Sunday, November 1, 2020

೬೫ನೇ ಕನ್ನಡ ರಾಜ್ಯೋತ್ಸವ : ಆರೋಗ್ಯ ಇಲಾಖೆ ಸಿಬ್ಬಂದಿಗೆ ಸನ್ಮಾನ

ಭದ್ರಾವತಿ ಆಮ್ ಆದ್ಮಿ ಪಾರ್ಟಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೬೫ನೇ ಕನ್ನಡ ರಾಜ್ಯೋತ್ಸವದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ವೀಣಾರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ, ನ. ೧: ನಗರದ ಆಮ್ ಆದ್ಮಿ ಪಾರ್ಟಿ ಕಛೇರಿಯಲ್ಲಿ ಭಾನುವಾರ ೬೫ನೇ ವರ್ಷದ ಕನ್ನಡ ರಾಜ್ಯೋತ್ಸವ ಸರಳವಾಗಿ ಆಚರಿಸಲಾಯಿತು.
     ಧ್ವಜಾರೋಹಣದೊಂದಿಗೆ ತಾಯಿ ರಾಜರಾಜೇಶ್ವರಿ ಪೂಜೆ ಸಲ್ಲಿಸಲಾಯಿತು. ಪ್ರಸ್ತುತ ವಿಶ್ವದಾದ್ಯಂತ ವ್ಯಾಪಿಸಿರುವ ಕೋವಿಡ್-೧೯ ನಿಯಂತ್ರಿಸುವಲ್ಲಿ ಕೊರೋನಾ ವಾರಿಯರ್ಸ್‌ಗಳಾಗಿ ಪ್ರಮುಖ ಪಾತ್ರ ವಹಿಸುತ್ತಿರುವ ಆರೋಗ್ಯ ಇಲಾಖೆ ವೈದ್ಯರು ಮತ್ತು ಸಿಬ್ಬಂದಿಗಳನ್ನು ಗುರುತಿಸಿ ಗೌರವಿಸುವ ಕಾರ್ಯ ಎಲ್ಲೆಡೆ ನಡೆಯುತ್ತಿದ್ದು, ಈ ಬಾರಿ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ವೀಣಾರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು.
   ಪಕ್ಷದ ಪ್ರಮುಖರಾದ ಪರಮೇಶ್ವರಚಾರ್, ಇಬ್ರಾಹಿಂ ಖಾನ್, ಶೈಲಜಾ, ಪರಮೇಶ್ವರನಾಯ್ಕ್, ಪ್ರದೀಪ್, ಲೋಕೇಶ್, ಬಿ.ಕೆ ರಮೇಶ್, ರೇಷ್ಮ, ಎಚ್. ರವಿಕುಮಾರ್, ಜಾವೇದ್, ಮುಳ್ಕೆರೆಲೋಕೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.  ಇದೆ ಸಂದರ್ಭದಲ್ಲಿ ಸುಮಾರು ೧೫ಕ್ಕೂ ಹೆಚ್ಚು ಮಂದಿ ಯುವಕರು ಪಕ್ಷಕ್ಕೆ ಸೇರ್ಪಡೆಗೊಂಡರು.

ಕನ್ನಡ ನಾಡಿನ ಮೇಲಿನ ಅಭಿಮಾನ ಸಹಜವಾಗಿ ಬೆಳೆಸಿಕೊಳ್ಳಿ : ಬಿ.ಕೆ ಸಂಗಮೇಶ್ವರ್


ಭದ್ರಾವತಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಅಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೬೫ನೇ ಕನ್ನಡ ರಾಜ್ಯೋತ್ಸವದಲ್ಲಿ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಧ್ವಜಾರೋಹಣ ನೆರವೇರಿಸಿದರು.
ಭದ್ರಾವತಿ, ನ. ೧: ಕನ್ನಡ ರಾಜ್ಯೋತ್ಸವ ಒಂದು ದಿನಕ್ಕೆ ಸೀಮಿತವಲ್ಲ. ಇದು ನಿತ್ಯೋತ್ಸವ ಎಂಬುದನ್ನು ಎಲ್ಲರೂ ಅರಿತುಕೊಳ್ಳಬೇಕು. ಕನ್ನಡ ನಾಡಿನ ಮೇಲಿನ ಅಭಿಮಾನ ಸಹಜವಾಗಿ ಬೆಳೆಸಿಕೊಳ್ಳಬೇಕೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಕರೆ ನೀಡಿದರು.
     ಅವರು ಭಾನುವಾರ ಹಳೇನಗರದ ಕನಕಮಂಟಪ ಮೈದಾನದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಅಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೬೫ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
   ಪ್ರಸ್ತುತ ಕನ್ನಡ ನಾಡಿನಲ್ಲಿ ನೆಲ, ಜಲ ಮತ್ತು ಭಾಷೆ ಉಳಿವಿಗಾಗಿ ಹೋರಾಟಗಳು ನಿರಂತರವಾಗಿ ನಡೆಯುತ್ತಿದ್ದು, ನಾಡಿನಲ್ಲಿ ಹುಟ್ಟಿ ಬೆಳೆದಿರುವ ನಾವುಗಳು ನೆಲ, ಜಲ ಮತ್ತು ಭಾಷೆ ಮೇಲಿನ ಅಭಿಮಾನಿ ಹೆಚ್ಚಿಸಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ. ಕನ್ನಡ ನಾಡಿನಲ್ಲಿ ಹುಟ್ಟಿ, ಬೆಳೆದು, ಕನ್ನಡದಲ್ಲಿಯೇ ಓದಿ ನಾಡಿಗೆ, ದೇಶಕ್ಕೆ ತಮ್ಮದೇ ಆದ ಕೊಡುಗೆಯನ್ನು ನೀಡಿರುವ ಮಹಾನ್ ವ್ಯಕ್ತಿಗಳು ನಮ್ಮ ಮುಂದಿದ್ದು, ಅವರ ದಾರಿಯಲ್ಲಿ ನಾವುಗಳು ಸಾಗಬೇಕಾಗಿದೆ ಎಂದರು.


