ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಖಾಸಗಿಕರಣ ವಿರೋಧಿಸಿ ಗುರುವಾರ ಕಾರ್ಖಾನೆ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಭದ್ರಾವತಿ, ನ. ೨೬: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿಕರಣಗೊಳಿಸಬಾರದು ಹಾಗು ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗುರುವಾರ ಕಾರ್ಖಾನೆ ಮುಂಭಾಗ ವಿವಿಧ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸುತ್ತಿದ್ದು, ಸರ್ಕಾರಿ ಸ್ವಾಮ್ಯದ ಕಾರ್ಖಾನೆಗಳನ್ನು ಬಂಡವಾಳ ಶಾಹಿಗಳಿಗೆ ಮಾರಾಟ ಮಾಡುತ್ತಿದೆ. ಅಲ್ಲದೆ ಹಲವಾರು ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೊಳಿಸುವ ಮೂಲಕ ಕಾರ್ಮಿಕ ವರ್ಗವನ್ನು ಸಂಕಷ್ಟಕ್ಕೆ ತಳ್ಳಿದೆ ಎಂದು ಕಾರ್ಮಿಕ ಮುಖಂಡರು ಆರೋಪಿಸಿದರು.
ವಿಐಎಸ್‌ಎಲ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿಕರಣಗೊಳಿಸಬಾರದು. ಇದರಿಂದ ಭವಿಷ್ಯದಲ್ಲಿ ಕಾರ್ಖಾನೆ ಶಾಶ್ವತವಾಗಿ ಮುಚ್ಚಿ ಹೋಗಲಿದೆ. ಕಾರ್ಮಿಕರು ಬೀದಿ ಪಾಲಾಗಲಿದ್ದು, ಉದ್ಯೋಗ ಹುಡುಕಿಕೊಂಡು ಬೇರೆಡೆಗೆ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಇದೀಗ ನಿವೃತ್ತ ಕಾರ್ಮಿಕರು ವಾಸಿಸುತ್ತಿರುವ ಮನೆಗಳನ್ನು ಖಾಲಿ ಮಾಡಿಸುವ ಹುನ್ನಾರ ನಡೆಸಲಾಗುತ್ತಿದ್ದು, ೩೦-೪೦ ವರ್ಷ ಕಾರ್ಖಾನೆಯಲ್ಲಿ ದುಡಿದ ಕಾರ್ಮಿಕರು, ಕುಟುಂಬ ವರ್ಗದವರು ಅತಂತ್ರರಾಗಿ ಬದುಕುವ ಸ್ಥಿತಿ ನಿರ್ಮಾಣವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ತಕ್ಷಣ ಖಾಸಗಿಕರಣ ಪ್ರಕ್ರಿಯೆ ಕೈಬಿಡಬೇಕು. ಕಾರ್ಖಾನೆಗೆ ಅಗತ್ಯವಿರುವ ಬಂಡವಾಳ ತೊಡಗಿಸಬೇಕು. ಕಾರ್ಮಿಕರಿಗೆ ನಿರಂತರವಾಗಿ ಕೆಲಸ ನೀಡಬೇಕೆಂದು ಆಗ್ರಹಿಸಿದರು.
ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್, ಪದಾಧಿಕಾರಿಗಳಾದ ಬಸಂತಕುಮಾರ್, ಅಮೃತ್, ರಾಘವೇಂದ್ರ, ಮೋಹನ್, ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್, ರಾಕೇಶ್, ನಿವೃತ್ತ ಕಾರ್ಮಿಕರ ಸಂಘದ ನರಸಿಂಹಚಾರ್, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸುರೇಶ್ ಸೇರಿದಂತೆ ಕಾಯಂ ಮತ್ತು ಗುತ್ತಿಗೆ ಕಾರ್ಮಿಕರು, ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment