Wednesday, January 20, 2021

ಎಬಿವಿಪಿ ನೇತೃತ್ವದಲ್ಲಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಬುಧವಾರ ನಗರದ ಬೊಮ್ಮನಕಟ್ಟೆ ಸರ್.ಎಂ.ವಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗಳಿಗೆ ಆಗ್ರಹಿಸಿದರು.
ಭದ್ರಾವತಿ, ಜ. ೨೦: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಬುಧವಾರ ನಗರದ ಬೊಮ್ಮನಕಟ್ಟೆ ಸರ್.ಎಂ.ವಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗಳಿಗೆ ಆಗ್ರಹಿಸಿದರು.
    ಕೊರೋನಾ ಮಹಾಮಾರಿಯಿಂದಾಗಿ ಶೈಕ್ಷಣಿಕ ಚಟುವಟಿಕೆಗಳು ಕಳೆದ ಸುಮಾರು ೮-೯ ತಿಂಗಳು ಸ್ಥಗಿತಗೊಂಡು ಇದೀಗ ಆರಂಭಗೊಂಡಿವೆ.  ಈ ನಡುವೆ ವಿದ್ಯಾರ್ಥಿಗಳು ಹಲವು ಸಮಸ್ಯೆಗಳು ಎದುರಿಸುವಂತಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಸರ್ಕಾರ ನೀಡುತ್ತಿದ್ದ ಕೆಲವು ವಿದ್ಯಾರ್ಥಿ ವೇತನಗಳು ಕೊರೋನಾ ಸಂದರ್ಭದಲ್ಲಿ ಸರಿಯಾಗಿ ಬಿಡುಗಡೆಯಾಗಿರುವುದಿಲ್ಲ. ಈ ಹಿನ್ನೆಲೆಯಲ್ಲಿ ತಕ್ಷಣ ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸಬೇಕು.
     ಪ್ರಸ್ತುತ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಹಾಸ್ಟೆಲ್‌ಗಳನ್ನು ತೆರೆಯಲಾಗಿದ್ದು, ಉಳಿದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯವಿಲ್ಲದೆ ಪರದಾಡುವಂತಾಗಿದೆ. ತಕ್ಷಣ ಎಲ್ಲಾ ವಿದ್ಯಾರ್ಥಿಗಳಿಗೂ ಹಾಸ್ಟೆಲ್‌ಗಳನ್ನು ತೆರೆಯುವುದು.
       ಅನೇಕ ಕಾಲೇಜುಗಳಲ್ಲಿ ಕೆಲವು ವಿಷಯಗಳಿಗೆ ಕಾಯಂ ಉಪನ್ಯಾಸಕರು ಇರುವುದಿಲ್ಲ ಪ್ರಸ್ತುತ ಕಾಲೇಜುಗಳು ಪ್ರಾರಂಭವಾಗಿ  ವಿದ್ಯಾರ್ಥಿಗಳು ತರಗತಿಗಳಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಂಡು ತರಗತಿಗಳನ್ನು ನಡೆಸಬೇಕು.
       ಪ್ರಸ್ತುತ ಎಲ್ಲಾ ಕಾಲೇಜುಗಳಿಗೆ ಮತ್ತು ಹಾಸ್ಟೆಲ್‌ಗಳಿಗೆ ಸಮರ್ಪಕವಾಗಿ ಬಸ್ ಸೌಲಭ್ಯಗಳು ಇರುವುದಿಲ್ಲ. ಕೊರೋನಾ ಸಂದರ್ಭದಲ್ಲಿ ಸ್ಥಗಿತಗೊಂಡಿದ್ದ ಬಸ್‌ಗಳ ಸಂಚಾರ ಇನ್ನೂ ಸರಿಯಾಗಿ ಆರಂಭಗೊಂಡಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ತಕ್ಷಣ ಬಸ್ ವ್ಯವಸ್ಥೆ ಕಲ್ಪಿಸುವ ಜೊತೆಗೆ ಇನ್ನಿತರೆ ಬೇಡಿಕೆಗಳನ್ನು ಈಡೇರಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದರು.
    ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಿಜಯ ಗೌಡರ್ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಜಿಲ್ಲಾ ಸಹ ಸಂಚಾಲಕ ಕುಮಾರಸ್ವಾಮಿ, ಎಸ್.ಎಫ್.ಡಿ ಪ್ರಮುಖ ಹಾಲಸ್ವಾಮಿ, ಮಂಚ್ ಪ್ರಮುಖ ಕಲ್ಪನಾ, ನಿರಂಜನ್, ಆಕಾಶ್, ಅಭಿ, ಮುರುಗೇಶ್, ಹಿಮಾ ಮತ್ತು ಯಶಸ್ವಿನಿ  ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು  ಪಾಲ್ಗೊಂಡಿದ್ದರು.                      

No comments:

Post a Comment