ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವ ಜ್ಞಾನತಾಣ ನೂತನ ಕಾರ್ಯಕ್ರಮಕ್ಕೆ ಚಾಲನೆ
ಭದ್ರಾವತಿ ಹಳೇನಗರದಲ್ಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಕಛೇರಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಸಮಾರಂಭದಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮದಲ್ಲಿ ಅಂತರ್ಜಾಲ ಶಿಕ್ಷಣ ವ್ಯವಸ್ಥೆ ಜ್ಞಾನತಾಣ ಕಾರ್ಯಕ್ರಮಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ ನೀಡಿದರು.
ಭದ್ರಾವತಿ, ನ. ೯: ಮಾನವ ಸಮುದಾಯದ ಏಳಿಗಾಗಿ ಹಲವಾರು ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಪ್ರಸ್ತುತ ಲಕ್ಷಾಂತರ ಜನರ ಬದುಕಿನ ಆಧಾರವಾಗಿ ಬಹು ದೊಡ್ಡ ಸೇವಾ ಸಂಸ್ಥೆಯಾಗಿ ಬೆಳೆದು ನಿಂತಿದೆ. ಕೊರೋನಾ ಸಂಕಷ್ಟದ ಸಮಯದಲ್ಲೂ ಸಹ ಸೇವಾ ಕಾರ್ಯವನ್ನು ನಡೆಸುತ್ತಿರುವುದು ಹೆಮ್ಮೆಯ ವಿಚಾರವಾಗಿದೆ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಪ್ರಶಂಸೆ ವ್ಯಕ್ತಪಡಿಸಿದರು.
ಅವರು ಸೋಮವಾರ ಹಳೇನಗರದಲ್ಲಿರುವ ಯೋಜನೆಯ ಕಛೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಗ್ರಾಮೀಣ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮದಲ್ಲಿ ಅಂತರ್ಜಾಲ ಶಿಕ್ಷಣ ವ್ಯವಸ್ಥೆ ಜ್ಞಾನತಾಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ನಿರುದ್ಯೋಗ ನಿರ್ಮೂಲನೆ, ಪಶುಸಂಗೋಪನೆ, ಹೈನುಗಾರಿಕೆ, ಕೃಷಿ ಚಟುವಟಿಕೆಗಳಿಗೆ ಉತ್ತೇಜನ, ಆರೋಗ್ಯ ಸುಧಾರಣೆ, ಆರ್ಥಿಕ ವ್ಯವಸ್ಥೆ ಬಲವರ್ಧನೆ, ಮಹಿಳಾ ಸಬಲೀಕರಣ, ಪರಿಸರ ರಕ್ಷಣೆ ಮತ್ತು ಶಿಕ್ಷಣ ವ್ಯವಸ್ಥೆ ಸುಧಾರಣೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ವಿಭಿನ್ನ ರೀತಿಯ ಸೇವಾ ಕಾರ್ಯಗಳಲ್ಲಿ ಮುಂಚೂಣಿಯಲ್ಲಿರುವ ಏಕೈಕ ಸಂಸ್ಥೆಯಾಗಿದೆ ಎಂದರು.
ಕೊರೋನಾ ಪರಿಣಾಮದಿಂದಾಗಿ ಪ್ರಸ್ತುತ ಶ್ರೀಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದು, ಅದರಲ್ಲೂ ಗ್ರಾಮೀಣ ಜನರ ಬದುಕು ಮತ್ತಷ್ಟು ಸಂಕಷ್ಟಕ್ಕೆ ಒಳಗಾಗಿದೆ. ಇಂತಹ ಸಂದರ್ಭದಲ್ಲಿ ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ಹಿನ್ನಲೆಯಲ್ಲಿ ತರಬೇತಿ ಪಡೆದ ಶಿಕ್ಷಕರನ್ನು ನೇಮಿಸಿಕೊಂಡು ಕಲಿಕೆಗೆ ಸಹಕಾರಿಯಾಗುತ್ತಿರುವುದು ಒಳ್ಳೆಯ ಬೆಳೆವಣಿಗೆಯಾಗಿದೆ. ಇದರ ಸದುಪಯೋಗ ಎಲ್ಲರೂ ಪಡೆದುಕೊಳ್ಳಬೇಕೆಂದರು.
ತಾಲೂಕು ಯೋಜನಾಧಿಕಾರಿ ಕೆ. ಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿ, ಜ್ಞಾನತಾಣ ಕಾರ್ಯಕ್ರಮದ ಉದ್ದೇಶ ಹಾಗೂ ರೂಪುರೇಷೆಗಳನ್ನು ವಿವರಿಸಿದರು. ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಜಿ. ಆನಂದಕುಮಾರ್, ಸದಸ್ಯರಾದ ಆರ್. ಕರುಣಾಮೂರ್ತಿ, ಪಾಲಾಕ್ಷಪ್ಪ, ಹಳೇನಗರದ ಪೊಲೀಸ್ ಠಾಣಾಧಿಕಾರಿ ಶ್ರೀನಿವಾಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಜ್ಞಾನತಾಣ ಕಾರ್ಯಕ್ರಮಕ್ಕೆ ಸಹಕಾರಿಯಾಗುವಂತೆ ಆರ್ಥಿಕ ಸಹಾಯಧನದೊಂದಿಗೆ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಮತ್ತು ಟ್ಯಾಪ್‌ಗಳನ್ನು ವಿತರಿಸಲಾಯಿತು.
No comments:
Post a Comment