ಸಿಂಗಮನೆ ಗ್ರಾಮ ಪಂಚಾಯಿತಿಯಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಜಿ.ಪಂ. ಸಿಇಓ ಡಾ. ಎಂ.ಎಲ್ ವೈಶಾಲಿ
ಭದ್ರಾವತಿ ತಾಲೂಕಿನ ಸಿಂಗನಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಎಂ.ಎಲ್ ವೈಶಾಲಿ ಪಾಲ್ಗೊಂಡು ಮಾತನಾಡಿದರು.
ಭದ್ರಾವತಿ, ಡಿ. ೯: ಗ್ರಾಮ ಪಂಚಾಯಿತಿ ಚುನಾವಣೆಯನ್ನು ಮತದಾರರು ಗಂಭೀರವಾಗಿ ಪರಿಗಣಿಸಿ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಗಮನ ಹರಿಸಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಂ.ಎಲ್ ವೈಶಾಲಿ ಮನವಿ ಮಾಡಿದರು.
ಅವರು ಬುಧವಾರ ತಾಲೂಕಿನ ಸಿಂಗನಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಮತದಾನದ ಹಕ್ಕು ಹೊಂದಿರುವ ಪ್ರತಿಯೊಬ್ಬರು ಕಡ್ಡಾಯವಾಗಿ ಚುನಾವಣೆಯಲ್ಲಿ ಪಾಲ್ಗೊಳ್ಳಬೇಕು. ೧೮ ವರ್ಷ ತುಂಬಿದ ಪ್ರತಿಯೊಬ್ಬರು ತಮ್ಮ ಮತದಾನ ಹಕ್ಕನ್ನು ಪಡೆದುಕೊಳ್ಳಬೇಕು. ಮತದಾನದಲ್ಲಿ ಯುವ ಸಮುದಾಯ ಹೆಚ್ಚಾಗಿ ಪಾಲ್ಗೊಳ್ಳಬೇಕು. ಚುನಾವಣೆಗೆ ಸಂಬಂಧಿಸಿದ ಎಲ್ಲಾ ರೀತಿಯ ಸಮಸ್ಯೆಗಳಿಗೆ ಚುನಾವಣಾ ಅಧಿಕಾರಿಗಳು ಪೂರಕವಾಗಿ ಸ್ಪಂದಿಸಲಿದ್ದಾರೆಂದು ಭರವಸೆ ನೀಡಿದರು.
ಕುವೆಂಪು ವಿಶ್ವವಿದ್ಯಾನಿಲಯದ ಉಪ ಕುಲಪತಿ ವೀರಭದ್ರಪ್ಪ, ರಿಜಿಸ್ಟ್ರಾರ್ ಎಸ್.ಎಸ್ ಪಾಟೀಲ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ. ಜಿ. ಮಂಜುನಾಥ್, ನೋಡಲ್ ಅಧಿಕಾರಿ ನವೀದ್ ಪರ್ವೀಜ್ ಅಹಮದ್, ಸಿಂಗನಮನೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೋಮಶೇಖರಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.