Thursday, November 12, 2020

ಮಹಿಳಾ ಸಮಾಜದಿಂದ ಸಂಸದರಿಗೆ ಸನ್ಮಾನ, ಅಭಿನಂದನೆ

ಭದ್ರಾವತಿ ವಿಧಾನಸಭಾ ಕ್ಷೇತ್ರದಲ್ಲಿ ಸಂಸದರ ನಿಧಿಯಿಂದ ಹಲವಾರು ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಬಿಡುಗಡೆಗೊಳಿಸುವಲ್ಲಿ ಯಶಸ್ವಿಯಾಗಿರುವ ಲೋಕಸಭಾ ಸದಸ್ಯ ಬಿ.ವೈ ರಾಘವೇಂದ್ರರನ್ನು ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
ಭದ್ರಾವತಿ, ನ. ೧೨: ಕ್ಷೇತ್ರದಲ್ಲಿ ಸಂಸದರ ನಿಧಿಯಿಂದ ಹಲವಾರು ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಬಿಡುಗಡೆಗೊಳಿಸುವಲ್ಲಿ ಯಶಸ್ವಿಯಾಗಿರುವ ಲೋಕಸಭಾ ಸದಸ್ಯ ಬಿ.ವೈ ರಾಘವೇಂದ್ರರನ್ನು ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
      ಹಳೇನಗರದ ಬಸವೇಶ್ವರ ವೃತ್ತದಲ್ಲಿರುವ ಸಮಾಜದ ಕಟ್ಟಡದ ಮೊದಲ ಹಂತದ ಕಾಮಗಾರಿ ಮುಕ್ತಾಯಗೊಂಡು ಉದ್ಘಾಟನೆಗೆ ಸಿದ್ದಗೊಂಡಿದೆ. ಎರಡನೇ ಹಂತದ ಕಾಮಗಾರಿಗೆ ಸಂಸದರ ನಿಧಿಯಿಂದ ರು.೨೦ ಲಕ್ಷ ಬಿಡುಗಡೆಯಾಗಿದ್ದು, ಈ ಹಿನ್ನಲೆಯಲ್ಲಿ ಸಂಸದರಿಗೆ ಸಮಾಜದ ಪದಾಧಿಕಾರಿಗಳು ಕೃತಜ್ಞತೆ ಸಲ್ಲಿಸಿದರು.
    ಸಮಾಜದ ಅಧ್ಯಕ್ಷೆ ಹೇಮಾವತಿ ವಿಶ್ವನಾಥ್, ಪದಾಧಿಕಾರಿಗಳಾದ ಶೋಭಾ ಗಂಗಾರಾಜ್, ಜಯಂತಿ ನಾಗರಾಜ್, ಕಮಲಕುಮಾರಿ, ಶಕುಂತಲಾ, ಕಮಲರಾಯ್ಕರ್, ಸೂಡ ಅಧ್ಯಕ್ಷ ಎಸ್ ಎಸ್ ಜ್ಯೋತಿ ಪ್ರಕಾಶ್, ಬಿಜೆಪಿ ಅಧ್ಯಕ್ಷ ಎಂ. ಪ್ರಭಾಕರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಅಂಬೇಡ್ಕರ್ ಸಮುದಾಯ ಭವನ ದುರ್ಬಳಕೆ : ಸೂಕ್ತ ಕ್ರಮಕ್ಕೆ ಆಗ್ರಹ

ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮದಲ್ಲಿ ಅಂಬೇಡ್ಕರ್ ಸಮುದಾಯ ಭವನವನ್ನು ಪರಿಶಿಷ್ಟರು, ಆರ್ಥಿಕವಾಗಿ ಹಿಂದುಳಿದವರು, ಶೋಷತರಿಗೆ ಬಿಟ್ಟುಕೊಡದೆ ಅಡಕೆ ಚೀಲಗಳನ್ನು ಸಂಗ್ರಹಿಸಲು, ಅಡಕೆ ಒಣಗಿಸಲು ಹಾಗು ಇನ್ನಿತರೆ ಕಾರ್ಯಗಳಿಗೆ ಬಳಸಿಕೊಳ್ಳಲಾಗುತ್ತಿದೆ.
ಭದ್ರಾವತಿ, ನ. ೧೨: ಪರಿಶಿಷ್ಟರು, ಆರ್ಥಿಕವಾಗಿ ಹಿಂದುಳಿದವರು, ಶೋಷಿತರಿಗೆ  ಸಹಕಾರಿಯಾಗುವ ಉದ್ದೇಶದಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಂಬೇಡ್ಕರ್ ಸಮುದಾಯ ಭವನಗಳನ್ನು ನಿರ್ಮಿಸಲಾಗಿದೆ. ಆದರೆ ಸಮುದಾಯ ಭವನಗಳು ಸದ್ಬಳಕೆಯಾಗುವ ಬದಲು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ.
    ತಾಲೂಕಿನ ಕೂಡ್ಲಿಗೆರೆ ಗ್ರಾಮದಲ್ಲಿ ಅಂಬೇಡ್ಕರ್ ಸಮುದಾಯ ಭವನವನ್ನು ಪರಿಶಿಷ್ಟರು, ಆರ್ಥಿಕವಾಗಿ ಹಿಂದುಳಿದವರು, ಶೋಷತರಿಗೆ ಸಮುದಾಯದ ಕುಂದು-ಕೊರತೆ ಚರ್ಚಿಸಲು, ಸಭೆ-ಸಮಾರಂಭಗಳನ್ನು ನಡೆಸಲು, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಬಿಟ್ಟುಕೊಡದೆ ಅಡಕೆ ಚೀಲಗಳನ್ನು ಸಂಗ್ರಹಿಸಲು, ಅಡಕೆ ಒಣಗಿಸಲು ಹಾಗು ಇನ್ನಿತರೆ ಕಾರ್ಯಗಳಿಗೆ ಬಳಸಿಕೊಳ್ಳಲಾಗುತ್ತಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಬೇಕೆಂದು ಪರಿಶಿಷ್ಟ ಸಮುದಾಯದ ಮುಖಂಡರು ಆಗ್ರಹಿಸಿದ್ದಾರೆ.

