ತಹಸೀಲ್ದಾರ್, ನಗರಸಭೆ ಪೌರಾಯುಕ್ತರಿಗೆ ಜನತಾದಳ(ಸಂಯುಕ್ತ) ವತಿಯಿಂದ ಮನವಿ
ಸರ್ವೋಚ್ಛ ನ್ಯಾಯಾಲಯದ ಮಾರ್ಗಸೂಚಿಯಂತೆ ಪಟಾಕಿ ಮಾರಾಟಕ್ಕೆ ಅವಕಾಶ ನೀಡಬೇಕೆಂದು ಒತ್ತಾಯಿಸಿ ಸೋಮವಾರ ಭದ್ರಾವತಿಯಲ್ಲಿ ಜನತಾದಳ(ಸಂಯುಕ್ತ) ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್. ಗೌಡ ತಹಸೀಲ್ದಾರ್ ಮತ್ತು ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಿದರು.
ಭದ್ರಾವತಿ, ನ. ೯: ವಿಶ್ವದಾದ್ಯಂತ ಕಳೆದ ಸುಮಾರು ೮ ತಿಂಗಳಿನಿಂದ ಕೊರೋನಾ ಮಹಾಮಾರಿ ವ್ಯಾಪಕವಾಗಿ ಹರಡುವ ಮೂಲಕ ಸಾಕಷ್ಟು ಸಂಕಷ್ಟವನ್ನುಂಟು ಮಾಡಿದ್ದು, ಈ ನಡುವೆ ದೀಪಾವಳಿ ಹಬ್ಬ ಎದುರಾಗಿದೆ. ಪಟಾಕಿ ಸಿಡಿಸುವುದರಿಂದ ಪರಿಸರ ಮಾಲಿನ್ಯ ಉಂಟಾಗುವ ಜೊತೆಗೆ ಮತ್ತಷ್ಟು ಸಮಸ್ಯೆ ಎದುರಾಗಲಿದೆ. ಈ ಹಿನ್ನಲೆಯಲ್ಲಿ ಪರಿಸರಕ್ಕೆ ಹಾನಿಯಾಗದ ರೀತಿಯಲ್ಲಿ ಸರ್ವೋಚ್ಛ ನ್ಯಾಯಾಲಯದ ಮಾರ್ಗಸೂಚಿಯಂತೆ ಪಟಾಕಿ ಮಾರಾಟಕ್ಕೆ ಅವಕಾಶ ನೀಡಬೇಕೆಂದು ಜನತಾದಳ(ಸಂಯುಕ್ತ) ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್. ಗೌಡ ಸೋಮವಾರ ತಹಸೀಲ್ದಾರ್ ಮತ್ತು ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.
ಕೊರೋನಾ ಸೋಂಕಿನಿಂದ ಈಗಾಗಲೇ ಸಾಕಷ್ಟು ಜನ ಪ್ರಾಣ ಕಳೆದುಕೊಂಡಿದ್ದಾರೆ. ಪಟಾಕಿ ಸಿಡಿಸುವುದರಿಂದ ಸೋಂಕು ಮತ್ತಷ್ಟು ಹೆಚ್ಚುವ ಆತಂಕ ಕಂಡು ಬರುತ್ತಿದೆ. ಅಲ್ಲದೆ ಪರಿಸರಕ್ಕೆ ಹಾನಿಯಾಗಿ ಮಾಯು ಮಾಲಿನ್ಯದಿಂದ ಕೊರೋನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆದು ಪ್ರಾಣಾಪಾಯದಿಂದ ಪಾರಾದವರು ಹಾಗು ಮಕ್ಕಳು ಉಸಿರಾಟದ ತೊಂದರೆ ಎದುರಿಸಬೇಕಾಗುತ್ತದೆ. ಈ ಹಿನ್ನಲೆಯಲ್ಲಿ ಈಗಾಗಲೇ ಸರ್ವೋಚ್ಛ ನ್ಯಾಯಾಲಯ ಪಟಾಕಿ ಮಾರಾಟಕ್ಕೆ ಸಂಬಂಧಿಸಿದಂತೆ ಕೇಂದ್ರ ಹಾಗು ರಾಜ್ಯ ಸರ್ಕಾರಗಳಿಗೆ ೧೨ ಅಂಶಗಳ ಮಾರ್ಗಸೂಚಿಯನ್ನು ಹೊರಡಿಸಿದೆ. ಅದರಂತೆ ಪರಿಸರಕ್ಕೆ ಹಾನಿ ಮಾಡದ ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲು ಅವಕಾಶ ನೀಡಬೇಕೆಂದು ಒತ್ತಾಯಿಸಿದ್ದಾರೆ.
ನಗರದ ನ್ಯೂಟೌನ್ ಭಾಗದಲ್ಲಿ ವಿಐಎಸ್‌ಎಲ್ ಚರ್ಚ್ ಮೈದಾನದಲ್ಲಿ ಹಾಗು ಹಳೇನಗರದ ಕನಕಮಂಟಪ ಮೈದಾನದಲ್ಲಿ ಪ್ರತಿವರ್ಷ ಪಟಾಕಿ ಮಾರಾಟಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ. ಈ ಬಾರಿ ಪ್ರತಿಯೊಂದು ಮಳಿಗೆಗಳ ನಡುವೆ ಸುಮಾರು ೧೮ ಅಡಿ ಅಂತರವಿರುವಂತೆ ನೋಡಿಕೊಳ್ಳಬೇಕು. ಸ್ಯಾನಿಟೈಜರ್, ಥರ್ಮಲ್ ಸ್ಕ್ರೀನಿಂಗ್ ಮತ್ತು ಮಾಸ್ಕ್ ಬಳಕೆ ಕಡ್ಡಾಯಗೊಳಿಸಬೇಕು. ಪ್ರತಿ ಮಳಿಗೆಗೆ ಭೇಟಿ ನೀಡಿ ಹಸಿರು ಪಟಾಕಿ ಮಾರಾಟ ಮಾಡಲಾಗುತ್ತಿದೆಯೇ ಎಂಬುದನ್ನು ಖಚಿತ ಪಡಿಸಿಕೊಳ್ಳಬೇಕು. ಪರಿಸರಕ್ಕೆ ಹಾನಿಯಾಗುವ ಪಟಾಕಿ ಮಾರಾಟ ಮಾಡುವುದು ಕಂಡು ಬಂದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಪಕ್ಷದ ವತಿಯಿಂದ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಜೆಡಿಯು ರಾಜ್ಯ ಸಂಘಟನಾ ಕಾರ್ಯದರ್ಶಿ ಬಾಬು ದೀಪಕ್‌ಕುಮಾರ್, ತಾಲೂಕು ಬಂಜಾರ ಯುವಕರ ಸಂಘದ ಅಧ್ಯಕ್ಷ ಕೃಷ್ಣನಾಯ್ಕ, ರಾಜ ನಾಯ್ಕ ಮತ್ತು ನಾಗ ನಾಯ್ಕ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment