Sunday, September 6, 2020

ಭದ್ರಾವತಿಯಲ್ಲಿ ಎಎಪಿ ಕೇರ್ಸ್, ಆಕ್ಸಿ ಮಿತ್ರ ಯೋಜನೆಗೆ ಚಾಲನೆ

ಭದ್ರಾವತಿ ರಂಗಪ್ಪ ವೃತ್ತದಲ್ಲಿ ಭಾನುವಾರ ಎಎಪಿ ವತಿಯಿಂದ ಕೊರೋನಾ ಸೋಂಕು ಹರಡದಂತೆ ಸಾರ್ವಜನಿಕರಿಗೆ ಜಾಗೃತಿ ಹಾಗು ಆರೋಗ್ಯ ತಪಾಸಣೆ ನಡೆಸಲಾಯಿತು.
ಭದ್ರಾವತಿ, ಸೆ. ೬: ದೇಶಾದ್ಯಂತ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಈ ನಡುವೆ ಸೋಂಕು ನಿಯಂತ್ರಣಕ್ಕೆ ಮುಂದಾಗಿರುವ ಆಮ್ ಆದ್ಮಿ ಪಾರ್ಟಿ ನೂತನ ಯೋಜನೆಯನ್ನು ಜಾರಿಗೆ ತರುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ಕೆ ಮುಂದಾಗಿದೆ.
        ಈಗಾಗಲೇ ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಎಎಪಿ ಕೇರ್ಸ್ ಹಾಗು ಆಕ್ಸಿ ಮಿತ್ರ ಯೋಜನೆ ಜಾರಿಗೆ ತಂದಿದೆ. ಪಕ್ಷದ ಮುಖಂಡರು, ಕಾರ್ಯಕರ್ತರು ಯೋಜನೆ ಕುರಿತು ವ್ಯಾಪಕ ನಡೆಸುತ್ತಿದ್ದು, ಭಾನುವಾರ ನಗರದ ರಂಗಪ್ಪ ವೃತ್ತದಲ್ಲಿ ಚಾಲನೆ ನೀಡಲಾಯಿತು.
     ಸೋಂಕು ಹರಡದಂತೆ ವಹಿಸಬೇಕಾದ ಮುನ್ನಚ್ಚರಿಕೆ ಕ್ರಮಗಳನ್ನು ಕುರಿತು ಜಾಗೃತಿ ಮೂಡಿಸಲಾಯಿತು. ಥರ್ಮಲ್ ಸ್ಕ್ಯಾನರ್ ಮೂಲಕ ಜ್ವರ ತಪಾಸಣೆ ನಡೆಸಲಾಯಿತು. ಕೈ ತೋರು ಬೆರಳಿನ ಮೂಲಕ ಆಕ್ಸಿಜನ್ ಪ್ರಮಾಣ ಪರೀಕ್ಷಿಸಲಾಯಿತು. ಸುಮಾರು ೫೦೦ಕ್ಕೂ ಮಂದಿ ತಪಾಸಣೆಯಲ್ಲಿ ಪಾಲ್ಗೊಂಡಿದ್ದರು.
      ಪಕ್ಷದ  ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್, ತಾಲೂಕು ಉಪಾಧ್ಯಕ್ಷ ಇಬ್ರಾಹಿಂ ಖಾನ್, ಪ್ರಮುಖರಾದ ಪರಮೇಶ್ವರಚಾರ್, ಜೋಸೆಫ್, ಮುಳ್ಕೆರೆ ಲೋಕೇಶ್, ಪರಮೇಶ್‌ನಾಯ್ಕ, ಪಕ್ಷದ ಮಹಿಳಾ ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಅಪ್ಪಾಜಿ ನಿಧನ ಜೆಡಿಎಸ್ ಸೇರಿದಂತೆ ಸಮಾನ ಮನಸ್ಸುಗಳಿಗೆ ತುಂಬಲಾರದ ನಷ್ಟ : ಟಿ.ಎಚ್ ಹಾಲೇಶಪ್ಪ

