Monday, February 22, 2021

ಫೆ.೨೩ರಂದು ಖಾಸಗಿ ಶಾಲೆಗಳು ಬಂದ್ : ರಾಜ್ಯ ಒಕ್ಕೂಟದ ಹೋರಾಟಕ್ಕೆ ಬೆಂಬಲ

   ಭದ್ರಾವತಿ, ಫೆ. ೨೨: ಸರ್ಕಾರ ಸರ್ವೋಚ್ಛ ನ್ಯಾಯಾಲಯದ ಆದೇಶ ಪಾಲಿಸುವಂತೆ ಹಾಗು ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಫೆ.೨೩ರಂದು ನಡೆಸುತ್ತಿರುವ ಹೋರಾಟಕ್ಕೆ ತಾಲೂಕು ಶಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ ಬೆಂಬಲ ವ್ಯಕ್ತಪಡಿಸಿದೆ.
   ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಶಾಲಾ ಶುಲ್ಕ ವಸೂಲಾತಿ ವಿಚಾರದಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುವುದರಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ಹಿನ್ನಲೆಯಲ್ಲಿ ರಾಜ್ಯಮಟ್ಟದ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಸರ್ವೋಚ್ಛ ನ್ಯಾಯಾಲಯದ ಮೊರೆಹೋದ ಹಿನ್ನಲೆಯಲ್ಲಿ ನ್ಯಾಯಾಲಯ ಶೇ.೧೦೦ರಷ್ಟು ಶುಲ್ಕ ಪಾವತಿಸಿಕೊಳ್ಳುವಂತೆ ಆದೇಶ ಹೊರಡಿಸಿದೆ. ಈ ಹಿನ್ನಲೆಯಲ್ಲಿ ಸರ್ವೋಚ್ಛ ನ್ಯಾಯಾಲಯದ ಆದೇಶ ಎತ್ತಿ ಹಿಡಿಯುವಂತೆ ಹಾಗು ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಹೋರಾಟ ನಡೆಸಲಾಗುತ್ತಿದೆ.
   ಹೋರಾಟದ ಅಂಗವಾಗಿ ಬೆಂಗಳೂರಿನ ಮುಖ್ಯ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೆ ಕಾಲುನಡಿಗೆ ನಡೆಯಲಿದ್ದು, ನಂತರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಗುವುದು. ಹೋರಾಟದಲ್ಲಿ ರಾಜ್ಯದ ವಿವಿಧೆಡೆಗಳಿಂದ ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರು, ಸಿಬ್ಬಂದಿಗಳು ಸೇರಿದಂತೆ ಸಾವಿರಾರು ಮಂದಿ ಪಾಲ್ಗೊಳ್ಳುತ್ತಿದ್ದಾರೆ.  ರಾಜ್ಯ ಒಕ್ಕೂಟದ ಕರೆ ಮೇರೆಗೆ ರಾಜ್ಯಾದ್ಯಂತ ಖಾಸಗಿ ಶಿಕ್ಷಣ ಸಂಸ್ಥೆಗಳು ತಮ್ಮ ಶಾಲೆಗಳಿಗೆ ರಜೆ ಘೋಷಿಸುವ ಮೂಲಕ ಹೋರಾಟ ಬೆಂಬಲಿಸುತ್ತಿವೆ. ಈ ಹಿನ್ನಲೆಯಲ್ಲಿ ತಾಲೂಕಿನಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಗಳು ಸಹ ಶಾಲೆಗಳಿಗೆ ರಜೆ ಘೋಷಿಸುವ ಮೂಲಕ ಹೋರಾಟಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಲಿವೆ ಎಂದು ತಾಲೂಕು ಶಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.    

No comments:

Post a Comment