ಭದ್ರಾವತಿ ನಗರಸಭೆ ಆಡಳಿತ ಕಛೇರಿಯಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ಬುಧವಾರ ಮಧ್ಯಾಹ್ನ ಸೀಲ್‌ಡೌನ್ ಮಾಡಲಾಗಿದೆ.
ಭದ್ರಾವತಿ, ಸೆ. ೯: ತಾಲೂಕಿನಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಮಹಾಮಾರಿ ಸರ್ಕಾರಿ ಕಛೇರಿಗಳನ್ನು ಸಹ ಆವರಿಸಿಕೊಳ್ಳುತ್ತಿದೆ. ಇದೀಗ ನಗರಸಭೆ ಆಡಳಿತ ಕಛೇರಿ ಸಹ ಸೀಲ್‌ಡೌನ್ ಮಾಡಲಾಗಿದೆ.
ನಗರಸಭೆ ಪೌರಾಯುಕ್ತ ಮನೋಹರ್, ಹಿರಿಯ ಆರೋಗ್ಯ ನಿರೀಕ್ಷಕ ಆರ್.ಬಿ ಸತೀಶ್ ಸಹ ಸೋಂಕಿಗೆ ಒಳಗಾಗಿದ್ದು, ಈ ಹಿನ್ನಲೆಯಲ್ಲಿ ನಗರಸಭೆ ಆಡಳಿತಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್‌ರವರ ಸೂಚನೆ ಮೇರೆಗೆ ಬುಧವಾರ ಮಧ್ಯಾಹ್ನ ನಗರಸಭೆ ಕಛೇರಿಯನ್ನು ಸೀಲ್‌ಡೌನ್ ಮಾಡಲಾಗಿದೆ.
ಕೆಲವು ದಿನಗಳ ಹಿಂದೆ ಪೌರಾಯುಕ್ತರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದು, ಈ ಹಿನ್ನಲೆಯಲ್ಲಿ ಆರೋಗ್ಯ ತಪಾಸಣೆ ವೇಳೆ ಸೋಂಕು ಇರುವುದು ದೃಢಪಟ್ಟಿದೆ. ಅನಾರೋಗ್ಯದ ನಡುವೆಯೂ ಕರ್ತವ್ಯಕ್ಕೆ ಹಾಜರಾಗಿದ್ದರು. ಮಂಗಳವಾರ ಮಧ್ಯಾಹ್ನ ಶಾಸಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲೂ ಪಾಲ್ಗೊಂಡಿದ್ದರು.
ಸೋಂಕು ನಿಯಂತ್ರಣಕ್ಕೆ ವ್ಯಾಪಕ ಕ್ರಮ :
ಅಧಿಕಾರಿಯಾದರೂ ಸಹ ನಗರದಲ್ಲಿ ಸಾಮಾನ್ಯ ಜನರೊಂದಿಗೆ ಸಾಮಾನ್ಯ ವ್ಯಕ್ತಿಯಂತೆ ಗುರುತಿಸಿಕೊಂಡಿರುವ ಮನೋಹರ್‌ರವರು ಎಲ್ಲಾ ಕೆಲಸಗಳ್ನು ಅಚ್ಚುಕಟ್ಟಾಗಿ ನಿರ್ವಹಿಸಿಕೊಂಡು ಬರುತ್ತಿದ್ದಾರೆ. ಕೊರೋನಾ ಸೋಂಕು ಕಾಣಿಸಿಕೊಂಡಾಗಿನಿಂದಲೂ ನಿರಂತರವಾಗಿ ಹಗಲಿರುಳು ಕರ್ತವ್ಯ ನಿರ್ವಹಿಸುತ್ತಿದ್ದು, ಸೋಂಕು ನಿಯಂತ್ರಣಕ್ಕೆ ವ್ಯಾಪಕ ಕ್ರಮಗಳನ್ನು ಕೈಗೊಂಡಿದ್ದಾರೆ. ಬಡವರ ಬಗ್ಗೆ ಹೆಚ್ಚಿನ ಕಾಳಜಿವಹಿಸಿದ್ದ ಪೌರಾಯುಕ್ತರು ಕಂಟೈನ್ಮೆಂಟ್ ವಲಯಗಳಲ್ಲಿನ ಕಡುಬಡವರ ನೆರವಿಗೆ ಮುಂದಾಗಿದ್ದರು. ಕೊರೋನಾ ವಾರಿರ್ಯಸ್ ರೀತಿ ಕರ್ತವ್ಯ ನಿರ್ವಹಿಸುತ್ತಿರುವ ಪೌರಾಯುಕ್ತರು ಶೀಘ್ರ ಗುಣಮುಖರಾಗಲಿ ಎಂದು ನಗರದ ನಾಗರೀಕರು ದೇವರಲ್ಲಿ ಪ್ರಾರ್ಥಿಸಿದ್ದಾರೆ.
ನಗರಸಭೆ ಕಂದಾಯಾಧಿಕಾರಿ ರಾಜ್‌ಕುಮಾರ್ ಸಹ ಈಗಾಗಲೇ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆದು ಕೊಳ್ಳುತ್ತಿದ್ದಾರೆ. ಈ ಹಿಂದೆ ತಾಲೂಕು ಕಛೇರಿಯಲ್ಲೂ ಮಹಾಮಾರಿ ಕಾಣಿಸಿಕೊಂಡಿದ್ದು, ಸುಮಾರು ೧೦ಕ್ಕೂ ಹೆಚ್ಚು ಮಂದಿ ಸೋಂಕಿಗೆ ಒಳಗಾಗಿದ್ದರು. ಈ ಹಿನ್ನಲೆಯಲ್ಲಿ ಮಿನಿ ವಿಧಾನಸೌಧ ಸಹ ಸೀಲ್‌ಡೌನ್ ಮಾಡಲಾಗಿತ್ತು. ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಕಛೇರಿಗಳಲ್ಲೂ ಸಹ ಸೋಂಕು ಕಾಣಿಸಿಕೊಳ್ಳುತ್ತಿರುವುದು ನಗರದ ನಾಗರೀಕರನ್ನು ಆತಂಕಕ್ಕೆ ಒಳಗಾಗುವಂತೆ ಮಾಡಿದೆ.