Thursday, May 14, 2020

ಕ್ವಾರಂಟೈನ್ ತೆರೆಯಲು ಗ್ರಾಮಸ್ಥರೊಂದಿಗೆ ಶಾಂತಿ ಸಭೆ

ನೂತನ ದಂಡಾಧಿಕಾರಿ ಪ್ರಯತ್ನ ಯಶಸ್ವಿ 

ಭದ್ರಾವತಿ ತಾಲೂಕಿನ ಹಂಚಿನ ಸಿದ್ದಾಪುರ ಮತ್ತು ದೇವರನರಸೀಪುರ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಕ್ವಾರಂಟೈನ್ ತೆರೆಯಲು ಗ್ರಾಮಸ್ಥರೊಂದಿಗೆ ಶಾಂತಿ ಸಭೆ ನಡೆಸುತ್ತಿರುವ ನೂತನ ತಾಲೂಕು ದಂಡಾಧಿಕಾರಿ ತಹಸೀಲ್ದಾರ್ ಶಿವಕುಮಾರ್. 
ಭದ್ರಾವತಿ, ಮೇ. ೧೪: ಕೊರೋನಾ ವೈರಸ್ ಕುರಿತು ಜಾಗೃತಿ ಮೂಡಿಸುವ ಜೊತೆಗೆ ಗ್ರಾಮಸ್ಥರ ಸಹಕಾರ ಪಡೆದು ಕ್ವಾರಂಟೈನ್ ತೆರೆಯುವಲ್ಲಿ ನೂತನ ತಾಲೂಕು ದಂಡಾಧಿಕಾರಿ ತಹಸೀಲ್ದಾರ್ ಶಿವಕುಮಾರ್ ಪ್ರಮುಖ ಪಾತ್ರ ವಹಿಸಿದ್ದಾರೆ.
ನಗರ ಪ್ರದೇಶದ ವ್ಯಾಪ್ತಿಯಲ್ಲಿ ಕ್ವಾರಂಟೈನ್ ತೆರೆಯಲು ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ತಾಲೂಕಿನ ಹಂಚಿನ ಸಿದ್ದಾಪುರ ಮತ್ತು ದೇವರನರಸೀಪುರದ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಕ್ವಾರಂಟೈನ್ ತೆರೆಯಲು ಅಲ್ಲಿನ ಗ್ರಾಮಸ್ಥರೊಂದಿಗೆ ಶಾಂತಿ ಸಭೆ ನಡೆಸಿ ಕೊರೋನಾ ವೈರಸ್ ನಿರ್ಮೂಲನೆಗೆ ಕೈಗೊಂಡಿರುವ ಕ್ರಮ ಕುರಿತು ಮನವರಿಕೆ ಮಾಡಿಕೊಡುವ ಮೂಲಕ ಸಹಕರಿಸುವಂತೆ ಶಿವಕುಮಾರ್ ಮನವಿ ಮಾಡಿದರು.
ತಹಸೀಲ್ದಾರ್ ಮಾತಿಗೆ ಗ್ರಾಮಸ್ಥರು ಬೆಂಬಲ ವ್ಯಕ್ತಪಡಿಸಿದ್ದು, ಕಳೆದ ೩ ದಿನಗಳಿಂದ ಕ್ವಾರಂಟೈನ್ ಕಾರ್ಯಾಚರಣೆಯಲ್ಲಿದ್ದು, ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಬಂದವರಿಗೆ ನಿಗಾದಲ್ಲಿರಿಸಲಾಗುತ್ತಿದೆ. ತುರ್ತು ಸಂದರ್ಭಕ್ಕೆ ಅಗತ್ಯ ಕ್ರಮಗಳನ್ನು ಸಹ ಕೈಗೊಳ್ಳಲಾಗಿದೆ.
ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೆ.ಜೆ ತಮ್ಮಣ್ಣಗೌಡ, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ, ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕ ಈ.ಓ ಮಂಜುನಾಥ್, ಗ್ರಾಮದ ಸ್ಥಳೀಯ ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.   

ಅಧಿಕ ಮೊತ್ತದ ವಿದ್ಯುತ್ ಬಿಲ್ : ಮೆಸ್ಕಾಂ ಅಧಿಕಾರಿಗಳೊಂದಿಗೆ ಮಾಜಿ ಶಾಸಕ ಅಪ್ಪಾಜಿ ಮಾತುಕತೆ

ಗ್ರಾಹಕರಿಗೆ ಹೊರೆಯಾಗದಂತೆ ಕ್ರಮ ಕೈಗೊಳ್ಳಲು ಮನವಿ 

ಭದ್ರಾವತಿಯಲ್ಲಿ ಗುರುವಾರ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಮೆಸ್ಕಾಂ ಕಛೇರಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಭದ್ರಾವತಿ, ಮೇ. ೧೪: ಗ್ರಾಹಕರ ವಿದ್ಯುತ್ ಬಳಕೆಗೆ ಸಂಬಂಧಿಸಿದಂತೆ ಮೆಸ್ಕಾಂ ವತಿಯಿಂದ ನೀಡಲಾಗಿರುವ ಬಿಲ್‌ಗಳು ಅವೈಜ್ಞಾನಿಕವಾಗಿದ್ದು, ಪ್ರಸ್ತುತ ಎದುರಾಗಿರುವ ಸಂದಿಗ್ದ ಪರಿಸ್ಥಿತಿಯಲ್ಲಿ ಅಧಿಕ ಮೊತ್ತದ ಬಿಲ್ ಪಾವತಿಸುವುದು ಅಸಾಧ್ಯವಾಗಿದೆ. ಈ ಸಂಬಂಧ ಪರಿಶೀಲಿಸಿ ಗ್ರಾಹಕರಿಗೆ ಹೊರೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಮೆಸ್ಕಾಂ ಅಧಿಕಾರಿಗಳಿಗೆ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಮನವಿ ಮಾಡಿದರು.
ಗುರುವಾರ ಮೆಸ್ಕಾಂ ಕಛೇರಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಕೊರೋನಾ ವೈರಸ್ ಹಿನ್ನಲೆಯಲ್ಲಿ ಲಾಕ್‌ಡೌನ್ ಘೋಷಿಸಿದ ಪರಿಣಾಮ ಉದ್ಯೋಗವಿಲ್ಲದೆ ಶ್ರೀಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ನಡುವೆ ವಿದ್ಯುತ್ ಬಳಕೆ ಬಿಲ್‌ಗಳನ್ನು ನೀಡಲಾಗಿದ್ದು, ಅವೈಜ್ಞಾನಿಕವಾಗಿ ಅಧಿಕ ಮೊತ್ತ ವಿಧಿಸಲಾಗಿದೆ. ಯೂನಿಟ್‌ಗೆ ನಿಗದಿತ ದರಕ್ಕಿಂತ ಹೆಚ್ಚಿನ ದರ ವಿಧಿಸಿರುವುದು ಸರಿಯಲ್ಲ.  ಇದರಿಂದಾಗಿ ಬಿಲ್ ಪಾವತಿಸುವುದು ಗ್ರಾಹಕರಿಗೆ ಕಷ್ಟವಾಗಿದೆ. ಯಾವುದೇ ರೀತಿ ಹೊರೆಯಾಗದಂತೆ ಬಿಲ್ ಪಾವತಿಸಲು ಅನುಕೂಲ ಕಲ್ಪಿಸಿಕೊಡಬೇಕೆಂದರು.
ಇದಕ್ಕೆ ಪ್ರತಿಕ್ರಿಯಿಸಿದ ಕಾರ್ಯಪಾಲಕ ಇಂಜಿನಿಯರ್ ಮೋಹನ್‌ಕುಮಾರ್, ಇಲಾಖೆಯ ಮಾರ್ಗಸೂಚಿಯಂತೆ ಬಿಲ್ ನೀಡಲಾಗಿದೆ. ಗ್ರಾಹಕರಿಗೆ ಯಾವುದೇ ರೀತಿ ಅನುಮಾನ ಕಂಡು ಬಂದಲ್ಲಿ ಕಛೇರಿ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ. ಗ್ರಾಹಕರಿಗೆ ಉಂಟಾಗಿರುವ ಗೊಂದಲ ಬಗೆಹರಿಸುವುದಾಗಿ ಭರವಸೆ ನೀಡಿದರು.
ಮೆಸ್ಕಾಂ ಅಧಿಕಾರಿ ರಾಮಚಂದ್ರ, ಹಿರಿಯ ಕಾರ್ಮಿಕ ಮುಖಂಡರಾದ ಎಸ್.ಎನ್ ಬಾಲಕೃಷ್ಣ, ನರಸಿಂಹಚಾರ್, ಡಿ.ಟಿ ಶ್ರೀಧರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಮೇ.15ರಂದು ವಿದ್ಯುತ್ ವ್ಯತ್ಯಯ

ಭದ್ರಾವತಿ, ಮೇ. ೧೪: ಲೋಕೋಪಯೋಗಿ ಇಲಾಖೆ ವತಿಯಿಂದ ನಗರದ ಹೊಸಮನೆ ರಸ್ತೆ ಅಗಲೀಕರಣ ಕಾರ್ಯ ಕೈಗೊಂಡಿರುವ ಕಾರಣ ರಸ್ತೆಯ ಇಕ್ಕೆಲಗಳಲ್ಲಿರುವ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಮೇ.15ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30ರ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಹೊಸಮನೆ ಶಿವಾಜಿ ವೃತ್ತ, ತಮ್ಮಣ್ಣ ಕಾಲೋನಿ, ಕುವೆಂಪು ನಗರ, ಹನುಮಂತ ನಗರ, ತ್ಯಾಗರಾಜ ನಗರ, ವಿಜಯ ನಗರ, ಅಶ್ವತ್ಥ ನಗರ, ಕಬಳಿಕಟ್ಟೆ ಸೇರಿದಂತೆ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪೂರ್ವ ಸಿದ್ದತೆ : ಕನ್ನಡ ವಿಷಯ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ

ಭದ್ರಾವತಿ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ನೇತೃತ್ವದಲ್ಲಿ ಗುರುವಾರ ಕನ್ನಡ ವಿಷಯ ಕುರಿತು ಪೋನ್ ಇನ್ ಕಾರ್ಯಕ್ರಮ ನಡೆಯಿತು. 
ಭದ್ರಾವತಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಪೂರ್ವ ಸಿದ್ದತೆಗಾಗಿ ವಿಷಯವಾರು ಕ್ಲಸ್ಟಾಂಶಗಳ ಬಗ್ಗೆ ಇರುವ ಸಂದೇಹಗಳು ಮತ್ತು ಗೊಂದಲಗಳನ್ನು ಪರಿಹರಿಸಲು ಹಮ್ಮಿಕೊಳ್ಳಲಾಗಿರುವ ಪೋನ್ ಇನ್ ಕಾರ್ಯಕ್ರಮದಲ್ಲಿ ಗುರುವಾರ ಕನ್ನಡ ವಿಷಯ ಕುರಿತು ಸಂಪನ್ಮೂಲ ವ್ಯಕ್ತಿಗಳು ಮಾಹಿತಿ ನೀಡಿದರು.
ಶಿಕ್ಷಕರಾದ ಡಾ. ಬಿ.ಎ ತಂಬೂಳಿ, ಕೆ. ಬಸವರಾಜ ಮತ್ತು ಅರಳೇಹಳ್ಳಿ  ಅಣ್ಣಪ್ಪ ವಿದ್ಯಾರ್ಥಿಗಳ  ಪ್ರಶ್ನೆಗಳಿಗೆ ಉತ್ತರಿಸಿದರು. ಅಲ್ಲದೆ ಪರೀಕ್ಷೆಯನ್ನು ಧೈರ್ಯವಾಗಿ ಎದುರಿಸುವಂತೆ ಸಲಹೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಯ ವಿಷಯವಾರು ನಿರೀಕ್ಷಕರಾದ ಎಂ. ಸತೀಶ್, ಶಿವನೆಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ವಿವಿಧ ಶಾಲೆಗಳ ಮಕ್ಕಳು ಕನ್ನಡ ವಿಷಯದಲ್ಲಿನ ಸಂದೇಹ ಮತ್ತು ಗೊಂದಲಗಳನ್ನು ಪರಿಹರಿಸಿಕೊಂಡರು. ಮೇ.೨೦ರ ವರೆಗೆ ಕಾರ್ಯಕ್ರಮ ನಡೆಯಲಿದೆ.