Tuesday, January 26, 2021

ಜಗತ್ತಿನಲ್ಲಿಯೇ ನಮ್ಮದ್ದು ವಿಶಿಷ್ಟವಾದ ಶ್ರೇಷ್ಠ ಸಂವಿಧಾನ : ಜಿ. ಸಂತೋಷ್‌ಕುಮಾರ್

ಭದ್ರಾವತಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೭೨ನೇ ಗಣರಾಜ್ಯೋತ್ಸವದಲ್ಲಿ ತಹಸೀಲ್ದಾರ್ ಜಿ. ಸಂತೋಷ್ ಕುಮಾರ್ ಧ್ವಜಾರೋಹಣ ನೆರವೇರಿಸಿದರು.  
    ಭದ್ರಾವತಿ, ಜ. ೨೬: ಭಾರತೀಯ ಸಂವಿಧಾನ ಜಗತ್ತಿನಲ್ಲಿಯೇ ಶ್ರೇಷ್ಠವಾದ ಸಂವಿಧಾನವಾಗಿದ್ದು, ವಿಶಿಷ್ಟತೆಯಿಂದ ಕೂಡಿದೆ ಎಂದು ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಹೇಳಿದರು.
    ಅವರು ಮಂಗಳವಾರ ಹಳೇನಗರದ ಕನಕಮಂಟಪ ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೭೨ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ ಸಂದರ್ಭದಲ್ಲಿ ಹರಿದು ಹಂಚಿ ಹೋಗಿದ್ದ ಪ್ರಾಂತ್ಯಗಳನ್ನು ಸರ್ದಾರ್ ವಲ್ಲಭಬಾಯಿ ಪಟೇಲ್‌ರವರ ಪರಿಶ್ರಮದಿಂದಾಗಿ ಒಗ್ಗೂಡಿಸಲಾಯಿತು. ಆ ನಂತರ ಸಂವಿಧಾನ ರಚನೆ ಮೂಲಕ ದೇಶದಲ್ಲಿ ಏಕತೆ, ಸಮಾನತೆ ಪರಿಕಲ್ಪನೆಯನ್ನು ಕಂಡುಕೊಳ್ಳುವ ಪ್ರಜಾಪ್ರಭುತ್ವ ವ್ಯವಸ್ಥೆ ರೂಪಿಸಲಾಯಿತು. ಸಂವಿಧಾನ ರಚನೆಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಪರಿಶ್ರಮ ಹೆಚ್ಚಿನದ್ದಾಗಿದೆ. ನಮ್ಮದು ಜಗತ್ತಿನಲ್ಲಿಯೇ ಶ್ರೇಷ್ಠ ಸಂವಿಧಾನವಾಗಿದ್ದು, ಪ್ರತಿಯೊಬ್ಬರು ಈ ಸಂವಿಧಾನವನ್ನು ಗೌರವಿಸಬೇಕು. ಸಂವಿಧಾನದ ಆಶಯಗಳನ್ನು ಅರಿತು ಮುನ್ನಡೆಬೇಕೆಂದರು.
    ವೇದಿಕೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ಅಹಿಂಸೆ, ತ್ಯಾಗ, ಬಲಿದಾನಗಳ ಮೂಲಕ ಮಹಾತ್ಮಗಾಂಧಿಯವರು ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ನಂತರ ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಸರ್ವರನ್ನು ಸಮಾನತೆಯಿಂದ ಕಾಣುವ ವಿಶಿಷ್ಟವಾದ ಸಂವಿಧಾನವನ್ನು ರಚನೆ ಮಾಡಿದ ಪರಿಣಾಮ ವಿಶಿಷ್ಟವಾದ ಪ್ರಜಾಪ್ರಭುತ್ವ ವ್ಯವಸ್ಥೆ ರೂಪುಗೊಂಡು ದೇಶ ಸರ್ವತೋಮುಖವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಾಯಿತು. ಈ ಹಿನ್ನಲೆಯಲ್ಲಿ ನಾವೆಲ್ಲರೂ ಇಂದು ನೆಮ್ಮದಿಯಾಗಿ ಬದುಕಲು ಸಾಧ್ಯವಾಗಿದೆ ಎಂದರು.
    ವೇದಿಕೆಯಲ್ಲಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ಡಿ. ಲಕ್ಷ್ಮೀದೇವಿ, ಕಾರ್ಯನಿರ್ವಹಣಾಧಿಕಾರಿ ಕೆ.ಜೆ ತಮ್ಮಣ್ಣಗೌಡ, ಸದಸ್ಯರಾದ ಕೆ.ವಿ ರುದ್ರಪ್ಪ, ಆರ್. ತಿಪ್ಪೇಶ್‌ರಾವ್, ಎ.ಎನ್ ಉಷಾಕಿರಣ, ಯಶೋದಮ್ಮ, ಆಶಾ ಶ್ರೀಧರ್, ನಗರಸಭೆ ಪೌರಾಯುಕ್ತ ಮನೋಹರ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಲವೇಶ್‌ಗೌಡ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಎಸ್ ಬಸವರಾಜ್, ಪ್ರೌಢಶಾಲಾ ಶಿಕ್ಷಕ ಸಂಘದ ಜಿಲ್ಲಾಧ್ಯಕ್ಷ ಸಿದ್ದಬಸಪ್ಪ, ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ, ಪೊಲೀಸ್ ಉಪಾಧೀಕ್ಷಕ ಕೃಷ್ಣಮೂರ್ತಿ, ಉಪ ವಲಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ್, ಮುಖಂಡರಾದ ಲೋಕೇಶ್, ಅಣ್ಣೋಜಿರಾವ್, ಮಂಜುಳರಾಮಚಂದ್ರ, ರಾಘವೇಂದ್ರ ಸರಾಟೆ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಸುಮಂತಿ ಕಾರಂತ್ ತಂಡದವರು ಪ್ರಾರ್ಥಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ಸ್ವಾಗತಿಸಿದರು. ಅಪೇಕ್ಷ ಮಂಜುನಾಥ್ ನಿರೂಪಿಸಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರು ಹಾಗು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

No comments:

Post a Comment