ತಾಲೂಕು ಆಡಳಿತ ಬೌಂಡರಿ ನಿಗದಿ ಕಾರ್ಯ ಕೈಗೊಳ್ಳಲು ಎಲ್ಲಾ ರೀತಿಯ ಸಹಕಾರ
ಭದ್ರಾವತಿ ನಗರಸಭೆ ವ್ಯಾಪ್ತಿಯ ಕೆರೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ನಗರಸಭೆ ಸಭಾಂಗಣದಲ್ಲಿ ತಹಸೀಲ್ದಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪೌರಾಯುಕ್ತ ಮನೋಹರ್ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ನಗರಸಭೆ ವ್ಯಾಪ್ತಿಯ ಕೆರೆಗಳ ಬೌಂಡರಿ ನಿಗದಿಗೊಳಿಸುವಂತೆ ಒತ್ತಾಯಿಸಿ ಸಲ್ಲಿಸಲಾದ ಮನವಿ ಸ್ವೀಕರಿಸಿದರು.
ಭದ್ರಾವತಿ, ಜೂ. ೧೭: ನಗರಸಭೆ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಅಭಿವೃದ್ಧಿಪಡಿಸುವ ಸಂಬಂಧ ತಾಲೂಕು ಆಡಳಿತ ಬೌಂಡರಿ ನಿಗದಿ ಕಾರ್ಯ ಕೈಗೊಂಡಲ್ಲಿ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಪೌರಾಯುಕ್ತ ಮನೋಹರ್ ಭರವಸೆ ನೀಡಿದರು.
ಅವರು ನಗರಸಭೆ ಸಭಾಂಗಣದಲ್ಲಿ ಕೆರೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ತಹಸೀಲ್ದಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡು ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ನಗರಸಭೆ ವ್ಯಾಪ್ತಿಯ ಕೆರೆಗಳ ಬೌಂಡರಿ ನಿಗದಿಗೊಳಿಸುವಂತೆ ಒತ್ತಾಯಿಸಿ ಸಲ್ಲಿಸಲಾದ ಮನವಿ ಸ್ವೀಕರಿಸಿ ಮಾತನಾಡಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ದನಗಾಹಿಗಳಿಗೆ, ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಹಾಗೂ ಅಂತರ್ಜಲ ಚೇತನ ಯೋಜನೆಯಡಿ ಕೆರೆಗಳನ್ನು ಅಭಿವೃದ್ಧಿ ಪಡಿಸಿದಂತೆ ನಗರಸಭೆ ವ್ಯಾಪ್ತಿಯಲ್ಲಿರುವ ಸುಮಾರು ೭೫ಕ್ಕೂ ಅಧಿಕ ಕೆರೆಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುವುದು. ಇದಕ್ಕೂ ಮೊದಲು ತಾಲೂಕು ಆಡಳಿತ ಕೆರೆಗಳ ಬೌಂಡರಿ ನಿಗದಿಪಡಿಸಬೇಕಾಗಿದೆ ಎಂದರು.
ತಕ್ಷಣ ತಾಲೂಕು ಆಡಳಿತ ಕೆರೆಗಳ ಬೌಂಡರಿ ನಿಗದಿ ಕಾರ್ಯ ಕೈಗೊಂಡಲ್ಲಿ ನಗರಸಭೆ ವತಿಯಿಂದ ಸಂಪೂರ್ಣ ಸಹಕಾರ ನೀಡಲಾಗುವುದು. ಅಲ್ಲದೆ ವಿವಿಧ ಇಲಾಖೆಗಳು ಕೆರೆಗಳ ಅಭಿವೃದ್ಧಿಗೆ ಹೆಚ್ಚಿನ ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಶಿರಸ್ತೆದಾರ್ ಎಸ್.ಎಂ ಮಲ್ಲಿಕಾರ್ಜುನಯ್ಯ, ಸರ್ವೆ ಸೂಪರ್‌ವೈಸರ್ ಎ.ಎಲ್ ನಟರಾಜು, ಎಸ್‌ಡಿಎ ಪೂರ್ಣಿಮಾ, ಕೆಎನ್‌ಎನ್‌ಎಲ್ ನಂ.೩ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆರ್.ಬಿ ಮಂಜುನಾಥ್, ಸಹಾಯಕ ಇಂಜಿನಿಯರ್ ಎನ್. ಉಮೇಶ್, ಶಿವಮೊಗ್ಗ ಎಂ.ಐ ಸಬ್‌ಡಿವಿಷನ್ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ರಂಗನಾಥ, ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ಛೇರ‍್ಮನ್ ಆರ್. ವೇಣುಗೋಪಾಲ್, ರಮಾ ವೆಂಕಟೇಶ್, ಶೈಲಜಾ ರಾಮಕೃಷ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.