ಭದ್ರಾವತಿ ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ಭ್ರಷ್ಟಾಚಾರದ ವಿರುದ್ಧ ಅರಿವು ಸಪ್ತಾಹ ಹಮ್ಮಿಕೊಳ್ಳಲಾಗಿತ್ತು.
ಭದ್ರಾವತಿ, ಅ. ೨೭: ಭ್ರಷ್ಟಾಚಾರ ಪ್ರಸ್ತುತ ದೇಶದ ಬಹುದೊಡ್ಡ ಸಮಸ್ಯೆಯಾಗಿದ್ದು, ಇದರಿಂದಾಗಿ ದೇಶದ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂದು ನಗರದ ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ ಹೇಳಿದರು.
ಅವರು ಮಂಗಳವಾರ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಭ್ರಷ್ಟಾಚಾರದ ವಿರುದ್ಧ ಅರಿವು ಸಪ್ತಾಹಕ್ಕೆ ಚಾಲನೆ ನೀಡಿ ಮಾತನಾಡಿದರು. ಭ್ರಷ್ಟಾಚಾರ ದೇಶದಲ್ಲಿ ಅಪಾಯಕಾರಿ ಸಾಮಾಜಿಕ ಸಮಸ್ಯೆಯಾಗಿ ರೂಪುಗೊಂಡಿದೆ. ಎಲ್ಲಾ ಕ್ಷೇತ್ರಗಳಿಗೂ ಇದರಿಂದ ಹಿನ್ನಡೆಯಾಗುತ್ತಿದ್ದು, ಈ ಹಿನ್ನಲೆಯಲ್ಲಿ ಇದರ ವಿರುದ್ಧ ಯುವ ಸಮುದಾಯ ಜಾಗೃತಗೊಂಡು ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದರು.
ದೇಶದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕೆ ಸಿಬಿಐ, ಲೋಕಾಯುಕ್ತ, ಎಸಿಬಿ ಮತ್ತು ಪೊಲೀಸ್ ವ್ಯವಸ್ಥೆಗಳು ಮತ್ತಷ್ಟು ಸದೃಢಗೊಳ್ಳಬೇಕು. ನಾಗರೀಕ ಸಮಾಜ ದಕ್ಷ ಹಾಗು ಪ್ರಾಮಾಣಿಕ ಅಧಿಕಾರಿಗಳು ಮತ್ತು ನೌಕರರನ್ನು ಗುರುತಿಸಿ ಗೌರವಿಸಬೇಕು. ಯುವ ಸಮುದಾಯ ಜಯಪ್ರಕಾಶ್ ನಾರಾಯಣ್ ಮತ್ತು ಲೋಹಿಯರವರ ಸಮಾಜವಾದಿ ಚಿಂತನೆಗಳನ್ನು, ಆದರ್ಶತನಗಳನ್ನು ಮೈಗೂಡಿಸಿಕೊಳ್ಳಬೇಕೆಂದರು.
ಭ್ರಷ್ಟಾಚಾರದ ವಿರುದ್ಧ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಕಾಲೇಜಿನ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಸಪ್ತಾಹದಲ್ಲಿ ಪಾಲ್ಗೊಂಡಿದ್ದರು.