Saturday, November 21, 2020

ಉದ್ಯೋಗ ಖಾತ್ರಿ ಯೋಜನೆಯಡಿ ಯುವಕರಿಗೆ ಕೆರೆ ಅಭಿವೃದ್ಧಿ ಕಾಮಗಾರಿ ನಡೆಸಲು ಅವಕಾಶ ಕಲ್ಪಿಸಿ ಕೊಡಿ

ಬಿಜೆಪಿ ಮಂಡಲ ಅಧ್ಯಕ್ಷ ಎಂ. ಪ್ರಭಾಕರ್ ಮತ್ತು ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ಇಮ್ರಾನ್ ಆಲಿ ಮನವಿ

ಭದ್ರಾವತಿ, ನ. ೨೧: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ನಿರುದ್ಯೋಗಿಗಳಿಗೆ ಕೆರೆಗಳ ಅಭಿವೃದ್ಧಿ ಕಾಮಗಾರಿ ನಡೆಸಲು ಅವಕಾಶ ಕಲ್ಪಿಸಿಕೊಡುವಂತೆ ಒತ್ತಾಯಿಸಿ ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ಎಂ. ಪ್ರಭಾಕರ್ ಮತ್ತು ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ಇಮ್ರಾನ್ ಆಲಿ ಜಿಲ್ಲಾ ಉಸ್ತುವಾರಿ ಸಚಿವರಿಗೆ, ಜಿಲ್ಲಾ ಪಂಚಾಯಿತಿ ಮುಖ್ಯ  ಕಾರ್ಯನಿರ್ವಹಣಾಧಿಕಾರಿಗಳಿಗೆ ಮತ್ತು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮನವಿ ಸಲ್ಲಿಸಿದ್ದಾರೆ.
   ಜಿಲ್ಲಾ ಪಂಚಾಯಿತಿ ವತಿಯಿಂದ ತಾಲೂಕಿನ ದೊಣಬಘಟ್ಟ ಗ್ರಾಮದ ಸರ್ವೆ ನಂ. ೭೧ರ ಬ್ರಹ್ಮದೇವರಕಟ್ಟೆ ಕೆರೆ ಅಭಿವೃದ್ಧಿಗೆ ರು.೯ ಲಕ್ಷ,  ಸರ್ವೆ ನಂ.೨೫ರ ಎರೆಕಟ್ಟೆ ಕೆರೆ ಅಭಿವೃದ್ಧಿಗೆ ರು. ೯ ಲಕ್ಷ ಅನುದಾನ ಮಂಜೂರಾತಿಯಾಗಿದೆ. ಪ್ರಸ್ತುತ ಕೋವಿಡ್-೧೯ರ ಹಿನ್ನಲೆಯಲ್ಲಿ ಗ್ರಾಮದ ಯುವಕರು ಉದ್ಯೋಗ ವಿಲ್ಲದೆ ಪರದಾಡುತ್ತಿದ್ದಾರೆ. ಈ ನಡುವೆ ಕೆಲವರು ಬೇರೆ ಊರುಗಳಿಗೆ ವಲಸೆ ಹೋಗುತ್ತಿದ್ದು, ಈ ಹಿನ್ನಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ನೀಡುವ ಮೂಲಕ ಹಿತ ಕಾಪಾಡಬೇಕು.
   ಪ್ರಸ್ತುತ ಗ್ರಾಮದಲ್ಲಿ ಭತ್ತದ ಕಟಾವು ಮುಗಿದಿದ್ದು, ಇದೀಗ ಕೆರೆ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸೂಕ್ತ ಸಮಯವಾಗಿದೆ. ಕೆರೆಗಳು ಅಭಿವೃದ್ಧಿಗೊಂಡಲ್ಲಿ ಶುದ್ದ ನೀರು ಸರಬರಾಜು ಜೊತೆಗೆ ಸ್ವಚ್ಛತೆಯಿಂದ ಗ್ರಾಮದಲ್ಲಿ ರೋಗರುಜಿನ ಹರಡದಂತೆ ತಡೆಗಟ್ಟೆ ಬಹುದಾಗಿದೆ.  ಅಲ್ಲದೆ ಕೆರೆಗಳ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಯುವಕರು ಉತ್ಸುಕರಾಗಿದ್ದಾರೆ. ಈ ಹಿನ್ನಲೆಯಲ್ಲಿ ತಕ್ಷಣ ಎರಡು ಕೆರೆಗಳ ಸರ್ವೆ ಕಾರ್ಯ ಕೈಗೊಂಡು ಬೌಂಡರಿ ನಿಗದಿಪಡಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಅವಕಾಶ ಕಲ್ಪಿಸಿಕೊಡಬೇಕೆಂದು ಕೋರಿದ್ದಾರೆ.

No comments:

Post a Comment