ನಗರಸಭೆ ಮೆಸ್ಕಾಂ ಘಟಕ-೧ರ ವ್ಯಾಪ್ತಿಯ ಜೆಪಿಎಸ್ ಕಾಲೋನಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಶ್ವೇಶ್ವರಾಯ ಉದ್ಯಾನವನದಲ್ಲಿ ಕುಡಿಯುವ ನೀರಿನ ಘಟಕ, ವ್ಯಾಯಾಮ ಸಲಕರಣೆಗಳು ಮತ್ತು ಮಕ್ಕಳ ಆಟಿಕೆಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಶಾಸಕ ಬಿ.ಕೆ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಇನ್ನಿತರರು ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು.
ಭದ್ರಾವತಿ, ಡಿ. ೨೦: ಪ್ರತಿಯೊಬ್ಬರಿಗೂ ಆರೋಗ್ಯವೇ ಮುಖ್ಯ. ಈ ಹಿನ್ನಲೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳುವ ಮನೋಭಾವ ಪ್ರತಿಯೊಬ್ಬರು ಬೆಳೆಸಿಕೊಳ್ಳಬೇಕೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಕರೆ ನೀಡಿದರು.
ಅವರು ನಗರಸಭೆ ಮೆಸ್ಕಾಂ ಘಟಕ-೧ರ ವ್ಯಾಪ್ತಿಯ ಜೆಪಿಎಸ್ ಕಾಲೋನಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಶ್ವೇಶ್ವರಾಯ ಉದ್ಯಾನವನದಲ್ಲಿ ಕುಡಿಯುವ ನೀರಿನ ಘಟಕ, ವ್ಯಾಯಾಮ ಸಲಕರಣೆಗಳು ಮತ್ತು ಮಕ್ಕಳ ಆಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬರು ಉತ್ತಮ ಆರೋಗ್ಯದೊಂದಿಗೆ ಸದೃಢರಾಗಬೇಕು. ಆರೋಗ್ಯ ಕಾಪಾಡಿಕೊಳ್ಳಲು ಹಣ ವ್ಯಯ ಮಾಡಬೇಕಾಗಿಲ್ಲ. ಬದಲಾಗಿ ಬೆಳಿಗ್ಗೆ ಮತ್ತು ಸಂಜೆ ವೇಳೆ ಸ್ವಲ್ಪ ಸಮಯ ಮೀಸಲಿಟ್ಟು ಉತ್ತಮ ಪರಿಸರದಲ್ಲಿ ನಡಿಗೆ, ಕ್ರೀಡಾ ಚಟುವಟಿಕೆಗಳು, ವ್ಯಾಯಾಮ ಸೇರಿದಂತೆ ಇನ್ನಿತರ ಚಟುವಟಿಕೆಗಳನ್ನು ನಡೆಸಬೇಕು. ಇದರಿಂದಾಗಿ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದರು.
ಸಾರ್ವಜನಿಕರ ಹಣದಲ್ಲಿ ಉದ್ಯಾನವನ ನಿರ್ಮಿಸಲಾಗಿದೆ. ಪ್ರತಿಯೊಬ್ಬ ನಾಗರೀಕ ಸಹ ಉದ್ಯಾನವನ ಕಾಪಾಡಿಕೊಳ್ಳುವ ಜವಾಬ್ದಾರಿ ಹೊಂದಬೇಕು. ಟ್ರಸ್ಟ್‌ನ ಪದಾಧಿಕಾರಿಗಳು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಕೈಗೊಳ್ಳಬೇಕಾಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಗಮನ ಹರಿಸಬೇಕು. ಯಾವುದೇ ರೀತಿ ಕಾನೂನು ಬಾಹಿರ, ಅನೈತಿಕ ಚಟುವಟಿಕೆಗಳು ನಡೆಯದಂತೆ ಎಚ್ಚರವಹಿಸಬೇಕೆಂದರು.
ಜೆಪಿಎಸ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕರು, ಶಾಲೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್ ಸಂಪರ್ಕ ಹಾಗು ಶಿಥಿಲಗೊಂಡಿರುವ ಶಾಲಾ ಕೊಠಡಿಗಳನ್ನು ದುರಸ್ತಿಪಡಿಸಿಕೊಡುವಂತೆ ಹಾಗು ಸುತ್ತಮುತ್ತಲ ನಿವಾಸಿಗಳು ಸಮರ್ಪಕ ಕುಡಿಯುವ ನೀರಿನ ಪೂರೈಕೆ, ಬೀದಿ ದೀಪ ವ್ಯವಸ್ಥೆ ಕೈಗೊಳ್ಳುವಂತೆ ಶಾಸಕರಿಗೆ ಮನವಿ ಸಲ್ಲಿಸಿದರು.
ಸ್ಥಳೀಯ ಕಾಂಗ್ರೆಸ್ ಮುಖಂಡರಾದ ಜಯರಾಜ್, ಮಹೇಶ್, ಅರುಣ್, ನಗರಸಭಾ ಸದಸ್ಯರಾದ ಮಹೇಶ್, ಆಂಜನಪ್ಪ, ಮೆಸ್ಕಾಂ ಕಾರ್ಯಪಾಲಕ ಅಭಿಯಂತರ ವಿಜಯ್‌ಕುಮಾರ್, ನಗರಸಭೆ ಇಂಜಿನಿಯರ್ ಎಸ್.ಆರ್ ಸತೀಶ್, ಹೇಮಣ್ಣ, ಸಿದ್ದರಾಜು, ಸಿದ್ದಾರ್ಥ ಅಂಧರ ಕೇಂದ್ರದ ಅಧ್ಯಕ್ಷ ಶಿವಬಸಪ್ಪ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕುಮಾರ್ ನಿರೂಪಿಸಿದರು. ಸಿದ್ದಾರ್ಥ ಅಂಧರ ಕೇಂದ್ರದ ವಿಕಲಚೇತನ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
No comments:
Post a Comment