ಭದ್ರಾವತಿ ಬಿ.ಎಚ್ ರಸ್ತೆ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರ ಸಭೆ ಶನಿವಾರ ನಡೆಯಿತು.
ಭದ್ರಾವತಿ, ಮಾ. ೬: ಬಿಜೆಪಿ ಪಕ್ಷ ಜನರ ಸೇವೆಗಾಗಿ ಇರುವ ಪಕ್ಷ. ಈ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಅಧಿಕಾರ ಮುಖ್ಯವಲ್ಲ ಎಂದು ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ. ಧರ್ಮಪ್ರಸಾದ್ ಹೇಳಿದರು.
ನಗರದ ಬಿ.ಎಚ್ ರಸ್ತೆ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಕ್ಷೇತ್ರದ ಶಾಸಕ ಬಿ.ಕೆ ಸಂಗಮೇಶ್ವರ್ ಬಿಜೆಪಿ ಪಕ್ಷ ಹಾಗು ಸ್ಥಳೀಯ ನಾಯಕರ ಕುರಿತು ಕೆಳಮಟ್ಟದಲ್ಲಿ ಮಾತನಾಡುವುದು ಸರಿಯಲ್ಲ. ಕ್ಷೇತ್ರದಲ್ಲಿ ಇದುವರೆಗೂ ಬಿಜೆಪಿ ಪಕ್ಷಕ್ಕೆ ನೆಲೆ ಇಲ್ಲ. ಯಾವುದೇ ಅಧಿಕಾರ ಸಹ ಹಿಡಿಯುವಲ್ಲಿ ಯಶಸ್ವಿಯಾಗಿಲ್ಲ ಎಂದು ಟೀಕಿಸುತ್ತಿದ್ದಾರೆ. ಅವರ ಟೀಕೆಗೆ ಇಲ್ಲಿನ ಕಾರ್ಯಕರ್ತರು ಉತ್ತರಿಸಬೇಕಾದ ಅಗತ್ಯವಿದೆ. ಜನರ ಸೇವೆ ಮಾಡಲು ಯಾವುದೇ ಅಧಿಕಾರ ಬೇಕಿಲ್ಲ. ಕಾರ್ಯಕರ್ತರು ಪ್ರಾಮಾಣಿಕವಾಗಿ ತಮ್ಮಿಂದಾಗುವ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಇದರಿಂದಾಗಿ ಕೇಂದ್ರ ಹಾಗು ರಾಜ್ಯ ಸರ್ಕಾರದಿಂದ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿವೆ. ಸ್ಥಳೀಯ ಶಾಸಕರು ಮಾಡದಿರುವ ಕಾರ್ಯಗಳನ್ನು ಪಕ್ಷದ ಮುಖಂಡರು, ಕಾರ್ಯಕರ್ತರು ಮಾಡುತ್ತಿದ್ದಾರೆ. ಈ ವಿಚಾರ ನಮ್ಮನ್ನು ಟೀಕಿಸುತ್ತಿರುವವರು ಅರ್ಥ ಮಾಡಿಕೊಳ್ಳಬೇಕೆಂದರು.
ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್ ಮಾತನಾಡಿ, ಸೇವೆಗೆ ಮೊದಲ ಆದ್ಯತೆ ನೀಡಿರುವ ಪಕ್ಷ ಬಿಜೆಪಿ. ಇದನ್ನು ಪಕ್ಷ ತನ್ನ ಸಿದ್ದಾಂತದಲ್ಲಿ ಅಳವಡಿಸಿಕೊಂಡಿದೆ. ಸೇವೆ ಮೂಲಕ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಇಂದು ದೇಶದ ಬಹುದೊಡ್ಡ ಪಕ್ಷವಾಗಿ ವ್ಯಾಪಿಸಿಕೊಂಡಿದೆ. ಕ್ಷೇತ್ರದಲ್ಲಿ ಪಕ್ಷ ಮತ್ತಷ್ಟು ಬಲಗೊಳ್ಳಬೇಕಾಗಿದೆ. ತಳಮಟ್ಟದಿಂದ ಗಟ್ಟಿಗೊಳಿಸುವ ನಿಟ್ಟಿನಲ್ಲಿ ಇನ್ನೂ ಹೆಚ್ಚಿನ ಸಂಘಟಿತ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗುವುದು. ಮುಂಬರುವ ಸ್ಥಳೀಯ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನು ಕೈಗೊಳ್ಳಲಾಗುವುದು. ರಾಜ್ಯ ಮತ್ತು ಜಿಲ್ಲಾಮಟ್ಟದ ಪಕ್ಷದ ಮುಖಂಡರು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಸಹಕರಿಸಲಿದ್ದಾರೆ ಎಂದರು.
ವೇದಿಕೆಯಲ್ಲಿ ಹಟ್ಟಿ ಚಿನ್ನದ ಗಣಿ ನಿಗಮದ ನಿರ್ದೇಶಕ ಕೂಡ್ಲಿಗೆರೆ ಹಾಲೇಶ್, ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಲಿ ನಿರ್ದೇಶಕ ಮಂಗೋಟೆ ರುದ್ರೇಶ್, ಸೂಡಾ ಸದಸ್ಯರಾದ ವಿ. ಕದಿರೇಶ್, ರಾಮಲಿಂಗಯ್ಯ, ತಾಲೂಕು ಪಂಚಾಯಿತಿ ಸದಸ್ಯ ಕೆ. ಮಂಜುನಾಥ್, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ ಶ್ರೀನಾಥ್, ಆರ್.ಎಸ್ ಶೋಭಾ, ಗಣೇಶ್‌ರಾವ್, ಸುಬ್ರಮಣಿ, ಕೆ. ಮಂಜಪ್ಪ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
No comments:
Post a Comment