ಒಕ್ಕಲಿಗ ಸಮಾಜದ ಕೊಡುಗೆ ಅನನ್ಯ : ಬಿ.ವೈ ರಾಘವೇಂದ್ರ

ಭದ್ರಾವತಿ ನ್ಯೂಟೌನ್ ಬಂಟರ ಭವನದಲ್ಲಿ ಬುಧವಾರ ಸಂಜೆ ಶ್ರೀ ಕಾಲಭೈರವೇಶ್ವರ ಚಾರಿಟಬಲ್ ಟ್ರಸ್ಟ್, ಶ್ರೀ ಕಾಲಭೈರವೇಶ್ವರ ದೇವಸ್ಥಾನ ಟ್ರಸ್ಟ್ ಮತ್ತು ಶ್ರೀ ಕಾಲಭೈರವೇಶ್ವರ ಮಹಿಳಾ ಘಟಕ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಗಣ್ಯರಿಗೆ ಅಭಿನಂದನೆ, ಸನ್ಮಾನ ಹಾಗು ಪ್ರತಿಭಾವಂತ ವಿದ್ಯಾಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಸಂಸದ ಬಿ.ವೈ ರಾಘವೇಂದ್ರ ಉದ್ಘಾಟಿಸಿದರು.
ಭದ್ರಾವತಿ, ನ. ೧೧: ದೇಶದಲ್ಲಿ ಕೃಷಿಯನ್ನು ನಂಬಿ ಬದುಕುತ್ತಿರುವ ಒಕ್ಕಲಿಗ ಸಮಾಜದ ಕೊಡುಗೆ ಅನನ್ಯವಾಗಿದ್ದು, ಇಂತಹ ಸಮುದಾಯ ಮತ್ತಷ್ಟು ಕ್ರಿಯಾಶೀಲವಾಗಿ ಬೆಳೆಯುವ ಮೂಲಕ ಜನರು ಹಸಿವು ಮುಕ್ತರಾಗಿ ಬದುಕುವಂತಾಗಬೇಕೆಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.
    ಅವರು ಬುಧವಾರ ಸಂಜೆ ನ್ಯೂಟೌನ್ ಬಂಟರ ಭವನದಲ್ಲಿ ಶ್ರೀ ಕಾಲಭೈರವೇಶ್ವರ ಚಾರಿಟಬಲ್ ಟ್ರಸ್ಟ್, ಶ್ರೀ ಕಾಲಭೈರವೇಶ್ವರ ದೇವಸ್ಥಾನ ಟ್ರಸ್ಟ್ ಮತ್ತು ಶ್ರೀ ಕಾಲಭೈರವೇಶ್ವರ ಮಹಿಳಾ ಘಟಕ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಗಣ್ಯರಿಗೆ ಅಭಿನಂದನೆ, ಸನ್ಮಾನ ಹಾಗು ಪ್ರತಿಭಾವಂತ ವಿದ್ಯಾಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
    ಸಮಾಜದ ಎಲ್ಲಾ ಸಮುದಾಯಗಳೊಂದಿಗೆ ಒಕ್ಕಲಿಗ ಸಮುದಾಯ ಗುರುತಿಸಿಕೊಂಡು ಮುಂಚೂಣಿಯಲ್ಲಿದ್ದು, ಶ್ರಮದ ಕೃಷಿ ಬದುಕನ್ನು ರೂಢಿಸಿಕೊಂಡಿರುವ ಈ ಸಮುದಾಯದ ಜನರು ಪ್ರಸ್ತುತ ಹೆಚ್ಚಿನ ರೀತಿಯಲ್ಲಿ ಸಂಘಟಿತರಾಗುವ ಮೂಲಕ ನಗರದಲ್ಲಿ ಸುಮಾರು ೧ ಕೋ. ರು. ವೆಚ್ಚದಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಮುಂದಾಗಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದರು.
    ಕೇಂದ್ರ ಸರ್ಕಾರ ಮಕ್ಕಳ ಶಿಕ್ಷಣಕ್ಕೆ ೨೫೦ ಕೋ. ರು. ಬಿಡುಗಡೆಗೊಳಿಸಿದೆ. ಜಿಲ್ಲೆಯಲ್ಲಿರುವ ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯ ನೆರವನ್ನು ನೀಡಲಾಗುವುದು. ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳು ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದರು.
    ಶ್ರೀ ಕಾಲಭೈರವೇಶ್ವರ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಲಕ್ಷ್ಮಣಗೌಡ ಅಧ್ಯಕ್ಷತೆ ವಹಿಸಿದ್ದರು. ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷೆ ಪವಿತ್ರ ರಾಮಯ್ಯ, ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಸ್ ಜ್ಯೋತಿ ಪ್ರಕಾಶ್, ಆರ್ಯವೈಶ್ಯ ಮಂಡಳಿ ಅಧ್ಯಕ್ಷ ಡಿ.ಎಸ್ ಅರುಣ್, ಜಲಮಂಡಳಿ ನಿರ್ದೇಶಕ ಮಂಗೋಟೆ ರುದ್ರೇಶ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಜಿ. ಧರ್ಮಪ್ರಸಾದ್, ತಾಲೂಕು ಅಧ್ಯಕ್ಷ ಎಂ. ಪ್ರಭಾಕರ್, ಶ್ರೀ ರಾಮೇಶ್ವರ ಯುವಕರ ಸಂಘದ ಅಧ್ಯಕ್ಷ ಬಿ.ಎಸ್. ಶಶಿಕಾಂತ, ಮಹಿಳಾ ಟ್ರಸ್ಟ್ ಅಧ್ಯಕ್ಷೆ ಶಿವಮ್ಮ ಶ್ರೀನಿವಾಸ್ ಸೇರಿದಂತೆ ಪದಾಧಿಕಾರಿಗಳು, ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  ಜಗದೀಶ್ ಸ್ವಾಗತಿಸಿದರು. ರಮಾ ವೆಂಕಟೇಶ್ ವಂದಿಸಿದರು.