ಭದ್ರಾವತಿ ನಗರಸಭೆ ಚುನಾವಣೆ ಹಿನ್ನಲೆಯಲ್ಲಿ ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರ ಪತ್ನಿ ಶಾರದ ಅಪ್ಪಾಜಿ ನೇತೃತ್ವದಲ್ಲಿ ಸೋಮವಾರ ಜೆಡಿಎಸ್ ಪಕ್ಷದ ಮುಖಂಡರು ಸುದ್ದಿಗೋಷ್ಠಿ ನಡೆಸಿದರು.
ಭದ್ರಾವತಿ, ಏ. ೫: ಈ ಬಾರಿಯ ನಗರಸಭೆ ಚುನಾವಣೆಯಲ್ಲೂ ಜೆಡಿಎಸ್ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ಆರ್. ಕರುಣಾಮೂರ್ತಿ ವಿಶ್ವಾಸ ವ್ಯಕ್ತಪಡಿಸಿದರು.
ಅವರು ಸೋಮವಾರ ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರ ಪತ್ನಿ ಶಾರದ ಅಪ್ಪಾಜಿ ನೇತೃತ್ವದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಸ್ತುತ ಅಪ್ಪಾಜಿ ನಮ್ಮೊಂದಿಗೆ ಇಲ್ಲದಿರಬಹುದು. ಆದರೆ ರಾಜಕೀಯವಾಗಿ ಅವರು ನಡೆದು ಬಂದ ದಾರಿಯಲ್ಲಿ ಇಂದು ನಾವೆಲ್ಲರೂ ಒಗ್ಗಟ್ಟಾಗಿ ಸಾಗಬೇಕಾಗಿದೆ. ಕಳೆದ ಬಾರಿ ಚುನಾವಣೆಯಲ್ಲಿ ೩೫ ವಾರ್ಡ್‌ಗಳ ಪೈಕಿ ೨೩ ವಾರ್ಡ್‌ಗಳಲ್ಲಿ ಗೆಲುವು ಸಾಧಿಸುವ ಮೂಲಕ ನಗರಸಭೆ ಚುಕ್ಕಾಣಿ ಹಿಡಿಯಲಾಗಿತ್ತು. ಈ ಬಾರಿ ಚುನಾವಣೆಯಲ್ಲೂ ಜೆಡಿಎಸ್ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವ ವಿಶ್ವಾಸವಿದೆ ಎಂದರು.
ಜೆಡಿಎಸ್ ರಾಜ್ಯ ಕಾರ್ಯದರ್ಶಿ ಎಂ. ಶ್ರೀಕಾಂತ್, ಮಾಜಿ ಶಾಸಕಿ ಶಾರದಪೂರ್‍ಯಾನಾಯ್ಕ, ಜಿ.ಪಂ. ಸದಸ್ಯ ಎಸ್. ಮಣಿಶೇಖರ್, ಮಾಜಿ ಸದಸ್ಯ ಎಸ್. ಕುಮಾರ್, ಸೇರಿದಂತೆ ಇನ್ನಿತರರು ಮಾತನಾಡಿ, ಅಪ್ಪಾಜಿಯವರು ನಮ್ಮೊಂದಿಗೆ ಇಲ್ಲದಿರುವ ಸಂದರ್ಭದಲ್ಲಿ ಚುನಾವಣೆ ಎದುರಾಗಿದೆ. ಈ ಸಂದರ್ಭದಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಚುನಾವಣೆ ಎದುರಿಸುವುದು ಅನಿವಾರ್ಯವಾಗಿದೆ. ಅಪ್ಪಾಜಿಯವರು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಗೆಲುವಿಗೆ ಸಹಕಾರಿಯಾಗಲಿವೆ. ಅಪ್ಪಾಜಿಯವರ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಆತ್ಮವಿಶ್ವಾಸದಿಂದ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕೆಂದು ಮನವಿ ಮಾಡಿದರು.
ಎಲ್ಲಾ ೩೫ ವಾರ್ಡ್‌ಗಳಲ್ಲೂ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದು, ಮುಂದಿನ ೨-೩ ದಿನಗಳಲ್ಲಿ ಅಧಿಕೃತ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸುವುದಾಗಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿ.ಪಂ. ಸದಸ್ಯ ಜೆ.ಪಿ ಯೋಗೇಶ್, ಎಂ.ಎ ಅಜಿತ್, ಕರಿಯಪ್ಪ, ಡಿ.ಟಿ ಶ್ರೀಧರ್, ಪೀರ್‌ಷರೀಫ್, ಮೈಲಾರಪ್ಪ, ಸುಕನ್ಯ, ಕುಮಾರ್, ಬದರಿನಾರಾಯಣ, ಗುಣಶೇಖರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment