿತು ಹೆಚ್ಚಿನ ಮಾಹಿತಿ ಹಾಗು ಜಾಗೃತಿ ಮೂಡಿಸಲಾಯಿತು.
ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
No comments:
Post a Comment