ಭದ್ರಾವತಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಅಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೬೫ನೇ ಕನ್ನಡ ರಾಜ್ಯೋತ್ಸವದಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಲಾಯಿತು.
   ಪ್ರಸ್ತುತ ಕೋವಿಡ್ ಹಿನ್ನಲೆಯಲ್ಲಿ ರಾಜ್ಯೋತ್ಸವ ಸಂಭ್ರಮ ಕ್ಷೀಣಿಸಿರುವುದು ವಿಷಾದನೀಯ ಸಂಗತಿಯಾಗಿದ್ದು, ಮಹಾಮಾರಿಯಿಂದ ತಾಯಿ ರಾಜರಾಜೇಶ್ವರಿ ಎಲ್ಲರನ್ನು ರಕ್ಷಿಸಿ ನಾಡಿನಲ್ಲಿ ಸಮೃದ್ಧಿ ನೆಲೆಸುವಂತೆ ಮಾಡಲಿ ಎಂದು ಪ್ರಾರ್ಥಿಸುತ್ತೇನೆ. ಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳು ನಡೆಯಲು ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.
   ನಾಡ ಧ್ವಜಾರೋಹಣ ನೆರವೇರಿಸಿದ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮಾತನಾಡಿ, ಕನ್ನಡ ಭಾಷೆ ಶ್ರೀಮಂತಿಕೆಯಿಂದ ಕೂಡಿದೆ. ತನ್ನದೇ ಆದ ಪರಂಪರೆಯನ್ನು ಹೊಂದಿರುವ ಪ್ರಪಂಚದಲ್ಲಿಯಲ್ಲಿಯೇ ವಿಶಿಷ್ಟತೆಯನ್ನು ಕಾಯ್ದುಕೊಂಡಿರುವ ನಾಡು ನಮ್ಮದಾಗಿದೆ. ಇಂತಹ ನಾಡಿನ ನೆಲ, ಜಲ, ಭಾಷೆ ಮೇಲಿನ ಅಭಿಮಾನ ಹೆಚ್ಚಿಸಿಕೊಳ್ಳುವ ಜೊತೆಗೆ ನಾಡಿನ ಸರ್ವತೋರ್ಮುಖ ಬೆಳವಣಿಗೆಗೆ ಪ್ರತಿಯೊಬ್ಬರು ಶ್ರಮಿಸಬೇಕೆಂದರು.
   ಸಶಸ್ತ್ರ ಮೀಸಲುಪಡೆ ಅಧಿಕಾರಿ ರಂಗಸ್ವಾಮಿ ಪ್ರತಿ ವರ್ಷದಂತೆ ಈ ಬಾರಿ ಸಹ ಪಥವಂದನೆ ಗೌರವ ಸ್ವೀಕರಿಸಿದರು. ಅತಿಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಲಾಯಿತು. ಕನ್ನಡದಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ತಾಲೂಕು ಪಂಚಾಯಿತಿ ಅಧ್ಯಕ್ಷ ಡಿ. ಲಕ್ಷ್ಮೀದೇವಿ, ನಗರಸಭೆ ಪೌರಾಯುಕ್ತ ಮನೋಹರ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಲವೇಶ್‌ಗೌಡ, ಪೊಲೀಸ್ ಉಪಾಧೀಕ್ಷಕ ಕೃಷ್ಣಮೂರ್ತಿ, ನಗರವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ, ಗ್ರಾಮಾಂತರ ವೃತ್ತ ನಿರೀಕ್ಷಕ ಇ.ಓ ಮಂಜುನಾಥ್, ತಾಲೂಕು ಪಂಚಾಯಿತಿ ಸದಸ್ಯ ಕೆ. ಮಂಜುನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
   ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ಸ್ವಾಗತಿಸಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಅಪೇಕ್ಷ ಮಂಜುನಾಥ್ ನಿರೂಪಿಸಿದರು.