Wednesday, January 27, 2021

ಆಂಗ್ಲ ಭಾಷೆ ಕೇವಲ ವ್ಯವಹಾರಿಕ ಭಾಷೆಯಾಗಲಿ, ಕನ್ನಡ ಬದುಕಿನ ಭಾಷೆಯಾಗಲಿ

ತಾಲೂಕು ೮ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಿ. ಮೇಘ ಉದ್ಘಾಟನಾ ನುಡಿ

ಭದ್ರಾವತಿ ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಘಟಕದ ವತಿಯಿಂದ ಬುಧವಾರ ಹಮ್ಮಿಕೊಳ್ಳಲಾಗಿದ್ದ ತಾಲೂಕು ೮ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಈಶ್ವರಮ್ಮ ಪ್ರೌಢಶಾಲೆ ೧೦ನೇ ತರಗತಿ ವಿದ್ಯಾರ್ಥಿನಿ ಬಿ. ಮೇಘ ಉದ್ಘಾಟಿಸಿದರು.
    ಭದ್ರಾವತಿ, ಜ. ೨೭: ಆಂಗ್ಲ ಭಾಷೆಯನ್ನು ಕೇವಲ ವ್ಯವಹಾರಿಕ ಭಾಷೆಯಾಗಿ ಬಳಸಿ ಮಾತೃ ಭಾಷೆ ಕನ್ನಡಕ್ಕೆ ಹೆಚ್ಚಿನ ಮಾನ್ಯತೆ ನೀಡುವ ಜೊತೆಗೆ ಕನ್ನಡಾಭಿಮಾನ ಬೆಳೆಸಿಕೊಳ್ಳಬೇಕೆಂದು ನಗರದ ನ್ಯೂಟೌನ್ ಈಶ್ವರಮ್ಮ ಪ್ರೌಢಶಾಲೆ ೧೦ನೇ ತರಗತಿ ವಿದ್ಯಾರ್ಥಿನಿ ಬಿ. ಮೇಘ ತಿಳಿಸಿದರು.
ಅವರು ಬುಧವಾರ  ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ತಾಲೂಕು ೮ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.
     ಕನ್ನಡ ಭಾಷೆಗೆ ತನ್ನದೇ ಆದ ಭವ್ಯ ಪರಂಪರೆ, ವಿಶಿಷ್ಟತೆ ಇದ್ದು, ನಾಡಿನಲ್ಲಿ ಅನೇಕ ಸಾಹಿತಿಗಳು, ಕವಿಗಳು, ಕಾದಂಬರಿಕಾರರು ಸೇರಿದಂತೆ ಅನೇಕ ಮಹನಿಯರು ಕನ್ನಡ ಭಾಷೆ ಮೆರಗನ್ನು ಹೆಚ್ಚಿಸಿದ್ದಾರೆ. ವಿದ್ಯಾರ್ಥಿಗಳು ಮಾತೃ ಭಾಷೆ ಕನ್ನಡಕ್ಕೆ  ಹೆಚ್ಚಿನ ಒತ್ತು ನೀಡಿ ದೈನಂದಿನ ಚಟುವಟಿಕೆಗಳಲ್ಲಿ ಹೆಚ್ಚಾಗಿ ಬಳಸಬೇಕು. ಈ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಬೇಕೆಂದರು.
    ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಮಾತನಾಡಿ, ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ನಮ್ಮ ಪ್ರತಿಷ್ಠೆ ಹೆಚ್ಚಿಸಿಕೊಳ್ಳಲು ಅಥವಾ ಇನ್ನೊಬ್ಬರಿಂದ ಪ್ರಶಂಸೆಗೆ ಒಳಗಾಗಬೇಕೆಂಬ ಉದ್ದೇಶದಿಂದ ಆರಂಭಿಸಿಲ್ಲ ಬದಲಾಗಿ ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಆರಂಭಿಸಲಾಗಿದೆ. ನಮ್ಮ ಪ್ರಯತ್ನ ಯಶಸ್ವಿಯಾಗಿದ್ದು, ಪ್ರಸ್ತುತ ಜಿಲ್ಲೆಯಲ್ಲಿ ಸಾಕಷ್ಟು ಪ್ರತಿಭಾವಂತ ಮಕ್ಕಳು ಗುರುತಿಸಿಕೊಂಡಿದ್ದಾರೆ ಎಂದರು.
ಶ್ರೀ ಕ್ಷೇತ್ರ ಆದಿಚುಂಚನಗಿರಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರಸನ್ನನಾಥಸ್ವಾಮೀಜಿ ಸಮ್ಮೇಳನದ ದಿವ್ಯ ಸಾನಿಧ್ಯ ವಹಿಸಿದ್ದರು. ಎಸ್‌ಎವಿ ಶಾಲೆ ೧೦ನೇ ತರಗತಿ ವಿದ್ಯಾರ್ಥಿನಿ ಭುವನಶ್ರೀ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿದ್ದರು.
    ವೇದಿಕೆ ತಾಲೂಕು ಘಟಕದ ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ  ಪ್ರಾಸ್ತಾವಿಕ ನುಡಿಗಳನ್ನಾಡಿದರು. ನಗರಸಭೆ ಮಾಜಿ ಅಧ್ಯಕ್ಷೆ ಎಂ.ಎಸ್ ಸುಧಾಮಣಿ, ವಿದ್ಯಾಸಂಸ್ಥೆ ಆಡಳಿತಾಧಿಕಾರಿ ಬಿ. ಜಗದೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  ಪ್ರಾಂಶುಪಾಲೆ ಡಾ. ಹರಿಣಾಕ್ಷಿ ಸ್ವಾಗತಿಸಿದರು.

No comments:

Post a Comment