ಭದ್ರಾವತಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ತಾಲೂಕು ಶಾಖೆ ವತಿಯಿಂದ ನಗರದ ಸಿ.ಎನ್ ರಸ್ತೆಯಲ್ಲಿರುವ ಸಂಘದ ಕಛೇರಿಯಲ್ಲಿ ಭಾನುವಾರ ಮಾಜಿ ಶಾಸಕ ಎಂ.ಜೆ ಅಪ್ಪಾಜಿಯವರ ಶ್ರದ್ದಾಂಜಲಿ ಏರ್ಪಡಿಸಲಾಗಿತ್ತು.
ಭದ್ರಾವತಿ, ಸೆ. ೬: ಕ್ಷೇತ್ರದ ಮಾಜಿ ಶಾಸಕ ಎಂ.ಜೆ ಅಪ್ಪಾಜಿಯವರ ನಿಧನ ಪ್ರಜಾಪ್ರಭುತ್ವದ ಆಶಯಗಳನ್ನು ಹೊಂದಿರುವ ಜೆಡಿಎಸ್ ಪಕ್ಷಕ್ಕೆ ಹಾಗು ಸಾಮಾಜಿಕ ಕಳಕಳಿ ಹೊಂದಿರುವ ಸಮಾನ ಮನಸ್ಸುಗಳಿಗೆ ತುಂಬಲಾರದ ನಷ್ಟವನ್ನುಂಟು ಮಾಡಿದೆ ಎಂದು ಡಿಎಸ್‌ಎಸ್ ಜಿಲ್ಲಾ ಪ್ರಧಾನ ಸಂಚಾಲಕ ಟಿ.ಎಚ್ ಹಾಲೇಶಪ್ಪ ಹೇಳಿದರು.
        ಅವರು ಭಾನುವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ತಾಲೂಕು ಶಾಖೆ ವತಿಯಿಂದ ನಗರದ ಸಿ.ಎನ್ ರಸ್ತೆಯಲ್ಲಿರುವ ಸಂಘದ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಜಿ ಶಾಸಕ ಎಂ.ಜೆ ಅಪ್ಪಾಜಿಯವರ ಶ್ರದ್ದಾಂಜಿಲಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
       ದೇಶದಲ್ಲಿ ಪ್ರಸ್ತುತ ಆಡಳಿತದಲ್ಲಿರುವ ಬಿಜೆಪಿ ಸರ್ಕಾರ ಸಂವಿಧಾನದ ಆಶಯಗಳನ್ನು ಹಂತ ಹಂತವಾಗಿ ನಾಶಪಡಿಸುತ್ತಿದೆ. ಅಲ್ಲದೆ ಸಂವಿಧಾನ ವಿರೋಧಿ ಕಾಯ್ದೆಗಳನ್ನು ಜಾರಿಗೆ ತರುತ್ತಿದೆ. ರಾಜ್ಯದಲ್ಲೂ ಸಹ ಇಂದಿನ ಬಿಜೆಪಿ ಸರ್ಕಾರ ಪ್ರಪಂಚದಾದ್ಯಂತ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಸಂದಿಗ್ದ ಪರಿಸ್ಥಿತಿಯ ಸಂದರ್ಭದಲ್ಲಿ ವಿಧಾನಸಭೆ, ವಿಧಾನಪರಿಷತ್‌ನಲ್ಲಿ ಯಾವುದೇ ಚರ್ಚೆ ನಡೆಸದೆ ರೈತರಿಗೆ ಮಾರಕವಾಗುವ ಭೂ ಸುಧಾರಣಾ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದೆ. ಇದರಿಂದ ಸಣ್ಣ ರೈತರಿಗೆ ಸಂಕಷ್ಟ ಎದುರಾಗಿದೆ. ತಮ್ಮದೇ ಜಮೀನಿನಲ್ಲಿ ಜೀತದಾಳುಗಳಾಗಿ ದುಡಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಎಲ್ಲಾ ಲಕ್ಷಣಗಳನ್ನು ಕಳೆದುಕೊಂಡಿದೆ. ಪ್ರಾದೇಶಿಕ ಪಕ್ಷಗಳು ತಮ್ಮ ಅಸ್ತಿತ್ವ ಕಂಡುಕೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ಜೆಡಿಎಸ್ ಪಕ್ಷ ರಾಜ್ಯದಲ್ಲಿ ಹೆಚ್ಚು ಗಮನ ಸೆಳೆಯುತ್ತಿದ್ದು, ಸಂವಿಧಾನ ಆಶಯಗಳನ್ನು ಉಳಿಸುವ ಜವಾಬ್ದಾರಿಯನ್ನು ಹೊಂದಿದೆ. ಇಂತಹ ಪಕ್ಷಕ್ಕೆ ಶಕ್ತಿಯಾಗಿದ್ದ ಅಪ್ಪಾಜಿಯವರ ನಿಧನ ನಿಜಕ್ಕೂ ತುಂಬಲಾರದ ನಷ್ಟವನ್ನುಂಟು ಮಾಡಿದೆ ಎಂದರು.
      ಜಿಲ್ಲಾ ಸಂಘಟನಾ ಸಂಚಾಲಕ ಎಂ. ಪಳನಿರಾಜ್ ಮಾತನಾಡಿ, ಅಪ್ಪಾಜಿಯವರು ಬಡವರು, ದಲಿತರು, ರೈತರು, ಕಾರ್ಮಿಕರು, ಶೋಷಿತರ ಬಗ್ಗೆ ಹೆಚ್ಚಿನ ಕಾಳಜಿ ಹೊಂದಿದ್ದರು. ಸಂಘಟನೆಯ ಹಲವು ಹೋರಾಟಗಳಿಗೆ ಬೆಂಬಲ ನೀಡುವ ಜೊತೆಗೆ ಸಂಘಟನೆಯ ಎಲ್ಲಾ ಕಾರ್ಯಗಳನ್ನು ಪ್ರೋತ್ಸಾಹಿಸುತ್ತಿದ್ದರು ಇಂತಹ ಜನಪ್ರತಿನಿಧಿ ಕಣ್ಮರೆಯಾಗಿರುವುದು ವಿಷಾದನೀಯ ಎಂದರು.
      ತಾಲೂಕು ಸಂಚಾಲಕ ಎಂ. ಕುಬೇಂದ್ರಪ್ಪ ಅಧ್ಯಕ್ಷತೆ ವಹಿಸಿದ್ದರು. ಸಂಘಟನೆಯ ಪದಾಧಿಕಾರಿಗಳು, ಇನ್ನಿತರರು ಉಪಸ್ಥಿತರಿದ್ದರು.