Saturday, October 31, 2020

ಮುಂದಿನ ಒಂದು ವರ್ಷದೊಳಗೆ ಶ್ರೀ ಮಹರ್ಷಿ ವಾಲ್ಮೀಕಿ ಸಮುದಾಯ ಭವನ ಪೂರ್ಣ : ಬಿ.ಕೆ ಸಂಗಮೇಶ್ವರ್

ಭದ್ರಾವತಿಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸಮಾಜ ಕಲ್ಯಾಣ ಇಲಾಖೆ ಹಾಗು ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಮಾಜದ ಸಹಕಾರದೊಂದಿಗೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಹಮ್ಮಿಕೊಳ್ಳಲಾಗಿತ್ತು.
ಭದ್ರಾವತಿ, ಅ. ೩೧:  ನಗರದಲ್ಲಿ ನೆನೆಗುದಿಗೆ ಬಿದ್ದಿರುವ ಶ್ರೀ ಮಹರ್ಷಿ ವಾಲ್ಮೀಕಿ ಸಮುದಾಯ ಭವನ ಮುಂದಿನ ಒಂದು ವರ್ಷದೊಳಗೆ ಪೂರ್ಣಗೊಳಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಶಾಸಕ ಬಿ.ಕೆ ಸಂಗಮೇಶ್ವರ್ ಭರವಸೆ ನೀಡಿದರು.
    ಅವರು ಶನಿವಾರ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸಮಾಜ ಕಲ್ಯಾಣ ಇಲಾಖೆ ಹಾಗು ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಮಾಜದ ಸಹಕಾರದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಹಣದ ಕೊರತೆಯಿಂದ ವಾಲ್ಮೀಕಿ ಭವನ ಕಾಮಗಾರಿ ಸ್ಥಗಿತಗೊಂಡಿದ್ದು, ಈ ಹಿನ್ನಲೆಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಇನ್ನೂ ಹೆಚ್ಚಿನ ನೆರವು ಕೋರಬೇಕಾಗಿದೆ. ಅಲ್ಲದೆ ಸಮಾಜದ ಬಂಧುಗಳು ಸಹ  ತಮ್ಮ ಕೈಯಲ್ಲಿ ಸಾಧ್ಯವಾದಷ್ಟು ನೆರವು ನೀಡಲು ಮುಂದಾಗಬೇಕು. ಮುಂದಿನ ವಾಲ್ಮೀಕಿ ಜಯಂತಿಯನ್ನು ನೂತನ ಭವನದಲ್ಲಿ ಆಚರಿಸುವಂತಾಗಬೇಕೆಂದರು.


ಭದ್ರಾವತಿಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಸಮುದಾಯ ಭವನ ಕಾಮಗಾರಿ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಅವರಿಗೆ ಮನವಿ ಸಲ್ಲಿಸಲಾಯಿತು.
     ಪ್ರಸ್ತುತ ಸಮಾಜಕ್ಕೆ ಶ್ರೀ ಮಹರ್ಷಿ ವಾಲ್ಮೀಕಿಯವರ ಆದರ್ಶತನಗಳು ಅವಶ್ಯಕವಾಗಿದ್ದು, ಅವರ ಜಯಂತಿ ಕೇವಲ ಆಚರಣೆಗೆ ಸೀಮಿತವಾಗಬಾರದು. ಪ್ರತಿಯೊಬ್ಬರೂ ಪ್ರೀತಿ, ಸಹೋದರತ್ವ, ಸಹಬಾಳ್ವೆ, ಸಮಾನತೆ, ಆದರ್ಶತನಗಳನ್ನು ಮೈಗೂಡಿಸಿಕೊಳ್ಳಬೇಕು. ಇದು ಮಹರ್ಷಿ ವಾಲ್ಮೀಕಿಯವರು ಈ ಜಗತ್ತಿಗೆ ನೀಡಿರುವ ದೊಡ್ಡ ಸಂದೇಶವಾಗಿದೆ. ಇದನ್ನು ಅರಿತು ಎಲ್ಲರೂ ಮುನ್ನಡೆಯಬೇಕೆಂದರು.
     ತಾಲೂಕು ಪಂಚಾಯಿತಿ ಅಧ್ಯಕ್ಷ ಡಿ. ಲಕ್ಷ್ಮೀದೇವಿ, ತಹಸೀಲ್ದಾರ್ ಗ್ರೇಡ್-೨ ರಂಗಮ್ಮ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಡಾ. ಜಿ. ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ದೂದ್‌ಪೀರ್, ನಗರಸಭೆ ಪೌರಾಯುಕ್ತ ಮನೋಹರ್, ಪೊಲೀಸ್ ನಗರ ವೃತ್ತ ನಿರೀಕ್ಷ ರಾಘವೇಂದ್ರ ಕಾಂಡಿಕೆ, ಗ್ರಾಮಾಂತರ ವೃತ್ತ ನಿರೀಕ್ಷಕ ಇ.ಓ ಮಂಜುನಾಥ್, ಠಾಣಾಧಿಕಾರಿ ದೇವರಾಜ್, ಶಿರಸ್ತೇದಾರ್ ಮಂಜಾನಾಯ್ಕ, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ, ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
     ಸಮುದಾಯ ಭವನ ಕಾಮಗಾರಿ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಅವರಿಗೆ ಮನವಿ ಸಲ್ಲಿಸಲಾಯಿತು.
     ಸಮಾಜದ ಗೌರವಾಧ್ಯಕ್ಷ ಬಸವರಾಜಪ್ಪ ಉಪನ್ಯಾಸ ನೀಡಿದರು. ಅಧ್ಯಕ್ಷ ಬಸವರಾಜ ಬಿ. ಆನೆಕೊಪ್ಪ ಅಧ್ಯಕ್ಷತೆ ವಹಿಸಿದ್ದರು. ಭಾಸ್ಕರ್, ನಾಗಣ್ಣ, ಪುಟ್ಟಸ್ವಾಮಿ ನಾಯಕ, ಪಾಲಯ್ಯ, ಜಯಮ್ಮ ಸೇರಿದಂತೆ ಇನ್ನಿತರನ್ನು ಸನ್ಮಾನಿಸಿ ಗೌರವಿಸಲಾಯಿತು.  
    ಸಮಾಜದ ಪ್ರಮುಖರಾದ ಪ್ರಧಾನ ಕಾರ್ಯದರ್ಶಿ ಶಿವಾನಂದ, ಕಾರ್ಯದಶಿ ಮಂಜುನಾಥ್ ಸೇರಿದಂತೆ, ನಿರ್ದೇಶಕರಾದ ಕಡದಕಟ್ಟೆ ಬಸವರಾಜ್, ಸದಾನಂದ, ಸದಾಶಿವಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

No comments:

Post a Comment