ರಮೇಶ್ ಲ ಜಾರಕಿಹೊಳಿಯವರನ್ನು ತಕ್ಷಣ ಸಚಿವ ಸಂಪುಟದಿಂದ ಕೈಬಿಟ್ಟು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಭದ್ರಾವತಿಯಲ್ಲಿ ಮುಖ್ಯಮಂತ್ರಿಗಳಿಗೆ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಮೂಲಕ ಬುಧವಾರ ಕಾಂಗ್ರೆಸ್ ಯುವ ಘಟಕದಿಂದ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಮಾ. ೩: ಯುವತಿಯೋರ್ವಳಿಗೆ ಉದ್ಯೋಗ ಕೊಡಿಸುವ ಭರವಸೆ ನೀಡಿ ಲೈಂಗಿಕ ದೌರ್ಜನ್ಯವೆಸಗಿರುವ ಜಲ ಸಂಪನ್ಮೂಲ ಖಾತೆ ಸಚಿವ ರಮೇಶ್ ಲ. ಜಾರಕಿಹೊಳಿಯವರನ್ನು ತಕ್ಷಣ ಸಚಿವ ಹಾಗು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ವಿವಿಧ ರಾಜಕೀಯ ಪಕ್ಷಗಳ, ಸಂಘಟನೆಗಳ ಪ್ರಮುಖರು ಆಗ್ರಹಿಸಿದ್ದಾರೆ.
ಆಮ್ ಆದ್ಮಿ ಪಾರ್ಟಿ ಮಹಿಳಾ ಘಟಕದ ಅಧ್ಯಕ್ಷೆ ರೇಷ್ಮೆ ಜಾವೇದ್ ಸಚಿವರ ಲೈಂಗಿಕ ದೌರ್ಜನ್ಯವನ್ನು ಖಂಡಿಸಿದ್ದಾರೆ. ವಿಶ್ವ ಮಹಿಳಾ ದಿನಾಚರಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಪ್ರಕರಣ ಬೆಳಕಿಗೆ ಬಂದಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಯಡಿಯೂರಪ್ಪನವರ ಸರ್ಕಾರಕ್ಕೆ ಮಹಿಳೆಯರ ಮೇಲೆ ಸ್ವಲ್ಪವೂ ಗೌರವವಿಲ್ಲ. ಸದನದಲ್ಲಿ ಆಶ್ಲೀಲ ಚಿತ್ರ ವೀಕ್ಷಣೆ ಮಾಡಿದವರಿಗೆ ಸಚಿವ ಸ್ಥಾನ ನೀಡಿರುವುದು ದೌರ್ಭಾಗ್ಯದ ಸಂಗತಿಯಾಗಿದೆ. ಇದೀಗ ಸಚಿವ ರಮೇಶ್ ಲ ಜಾರಕಿಹೊಳಿಯವರು ಯುವತಿಯೊಬ್ಬರಿಗೆ ಉದ್ಯೋಗ ಕೊಡಿಸುವ ಭರವಸೆ ನೀಡಿ ಲೈಂಗಿಕ ದೌರ್ಜನ್ಯ ನಡೆಸುವ ಮೂಲಕ ವಂಚಿಸಿರುವುದು ನಾಡಿನ ಘನತೆಗೆ ಕಪ್ಪು ಚುಕ್ಕಿಯಾಗಿದೆ. ತಕ್ಷಣ ಯಡಿಯೂರಪ್ಪನವರು ರಮೆಶ್ ಲ ಜಾರಕಿಹೊಳಿ ಸಚಿವ ಸ್ಥಾನ ಹಿಂಪಡೆಯಬೇಕು. ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿಯವರು ತಕ್ಷಣ ಶಾಸಕ ಸ್ಥಾನದಿಂದಲೂ ವಜಾಗೊಳಿಸಬೇಕೆಂದು ಆಗ್ರಹಿಸಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜ್ಯೋತಿ ಸೋಮಶೇಖರ್
ಇದೆ ರೀತಿ ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜ್ಯೋತಿ ಸೋಮಶೇಖರ್ ಸಹ ದೌರ್ಜನ್ಯವನ್ನು ಖಂಡಿಸಿದ್ದಾರೆ. ರಮೇಶ್ ಲ ಜಾರಕಿಹೊಳಿ ಸಚಿವ ಸ್ಥಾನ ಹಾಗು ಶಾಸಕ ಸ್ಥಾನ ವಜಾಗೊಳಿಸುವ ಮೂಲಕ ಸಂತ್ರಸ್ಥ ಯುವತಿ ಹಾಗು ಕುಟುಂಬಕ್ಕೆ ಮತ್ತು ಸಾಮಾಜಿಕ ಕಾರ್ಯಕರ್ತ ದಿನೇಶ್‌ಕಲ್ಲಹಳ್ಳಿಯವರಿಗೆ ಗೃಹ ಸಚಿವ ಬೊಮ್ಮಾಯಿ ಸೂಕ್ತ ಭದ್ರತೆ ನೀಡಬೇಕೆಂದು ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಯುವ ಘಟಕದಿಂದ ಮುಖ್ಯಮಂತ್ರಿಗಳಿಗೆ ಮನವಿ:
ಸಚಿವ ರಮೇಶ್ ಜಾರಕಿಹೊಳಿಯವರ ಲೈಂಗಿಕ ದೌರ್ಜನ್ಯದ ದೃಶ್ಯಗಳು ಹೊರಬಿದ್ದಿದ್ದು, ಸಚಿವರ ಈ ನೀಚ ಕೃತ್ಯಕ್ಕೆ ನಾಡಿನ ಜನರು ತಲೆ ತಗ್ಗಿಸುವಂತಾಗಿದೆ. ಈ ಹಿನ್ನಲೆಯಲ್ಲಿ ತಕ್ಷಣ ಸಚಿವ ಸಂಪುಟದಿಂದ ಅವರನ್ನು ಕೈಬಿಟ್ಟು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಮೂಲಕ ಬುಧವಾರ ಕಾಂಗ್ರೆಸ್ ಯುವ ಘಟಕದಿಂದ ಮನವಿ ಸಲ್ಲಿಸಲಾಯಿತು.
ಮುಖ್ಯಮಂತ್ರಿಗಳು ಈ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಒಂದು ವೇಳೆ ನಿರ್ಲಕ್ಷ್ಯ ವಹಿಸಿದ್ದಲ್ಲಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಲಾಗಿದೆ.
ಯುವ ಘಟಕದ ಅಧ್ಯಕ್ಷ ಜಿ. ವಿನೋದ್ ಕುಮಾರ್, ಗ್ರಾಮಾಂತರ ಅಧ್ಯಕ್ಷ ಅಫ್ತಾಬ್ ಅಹ್ಮದ್, ನಗರ ಕಾರ್ಯದರ್ಶಿ ವರುಣ್‌ಕುಮಾರ್, ಎ.ಪಿ ಭರತ್ ಉಪಸ್ಥಿತರಿದ್ದರು.
No comments:
Post a Comment