Sunday, December 27, 2020

ವಿಜೃಂಭಣೆಯಿಂದ ಜರುಗಿದ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವ

ಕೋವಿಡ್-೧೯ರ ನಡುವೆಯೂ ಪ್ರತಿ ವರ್ಷದಂತೆ ಈ ಬಾರಿ ಸಹ ಭದ್ರಾವತಿ ಹುತ್ತಾ ಕಾಲೋನಿ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ನೆರವೇರಿತು.
ಭದ್ರಾವತಿ, ಡಿ. ೨೭: ಕೋವಿಡ್-೧೯ರ ನಡುವೆಯೂ ಪ್ರತಿ ವರ್ಷದಂತೆ ಈ ಬಾರಿ ಸಹ ನಗರದ ಹುತ್ತಾ ಕಾಲೋನಿ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ನೆರವೇರಿತು.
ಮಧ್ಯಾಹ್ನ ಸುಮಾರು ೧೨.೩೦ಕ್ಕೆ ದೇವಸ್ಥಾನದ ಆವರಣದಿಂದ ಆರಂಭಗೊಂಡ ರಥೋತ್ಸವ ಸರ್.ಎಂ ವಿಶ್ವೇಶ್ವರಾಯ ಆಟೋ ನಿಲ್ದಾಣದವರೆಗೆ ಸಾಗಿತು. ನೂರಾರು ಭಕ್ತಾಧಿಗಳು ರಥೋತ್ಸವ ಆರಂಭವಾಗುತ್ತಿದ್ದಂತೆ ಜೈಕಾರಗಳನ್ನು ಹಾಕಿ ಮುಂದೆ ಸಾಗಿದರು. ದೇವಸ್ಥಾನದ ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ಕಾಂಗ್ರೆಸ್ ಮುಖಂಡ ಎಚ್.ಸಿ ದಾಸೇಗೌಡ ಹಲವಾರು ವರ್ಷಗಳಿಂದ ರಥೋತ್ಸವದಲ್ಲಿ ಭಕ್ತಾಧಿಗಳಿಗೆ ಪ್ರಸಾದ ವ್ಯವಸ್ಥೆ ನೆರವೇರಿಸಿಕೊಂಡು ಬರುತ್ತಿದ್ದು, ಈ ಬಾರಿ ಸಹ ಇವರ ನೇತೃತ್ವದಲ್ಲಿ ಪ್ರಸಾದ ವಿತರಣೆ ನಡೆಯಿತು.
ಶಾಸಕ ಬಿ.ಕೆ ಸಂಗಮೇಶ್ವರ್, ಸಮಾಜ ಸೇವಕ ಸ್ನೇಹ ಜೀವಿ ಬಳಗದ ಪೊಲೀಸ್ ಉಮೇಶ್, ನಗರಸಭಾ ಸದಸ್ಯೆ ಎಂ.ಎಸ್ ಸುಧಾಮಣಿ, ಬಿಜೆಪಿ ಮುಖಂಡ ಎಚ್.ಸಿ ರಮೇಶ್, ಮುಖಂಡರಾದ ದೇವಸ್ಥಾನ ಸೇವಾ ಸಮಿತಿ ಪ್ರಮುಖರಾದ ಕರಿಯಪ್ಪ, ಎ.ಟಿ ರವಿ, ಕಬ್ಬಡಿ ಕೃಷ್ಣೇಗೌಡ, ಸತೀಶ್‌ಗೌಡ, ತಿಮ್ಮೇಗೌಡ, ಆರ್. ವೇಣುಗೋಪಾಲ್ ಸೇರಿದಂತೆ ಇನ್ನಿತರ ಗಣ್ಯರು ಪಾಲ್ಗೊಂಡು ಸ್ವಾಮಿಯ ಕೃಪೆಗೆ ಪಾತ್ರರಾದರು.
ಕೊವೀಡ್-೧೯ರ ಹಿನ್ನಲೆಯಲ್ಲಿ ದೇವಸ್ಥಾನ ಆಡಳಿತ ಮಂಡಳಿ ಹೆಚ್ಚಿನ ಜಾಗೃತಿ ವಹಿಸಿತ್ತು. ಭಕ್ತಾಧಿಗಳ ಸಂಖ್ಯೆ ನಿಯಂತ್ರಿಸುವ ಹಿನ್ನಲೆಯಲ್ಲಿ ರಥೋತ್ಸವ ಕುರಿತು ಹೆಚ್ಚಿನ ಪ್ರಚಾರ ಕೈಗೊಂಡಿರಲಿಲ್ಲ. ಆದರೂ ಸಹ ಈ ಬಾರಿ ಪ್ರತಿ ವರ್ಷಕ್ಕಿಂತ ಹೆಚ್ಚಿನ ಭಕ್ತಾಧಿಗಳು ಪಾಲ್ಗೊಂಡು ಸ್ವಾಮಿಯ ಕೃಪೆಗೆ ಪಾತ್ರರಾದರು.
ಮಾಸ್ಕ್-ಸಾಮಾಜಿಕ ಅಂತರ ಕಂಡು ಬರಲಿಲ್ಲ:
ರಥೋತ್ಸವದಲ್ಲಿ ಪಾಲ್ಗೊಂಡಿದ್ದ ಭಕ್ತಾಧಿಗಳಲ್ಲಿ ಸಾಮಾಜಿಕ ಅಂತರವಾಗಲಿ, ಮಾಸ್ಕ್ ಬಳಕೆಯಾಗಲಿ ಕಂಡು ಬರಲಿಲ್ಲ. ಒಟ್ಟಾರೆ ಕೋವಿಡ್-೧೯ ನಿಯಮಗಳನ್ನು ಪಾಲಿಸದಿರುವುದು ವಿಪರ್ಯಾಸದ ಸಂಗತಿಯಾಗಿದೆ.

No comments:

Post a Comment