Monday, November 30, 2020

ತಂಬಾಕು ಕುರಿತು ಜಾಗೃತಿಗಾಗಿ ‘ಗುಲಾಬಿ ಅಂದೋಲನ’

ಭದ್ರಾವತಿಯಲ್ಲಿ ಸೋಮವಾರ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ವ್ಯಾಪಾರಸ್ಥರಿಗೆ ಹಾಗು ಉತ್ಪನ್ನಗಳನ್ನು ಖರೀದಿಸುವ ಗ್ರಾಹಕರಿಗೆ ಗುಲಾಬಿ ನೀಡುವ ಮೂಲಕ ಆರೋಗ್ಯ ಅರಿವು ಮೂಡಿಸುವ ಗುಲಾಬಿ ಅಂದೋಲನ ನಡೆಯಿತು.
ಭದ್ರಾವತಿ, ನ. ೩೦: ದೇಶದಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡ ಸಂದರ್ಭದಲ್ಲಿ ಸಾರ್ವಜನಿಕರ ಆರೋಗ್ಯ ಜಾಗೃತಿಗಾಗಿ ನಡೆಸಿದ ಹಲವು ವಿಭಿನ್ನ ಬಗೆಯ ಕಾರ್ಯಕ್ರಮಗಳು ಇಂದಿಗೂ ನೆನಪಿನಲ್ಲಿ ಉಳಿದುಕೊಂಡಿವೆ. ಸಂಚಾರಿ ಪೊಲೀಸರು ಅನಗತ್ಯವಾಗಿ ಮನೆಯಿಂದ ಹೊರಬರುವ ಹಾಗು ಸರ್ಕಾರಿ ನಿಯಮಗಳನ್ನು ಉಲ್ಲಂಘಿಸುವವರಿಗೆ ಗುಲಾಬಿ ನೀಡುವುದು, ಸಿಹಿ ಹಂಚುವುದು ಇತ್ಯಾದಿ ವಿಶಿಷ್ಟ ರೀತಿಯ ಕಾರ್ಯಕ್ರಮಗಳನ್ನು ನಡೆಸಿ ಗಮನ ಸೆಳೆದಿತ್ತು. ಇದೀಗ ಇದೆ ಮಾದರಿ ಕಾರ್ಯಕ್ರಮವನ್ನು ಆರೋಗ್ಯ ಇಲಾಖೆ ಕೈಗೊಂಡಿದೆ.
   ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ವ್ಯಾಪಾರಸ್ಥರಿಗೆ ಹಾಗು ಉತ್ಪನ್ನಗಳನ್ನು ಖರೀದಿಸುವ ಗ್ರಾಹಕರಿಗೆ ಗುಲಾಬಿ ನೀಡುವ ಮೂಲಕ ಆರೋಗ್ಯ ಅರಿವು ಮೂಡಿಸುವ ಗುಲಾಬಿ ಅಂದೋಲನಕ್ಕೆ ಸೋಮವಾರ ಹಳೇನಗರದ ಬಸವೇಶ್ವರ ವೃತ್ತದಲ್ಲಿ ಚಾಲನೆ ನೀಡಲಾಯಿತು.
    ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್, ನಗರಸಭೆ ಪೌರಾಯುಕ್ತ ಮನೋಹರ್, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ, ಹಳೇಪೊಲೀಸ್ ಠಾಣಾಧಿಕಾರಿ ಶ್ರೀನಿವಾಸ್, ಹಿರಿಯ ಆರೋಗ್ಯ ಸಹಾಯಕ ನಿಲೇಶ್‌ರಾಜ್ ಹಾಗು ತಂಬಾಕು ನಿಯಂತ್ರಣಾಧಿಕಾರಿಗಳು, ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.


ಒಕ್ಕಲಿಗ ಸಮುದಾಯದ ಅಭಿವೃದ್ಧಿಗೆ ನಿಗಮ ಮಂಡಳಿ ಸ್ಥಾಪಿಸಿ : ಶಶಿಕುಮಾರ್ ಎಸ್. ಗೌಡ

ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಮನವಿ

ಒಕ್ಕಲಿಗ ಅಭಿವೃದ್ಧಿ ನಿಗಮ ಹಾಗು ರಾಜ್ಯದಲ್ಲಿರುವ ೧೫೦ಕ್ಕೂ ಹೆಚ್ಚು ಸಣ್ಣಪುಟ್ಟ ಸಮುದಾಯಗಳಿಗೂ ನಿಗಮ, ಮಂಡಳಿ ಸ್ಥಾಪಿಸಬೇಕೆಂದು ಒತ್ತಾಯಿಸಿ ಭದ್ರಾವತಿಯಲ್ಲಿ ಸೋಮವಾರ ಸಂಯುಕ್ತ ಜನಾತದಳವತಿಯಿಂದ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ನ. ೩೦: ಪ್ರಸ್ತುತ ರಾಜ್ಯದಲ್ಲಿ ಒಕ್ಕಲಿಗ ಸಮುದಾಯ ಸಾಮಾಜಿಕ, ಶೈಕ್ಷಣಿಕ ಹಾಗು ಆರ್ಥಿಕವಾಗಿ ಹಿಂದುಳಿದಿದ್ದು, ಈ ಸಮುದಾಯದ ಏಳಿಗೆಗೆ ಮುಖ್ಯಮಂತ್ರಿಗಳು ಒಕ್ಕಲಿಗ ಅಭಿವೃದ್ಧಿ ನಿಗಮ ಹಾಗು ರಾಜ್ಯದಲ್ಲಿರುವ ೧೫೦ಕ್ಕೂ ಹೆಚ್ಚು ಸಣ್ಣಪುಟ್ಟ ಸಮುದಾಯಗಳಿಗೂ ನಿಗಮ, ಮಂಡಳಿ ಸ್ಥಾಪಿಸಬೇಕೆಂದು ಸಂಯುಕ್ತ ಜನಾತದಳ ಒತ್ತಾಯಿಸುತ್ತದೆ ಎಂದು ಪಕ್ಷದ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್. ಗೌಡ ತಿಳಿಸಿದರು.
   ಸೋಮವಾರ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿ ಮಾತನಾಡಿದರು. ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡ, ಮೈಸೂರು ಸಂಸ್ಥಾನದ ಪಿಟೀಲ್ ವಾದಕ ಚೌಡಯ್ಯ, ರಾಜ್ಯದ ಮೊದಲ ಮುಖ್ಯಮಂತ್ರಿ ಕೆ.ಸಿ ರೆಡ್ಡಿ, ವಿಧಾನಸೌಧ ನಿರ್ಮಾತೃ ಕೆಂಗಲ್ ಹನುಮಂತಯ್ಯ, ಕಡಿದಾಳ್ ಮಂಜಪ್ಪ, ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ, ರಾಷ್ಟ್ರಕವಿ ಕುವೆಂಪು, ಚಲನಚಿತ್ರ ನಟ ಅಂಬರೀಷ್, ಹೃದಯ ತಜ್ಞ ಡಾ. ಮಂಜುನಾಥ್ ಸೇರಿದಂತೆ ಒಕ್ಕಲಿಗ ಸಮುದಾಯದ ಅನೇಕ ಮಹಾನ್ ವ್ಯಕ್ತಿಗಳು ನಾಡಿನಲ್ಲಿ ಜಾತಿ, ಧರ್ಮ ಮೀರಿದ ಸೇವೆಯನ್ನು ಸಲ್ಲಿಸಿರುತ್ತಾರೆ. ಕೃಷಿ, ಆರೋಗ್ಯ, ಧಾರ್ಮಿಕ, ಸಾಂಸ್ಕೃತಿಕ, ಶೈಕ್ಷಣಿಕ, ರಾಜಕೀಯ, ರಂಗಭೂಮಿ, ಸಿನಿಮಾ, ಕೈಗಾರಿಕೆ ಹೀಗೆ ಎಲ್ಲಾ ಕ್ಷೇತ್ರಗಳಲ್ಲೂ ತಮ್ಮದೇ ಆದ ಕೊಡುಗೆಗಳನ್ನು ನೀಡಿದ್ದಾರೆ.
    ರಾಜ್ಯದಲ್ಲಿ ಮೂರನೇ ಒಂದು ಭಾಗದಷ್ಟು ಜನಸಂಖ್ಯೆ ಹೊಂದಿರುವ ಒಕ್ಕಲಿಗ ಸಮಾಜ ಪ್ರಸ್ತುತ ಸಂಕಷ್ಟಕ್ಕೆ ಒಳಗಾಗಿದೆ. ನಾಡಿಗೆ ಅನ್ನಕೊಟ್ಟ ಒಕ್ಕಲಿಗ ರೈತಾಪಿ ವರ್ಗ ಅತಿವೃಷ್ಠಿ, ಅನಾವೃಷ್ಠಿ ಹಾಗು ಕೊರೋನಾದಿಂದಾಗಿ ಮತ್ತಷ್ಟು ಸಂಕಷ್ಟಕ್ಕೆ ಒಳಗಾಗಿದೆ. ಅಲ್ಲದೆ ಈ ಸಮಾಜ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿದೆ. ಈ ಹಿನ್ನಲೆಯಲ್ಲಿ ಅಭಿವೃದ್ಧಿ ನಿಗಮ ಸ್ಥಾಪಿಸುವುದು ಅನಿವಾರ್ಯವಾಗಿದೆ ಎಂದರು.
    ಇದೆ ರೀತಿ ರಾಜ್ಯದಲ್ಲಿರುವ ಸುಮಾರು ೧೫೦ಕ್ಕೂ ಹೆಚ್ಚು ಸಣ್ಣಪುಟ್ಟ ಸಮುದಾಯಗಳಿಗೂ ನಿಗಮ ಮಂಡಳಿ ಸ್ಥಾಪಿಸುವ ಮೂಲಕ ಎಲ್ಲಾ ಸಮುದಾಯಗಳು ಹಂತ ಹಂತವಾಗಿ ಅಭಿವೃದ್ದಿ ಹೊಂದಲು ಸಹಕರಿಸಬೇಕೆಂದು ಮನವಿ ಮಾಡಿದರು.
     ಪಕ್ಷ ರಾಜ್ಯ ಸಂಘಟನಾ ಕಾರ್ಯದರ್ಶಿ ಬಾಬು ದೀಪಕ್ ಕುಮಾರ್, ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಬಿ.ವಿ ಗಿರೀಶ್, ಬಂಜಾರ ಯುವ ಘಟಕದ ಅಧ್ಯಕ್ಷ ಕೃಷ್ಣನಾಯ್ಕ್, ಮುಖಂಡರಾದ ವೆಂಕಟೇಶ್, ಪ್ರಶಾಂತ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ತಾಲೂಕು ಆಡಳಿತ, ನಗರಸಭೆಯಿಂದ ಹಳೇಸೀಗೇಬಾಗಿ ಸರ್ಕಾರಿ ಕೆರೆ ಅಳತೆ, ಬೌಂಡರಿ ನಿಗದಿ

ತಹಸೀಲ್ದಾರ್‌ರವರ ಆದೇಶದ ಮೇರೆಗೆ ಭೂದಾಖಲೆಗಳ ಸಹಾಯಕ ನಿರ್ದೇಶಕರ ತಂಡ ಹಾಗು ನಗರಸಭೆ ಪೌರಾಯುಕ್ತ ಮನೋಹರ್ ನೇತೃತ್ವದ ತಂಡ ಮೊದಲ ಹಂತವಾಗಿ ಸೋಮವಾರ ಭದ್ರಾವತಿ ಹಳೇಸೀಗೇಬಾಗಿ ಸರ್ವೆ ನಂ.೩೩ರ ಸುಮಾರು ೧೮ ಎಕರೆ ೧೯ ಗುಂಟೆ ವಿಸ್ತೀರ್ಣವುಳ್ಳ ಸರ್ಕಾರಿ ಕೆರೆ ಅಳತೆ ಕಾರ್ಯ ಕೈಗೊಂಡು ಬೌಂಡರಿ ನಿಗದಿಪಡಿಸಿದವು.
ಭದ್ರಾವತಿ, ನ. ೩೦: ನಗರಸಭೆ ವ್ಯಾಪ್ತಿಯಲ್ಲಿರುವ ಕೆರೆಗಳ ಅಳತೆ ಕಾರ್ಯ ಕೈಗೊಂಡು ಬೌಂಡರಿ ನಿಗದಿಪಡಿಸುವ ಮೂಲಕ ಅಭಿವೃದ್ಧಿಪಡಿಸಿ ಬೇಸಿಗೆಯಲ್ಲಿ ರೈತರಿಗೆ, ಜಾನುವಾರುಗಳಿಗೆ ಅನುಕೂಲ ಕಲ್ಪಿಸಿಕೊಡಬೇಕು. ಅಲ್ಲದೆ ಕೆಲವು ಕೆರೆಗಳನ್ನು ಪ್ರವಾಸಿ ತಾಣಗಳಾಗಿ ಪರಿವರ್ತಿಸುವಂತೆ ಆಗ್ರಹಿಸಿ ಕಳೆದ ಸುಮಾರು ೧ ವರ್ಷದಿಂದ ನಗರದ ಜನ್ನಾಪುರದ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್ ನಡೆಸುತ್ತಿದ್ದ ಹೋರಾಟಕ್ಕೆ ತಾಲೂಕು ಆಡಳಿತ ಮತ್ತು ನಗರಸಭೆ ಆಡಳಿತ ಪೂರಕವಾಗಿ ಸ್ಪಂದಿಸಿವೆ.
   ತಹಸೀಲ್ದಾರ್‌ರವರ ಆದೇಶದ ಮೇರೆಗೆ ಭೂದಾಖಲೆಗಳ ಸಹಾಯಕ ನಿರ್ದೇಶಕರ ತಂಡ ಹಾಗು ನಗರಸಭೆ ಪೌರಾಯುಕ್ತ ಮನೋಹರ್ ನೇತೃತ್ವದ ತಂಡ ಮೊದಲ ಹಂತವಾಗಿ ಸೋಮವಾರ ಹಳೇಸೀಗೇಬಾಗಿ ಸರ್ವೆ ನಂ.೩೩ರ ಸುಮಾರು ೧೮ ಎಕರೆ ೧೯ ಗುಂಟೆ ವಿಸ್ತೀರ್ಣವುಳ್ಳ ಸರ್ಕಾರಿ ಕೆರೆ ಅಳತೆ ಕಾರ್ಯ ಕೈಗೊಂಡು ಬೌಂಡರಿ ನಿಗದಿಪಡಿಸಿದವು.
     ಕೆರೆ ವಿಶಾಲವಾಗಿದ್ದು, ಕೆರೆಯಲ್ಲಿ ಆಳೆತ್ತರ ಹೂಳು ತುಂಬಿಕೊಂಡು ಗಿಡಗಂಟಿಗಳು ಬೆಳೆದು ನಿಂತಿವೆ. ಕೆರೆಯ ಸುತ್ತಲು ತೆಂಗು ಹಾಗು ಅಡಕೆ ತೋಟಗಳಿದ್ದು, ಕೆರೆಯನ್ನು ಅಭಿವೃದ್ಧಿಪಡಿಸಿದ್ದಲ್ಲಿ ರೈತರಿಗೆ ಹಾಗು ಜಾನುವಾರುಗಳಿಗೆ ಇನ್ನೂ ಹೆಚ್ಚಿನ ಅನುಕೂಲವಾಗಲಿದೆ ಎಂದು ಸ್ಥಳೀಯ ರೈತರು ಹಾಗು ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್ ಪದಾಧಿಕಾರಿಗಳು ಪೌರಾಯುಕ್ತ ಮನೋಹರ್‌ಗೆ ಮನವರಿಕೆ ಮಾಡಿಕೊಟ್ಟರು. ಅಳತೆ ಹಾಗು ಬೌಂಡರಿ ನಿಗದಿ ಕಾರ್ಯಕ್ಕೆ ಯಾವುದೇ ರೀತಿ ಅಡಚಣೆಯಾಗದಂತೆ ಬಿಗಿಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.
    ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್ ಛೇರ‍್ಮನ್ ಆರ್. ವೇಣುಗೋಪಾಲ್, ಪದಾಧಿಕಾರಿಗಳಾದ ರಮಾ ವೆಂಕಟೇಶ್, ಶೈಲಜಾ ರಾಮಕೃಷ್ಣ, ಭವಾನಿ ಶಂಕರ್, ಗ್ಸೇವಿಯರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸ್ನೇಹ ಯುವಕರ ಸಂಘದಿಂದ ಕನ್ನಡ ರಾಜ್ಯೋತ್ಸವ

ಭದ್ರಾವತಿ ತಾಲೂಕಿನ ಗುಡ್ಡದ ನೇರಲೆಕೆರೆ ಸ್ನೇಹ ಯುವಕರ ಸಂಘದ ವತಿಯಿಂದ ಸೋಮವಾರ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ಭದ್ರಾವತಿ, ನ. ೩೦: ತಾಲ್ಲೂಕಿನ ಗುಡ್ಡದ ನೇರಲೆಕೆರೆ ಸ್ನೇಹ ಯುವಕರ ಸಂಘದ ವತಿಯಿಂದ ಸೋಮವಾರ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ಜಿಲ್ಲಾ ಪಂಚಾಯಿತಿ ಸದಸ್ಯ ಎಸ್ ಮಣಿಶೇಖರ್ ಸಸಿ ನೆಡುವ ಮೂಲಕ ಉದ್ಘಾಟಿಸಿದರು. ಕೊಮಾರನಹಳ್ಳಿ ಪಂಚಾಯ್ತಿ ಸದಸ್ಯೆ ಸರಸ್ವತಿ, ಮುಖಂಡರಾದ ಕೃಷ್ಣಪ್ಪ, ರವಿಕುಮಾರ್ , ಗಂಗಾಧರಯ್ಯ, ರಾಮೇಗೌಡ್ರು, ಗೋವಿಂದರಾಜ್, ಸಂಘದ ಸದಸ್ಯರಾದ ಸಂಪತ್ ಕುಮಾರ್, ಗಣೇಶ್,ಗಿರೀಶ್, ಅವಿನಾಶ್,ರವಿ ಆರ್ ಪವನ್,   ತಿಮ್ಮೇಗೌಡ, ದೇವಿಂದ್ರಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.