ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಅಭಿವೃದ್ಧಿಪಡಿಸುವುದು, ನಗರಸಭೆಗೆ ರು.೧೦೦ ಕೋ. ವಿಶೇಷ ಅನುದಾನ ಬಿಡುಗಡೆಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ನಗರದ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್ ಈಶ್ವರಪ್ಪರವರಿಗೆ ಬುಧವಾರ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಅ. ೨೮: ನಗರಸಭೆ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಅಭಿವೃದ್ಧಿಪಡಿಸುವುದು, ನಗರಸಭೆಗೆ ರು.೧೦೦ ಕೋ. ವಿಶೇಷ ಅನುದಾನ ಬಿಡುಗಡೆಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ನಗರದ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್ ಈಶ್ವರಪ್ಪರವರಿಗೆ ಬುಧವಾರ ಮನವಿ ಸಲ್ಲಿಸಲಾಯಿತು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕೆರೆಗಳನ್ನು ಅಭಿವೃದ್ಧಿ ಪಡಿಸುವ ರೀತಿಯಲ್ಲಿ ನಗರಸಭೆ ವ್ಯಾಪ್ತಿಯಲ್ಲಿರುವ ಸುಮಾರು ೬೯ ಕೆರೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವುದು. ಕೆರೆಗಳಲ್ಲಿ ಅಂತರ್ಜಲ ಹೆಚ್ಚಿಸಿ ದನಗಾಹಿಗಳಿಗೆ, ರೈತರಿಗೆ ಅನುಕೂಲ ಕಲ್ಪಿಸಿಕೊಡಲು ತಕ್ಷಣ ಯೋಜನೆ ರೂಪಿಸುವಂತೆ ಒತ್ತಾಯಿಸಲಾಗಿದೆ.
ನಗರಸಭೆ ಅಸ್ತಿತ್ವಕ್ಕೆ ಬಂದು ೨೫ ವರ್ಷಗಳು ತುಂಬಿರುವ ಹಿನ್ನಲೆಯಲ್ಲಿ ನಗರಸಭೆ ವ್ಯಾಪ್ತಿಯಲ್ಲಿ ಮೂಲ ಸೌಲಭ್ಯಗಳನ್ನು ಕಲ್ಪಿಸಲು ರು.೧೦೦ ಕೋ. ವಿಶೇಷ ಅನುದಾನ ಬಿಡುಗಡೆಗೊಳಿಸುವುದು. ಜನ್ನಾಪುರ ಎನ್‌ಟಿಬಿ ರಸ್ತೆಯಲ್ಲಿರುವ ಖಾಲಿ ನಿವೇಶನದಲ್ಲಿ ಹೈಟೆಕ್ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಸಾಂಸ್ಕೃತಿಕ ಭವನ ನಿರ್ಮಾಣ ಮಾಡಲು ರು. ೩ ಕೋ. ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದೆ.
ನಗರದ ರಾಜ್ಯ ಸರ್ಕಾರಿ ಸ್ವಾಮ್ಯದ ಮೈಸೂರು ಕಾಗದ ಕಾರ್ಖಾನೆ ಪುನಶ್ಚೇತನಗೊಳಿಸಲು ಕಾರ್ಖಾನೆಗೆ ಸೇರಿದ ನಗರಾಡಳಿತ ಪ್ರದೇಶವನ್ನು ಖಾಸಗಿಯವರಿಗೆ ವಹಿಸಿಕೊಡುವ ವಿಚಾರ ತಿಳಿದು ಬಂದಿದ್ದು, ಈ ವ್ಯಾಪ್ತಿಯ ೪,೫,೬ ಮತ್ತು ೮ನೇ ವಾರ್ಡ್ ಹಾಗೂ ಆನೆಕೊಪ್ಪ ಕೊಳಚೆ ಪ್ರದೇಶದ ಸುತ್ತಮುತ್ತಲಿನ ಅಂಗಡಿ ಮುಂಗಟ್ಟುಗಳನ್ನು ಖಾಸಗಿಯವರಿಗೆ ಹಸ್ತಾಂತರ ಮಾಡದೆ ನಗರಸಭೆಗೆ ವಹಿಸಿಕೊಡುವಂತೆ ಕೋರಲಾಗಿದೆ.
ಟ್ರಸ್ಟ್ ಛೇರ‍್ಮನ್ ಆರ್. ವೇಣುಗೋಪಾಲ್‌ರವರು ಸುಮಾರು ೪೦ ವರ್ಷಗಳಿಂದ ನಿರಂತರವಾಗಿ ಹೋರಾಟಗಳನ್ನು ನಡೆಸಿಕೊಂಡು ಬರುವ ಮೂಲಕ ಜನಪರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು, ಅವರ ಸುಧೀರ್ಘ ಹೋರಾಟದ ಸವಿನೆನಪಿಗಾಗಿ ಪೌರಕಾರ್ಮಿಕರೊಡನೆ ಸ್ನೇಹ ಮಿಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಚಿವರು ಈ ಕಾರ್ಯಕ್ರಮ ಉದ್ಘಾಟಿಸುವ ಮೂಲಕ ಸುಮಾರು ೨೫ ವರ್ಷಗಳಿಂದ ನಡೆಯದಿರುವ ನಗರಸಭೆ ಪ್ರಗತಿಪರಿಶೀಲನಾ ಸಭೆ ನಡೆಸಬೇಕೆಂದು ಮನವಿ ಮಾಡಲಾಗಿದೆ.
ಟ್ರಸ್ಟ್ ಪ್ರಮುಖರಾದ ಛೇರ‍್ಮನ್ ಆರ್. ವೇಣುಗೋಪಾಲ್, ಕಾರ್ಯದರ್ಶಿ ವಿ. ಅಂಜನ, ಡಿ. ದೇವರಾಜ ಅರಸ್ ಜನಸ್ಪಂದನ ವೇದಿಕೆ ಕಾರ್ಯಧ್ಯಕ್ಷೆ ರಮಾವೆಂಕಟೇಶ್, ಶೋಭ, ಭವಾನಿ ಶಂಕರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment