Friday, November 27, 2020

ನ.೩೦, ಡಿ.೪ರಂದು ನಗರಸಭೆ ವ್ಯಾಪ್ತಿಯಲ್ಲಿರುವ ೨ ಕೆರೆಗಳ ಅಳತೆ ಕಾರ್ಯ, ಬೌಂಡರಿ ನಿಗದಿ

ಭದ್ರಾವತಿ ನಗರಸಭೆ ಪೌರಾಯುಕ್ತ ಮನೋಹರ್ ಜುಲೈ ತಿಂಗಳಿನಲ್ಲಿ ಜನ್ನಾಪುರ ಕೆರೆಯನ್ನು ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್ ಪದಾಧಿಕಾರಿಗಳೊಂದಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದ ಸಂದರ್ಭ.
ಭದ್ರಾವತಿ, ನ. ೨೭: ನಗರದ ಜನ್ನಾಪುರದ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್ ಛೇರ‍್ಮನ್, ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್‌ರವರು ಕಳೆದ ಸುಮಾರು ೧ ವರ್ಷದಿಂದ ನಡೆಸುತ್ತಿದ್ದ ಹೋರಾಟ ಯಶಸ್ವಿಯಾಗಿದ್ದು, ನಿರಂತರ ಹೋರಾಟದ ಪರಿಣಾಮ ತಾಲೂಕು ಆಡಳಿತ ಇದೀಗ ನಗರಸಭೆ ವ್ಯಾಪ್ತಿಯಲ್ಲಿನ ಕೆರೆಗಳ ಅಳತೆ ಕಾರ್ಯ ಕೈಗೊಂಡು ಬೌಂಡರಿ ನಿಗದಿಪಡಿಸಲು ಮುಂದಾಗಿದೆ.
    ನಗರಸಭೆ ವ್ಯಾಪ್ತಿಯಲ್ಲಿರುವ ಕೆರೆಗಳ ಅಳತೆ ಕಾರ್ಯ ಕೈಗೊಂಡು ಬೌಂಡರಿ ನಿಗದಿಪಡಿಸುವ ಮೂಲಕ ಅಭಿವೃದ್ಧಿಪಡಿಸಿ ಬೇಸಿಗೆಯಲ್ಲಿ ರೈತರಿಗೆ, ಜಾನುವಾರುಗಳಿಗೆ ಅವಕಾಶ ಕಲ್ಪಿಸಿಕೊಡಬೇಕು. ಅಲ್ಲದೆ ಕೆಲವು ಕೆರೆಗಳನ್ನು ಪ್ರವಾಸಿ ತಾಣಗಳಾಗಿ ಪರಿವರ್ತಿಸುವಂತೆ ಆಗ್ರಹಿಸಿ ಜಿಲ್ಲಾ ಉಸ್ತುವಾರಿ ಸಚಿವರಿಗೆ, ಸಂಸದರಿಗೆ, ಸ್ಥಳೀಯ ಶಾಸಕರಿಗೆ, ಜಿಲ್ಲಾಡಳಿತ, ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ, ತಾಲೂಕು ಆಡಳಿತ ಮತ್ತು ನಗರಸಭೆಗೆ ಹಲವು ಬಾರಿ ಮನವಿ ಸಲ್ಲಿಸಿ ಒತ್ತಾಯಿಸಿದ್ದರು.
    ಪೌರಾಯುಕ್ತ ಮನೋಹರ್ ಕೆರೆಗಳ ಅಭಿವೃದ್ಧಿಗೆ ಹೆಚ್ಚಿನ ಆಸಕ್ತಿವಹಿಸಿ ತಾಲೂಕು ಆಡಳಿತ ಬೌಂಡರಿ ನಿಗದಿಪಡಿಸಿದ್ದಲ್ಲಿ ಮುಂದಿನ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಈ ಹಿನ್ನಲೆಯಲ್ಲಿ ತಾಲೂಕು ಆಡಳಿತ ಮೊದಲ ಹಂತವಾಗಿ ನ.೩೦ರಂದು ಬೆಳಿಗ್ಗೆ ೧೧ ಗಂಟೆಗೆ ಹಳೇಸೀಗೇಬಾಗಿ ಸರ್ವೆ ನಂ.೩೩ರ ಸುಮಾರು ೧೮ ಎಕರೆ ೧೯ ಗುಂಟೆ ವಿಸ್ತೀರ್ಣವುಳ್ಳ ಸರ್ಕಾರಿ ಕೆರೆ ಹಾಗು ಡಿ.೪ರಂದು ಬೆಳಿಗ್ಗೆ ೧೧ ಗಂಟೆಗೆ ಸರ್ವೆ ನಂಬರ್ ೭೦ರ ಸುಮಾರು ೪೫ ಎಕರೆ ೨೦ ಗುಂಟೆ ವಿಸ್ತೀರ್ಣವುಳ್ಳ ಜನ್ನಾಪುರ ಕೆರೆ ಅಳತೆ ಕಾರ್ಯ ಕೈಗೊಂಡು ಬೌಂಡರಿ ನಿಗದಿಪಡಿಸಲು ಮುಂದಾಗಿದೆ.  

No comments:

Post a Comment