Thursday, November 12, 2020

ಒಕ್ಕಲಿಗ ಸಮಾಜದ ಕೊಡುಗೆ ಅನನ್ಯ : ಬಿ.ವೈ ರಾಘವೇಂದ್ರ

ಭದ್ರಾವತಿ ನ್ಯೂಟೌನ್ ಬಂಟರ ಭವನದಲ್ಲಿ ಬುಧವಾರ ಸಂಜೆ ಶ್ರೀ ಕಾಲಭೈರವೇಶ್ವರ ಚಾರಿಟಬಲ್ ಟ್ರಸ್ಟ್, ಶ್ರೀ ಕಾಲಭೈರವೇಶ್ವರ ದೇವಸ್ಥಾನ ಟ್ರಸ್ಟ್ ಮತ್ತು ಶ್ರೀ ಕಾಲಭೈರವೇಶ್ವರ ಮಹಿಳಾ ಘಟಕ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಗಣ್ಯರಿಗೆ ಅಭಿನಂದನೆ, ಸನ್ಮಾನ ಹಾಗು ಪ್ರತಿಭಾವಂತ ವಿದ್ಯಾಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಸಂಸದ ಬಿ.ವೈ ರಾಘವೇಂದ್ರ ಉದ್ಘಾಟಿಸಿದರು.
ಭದ್ರಾವತಿ, ನ. ೧೧: ದೇಶದಲ್ಲಿ ಕೃಷಿಯನ್ನು ನಂಬಿ ಬದುಕುತ್ತಿರುವ ಒಕ್ಕಲಿಗ ಸಮಾಜದ ಕೊಡುಗೆ ಅನನ್ಯವಾಗಿದ್ದು, ಇಂತಹ ಸಮುದಾಯ ಮತ್ತಷ್ಟು ಕ್ರಿಯಾಶೀಲವಾಗಿ ಬೆಳೆಯುವ ಮೂಲಕ ಜನರು ಹಸಿವು ಮುಕ್ತರಾಗಿ ಬದುಕುವಂತಾಗಬೇಕೆಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.
    ಅವರು ಬುಧವಾರ ಸಂಜೆ ನ್ಯೂಟೌನ್ ಬಂಟರ ಭವನದಲ್ಲಿ ಶ್ರೀ ಕಾಲಭೈರವೇಶ್ವರ ಚಾರಿಟಬಲ್ ಟ್ರಸ್ಟ್, ಶ್ರೀ ಕಾಲಭೈರವೇಶ್ವರ ದೇವಸ್ಥಾನ ಟ್ರಸ್ಟ್ ಮತ್ತು ಶ್ರೀ ಕಾಲಭೈರವೇಶ್ವರ ಮಹಿಳಾ ಘಟಕ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಗಣ್ಯರಿಗೆ ಅಭಿನಂದನೆ, ಸನ್ಮಾನ ಹಾಗು ಪ್ರತಿಭಾವಂತ ವಿದ್ಯಾಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
    ಸಮಾಜದ ಎಲ್ಲಾ ಸಮುದಾಯಗಳೊಂದಿಗೆ ಒಕ್ಕಲಿಗ ಸಮುದಾಯ ಗುರುತಿಸಿಕೊಂಡು ಮುಂಚೂಣಿಯಲ್ಲಿದ್ದು, ಶ್ರಮದ ಕೃಷಿ ಬದುಕನ್ನು ರೂಢಿಸಿಕೊಂಡಿರುವ ಈ ಸಮುದಾಯದ ಜನರು ಪ್ರಸ್ತುತ ಹೆಚ್ಚಿನ ರೀತಿಯಲ್ಲಿ ಸಂಘಟಿತರಾಗುವ ಮೂಲಕ ನಗರದಲ್ಲಿ ಸುಮಾರು ೧ ಕೋ. ರು. ವೆಚ್ಚದಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಮುಂದಾಗಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದರು.
    ಕೇಂದ್ರ ಸರ್ಕಾರ ಮಕ್ಕಳ ಶಿಕ್ಷಣಕ್ಕೆ ೨೫೦ ಕೋ. ರು. ಬಿಡುಗಡೆಗೊಳಿಸಿದೆ. ಜಿಲ್ಲೆಯಲ್ಲಿರುವ ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯ ನೆರವನ್ನು ನೀಡಲಾಗುವುದು. ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳು ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದರು.
    ಶ್ರೀ ಕಾಲಭೈರವೇಶ್ವರ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಲಕ್ಷ್ಮಣಗೌಡ ಅಧ್ಯಕ್ಷತೆ ವಹಿಸಿದ್ದರು. ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷೆ ಪವಿತ್ರ ರಾಮಯ್ಯ, ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಸ್ ಜ್ಯೋತಿ ಪ್ರಕಾಶ್, ಆರ್ಯವೈಶ್ಯ ಮಂಡಳಿ ಅಧ್ಯಕ್ಷ ಡಿ.ಎಸ್ ಅರುಣ್, ಜಲಮಂಡಳಿ ನಿರ್ದೇಶಕ ಮಂಗೋಟೆ ರುದ್ರೇಶ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಜಿ. ಧರ್ಮಪ್ರಸಾದ್, ತಾಲೂಕು ಅಧ್ಯಕ್ಷ ಎಂ. ಪ್ರಭಾಕರ್, ಶ್ರೀ ರಾಮೇಶ್ವರ ಯುವಕರ ಸಂಘದ ಅಧ್ಯಕ್ಷ ಬಿ.ಎಸ್. ಶಶಿಕಾಂತ, ಮಹಿಳಾ ಟ್ರಸ್ಟ್ ಅಧ್ಯಕ್ಷೆ ಶಿವಮ್ಮ ಶ್ರೀನಿವಾಸ್ ಸೇರಿದಂತೆ ಪದಾಧಿಕಾರಿಗಳು, ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  ಜಗದೀಶ್ ಸ್ವಾಗತಿಸಿದರು. ರಮಾ ವೆಂಕಟೇಶ್ ವಂದಿಸಿದರು.

No comments:

Post a Comment