ಭದ್ರಾವತಿ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್-೧೯ರ ಹಿನ್ನಲೆಯಲ್ಲಿ ಬುಧವಾರ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆಯಲ್ಲಿ ತುರ್ತು ಸಭೆ ನಡೆಯಿತು.
ಭದ್ರಾವತಿ, ಏ. ೨೮: ಕೋವಿಡ್-೧೯ ಸೋಂಕಿತರಿಗೆ ನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿಯೇ ಸೂಕ್ತ ಚಿಕಿತ್ಸೆ ನೀಡಲು ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಕೋವಿಡ್-೧೯ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಅವರು ಬುಧವಾರ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ತುರ್ತು ಸಭೆಯ ನೇತೃತ್ವ ವಹಿಸಿ ಮಾತನಾಡಿದರು.
ಕೋವಿಡ್-೧೯ ಪುನಃ ಕಾಣಿಸಿಕೊಳ್ಳುವುದಿಲ್ಲ ಎಂಬ ಜನರಲ್ಲಿನ ಮನೋಭಾವನೆ ಹಾಗು ಸರ್ಕಾರದ ನಿರ್ಲಕ್ಷ್ಯತನದಿಂದಾಗಿ ಸೋಂಕಿನ ಪ್ರಮಾಣ ಹೆಚ್ಚಳವಾಗಿದೆ. ಪ್ರಸ್ತುತ ಇನ್ನಾದರೂ ಎಚ್ಚೆತ್ತುಕೊಂಡು ಅಗತ್ಯ ಮುನ್ನಚ್ಚರಿಕೆ ಕ್ರಮಗಳನ್ನು ಅಳವಡಿಸಿಕೊಳ್ಳಬೇಕಾಗಿದೆ. ಸರ್ಕಾರ ಕೇವಲ ಪ್ರಚಾರ ಕಾರ್ಯದಲ್ಲಿ ತೊಡಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್-೧೯ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡುವುದಾಗಿ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದೆ. ಆದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಸೌಲರ್ಭ್ಯಗಳಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸೋಂಕಿತರನ್ನು ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿಕೊಡಲಾಗುತ್ತಿದೆ. ಆದರೆ ಅಲ್ಲಿ ಸೂಕ್ತ ಸಮಯದಲ್ಲಿ ಚಿಕಿತ್ಸೆಗೆ ಅವಕಾಶ ಲಭ್ಯವಾಗುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ. ಪ್ರಸ್ತುತ ಆಸ್ಪತ್ರೆಯಲ್ಲಿ ಲಭ್ಯವಿರುವ ಹಾಸಿಗೆ ಸಂಖ್ಯೆಯನ್ನು ಹೆಚ್ಚಿಸಿಕೊಂಡು ವೆಂಟಿಲೇಟರ್ ಹಾಗು ಆಕ್ಸಿಜನ್ ಕೊರತೆ ಎದುರಾಗದಂತೆ ನೋಡಿಕೊಳ್ಳಬೇಕೆಂದರು.
ಕೋವಿಡ್-೧೯ ನಿಯಂತ್ರಣಕ್ಕೆ ತಾಲೂಕು ಆಡಳಿತ, ನಗರಸಭೆ ಹಾಗು ಆರೋಗ್ಯ ಇಲಾಖೆ ತಮ್ಮ ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸುವ ಮೂಲಕ ಸಾರ್ವಜನಿಕರಲ್ಲಿ ಇನ್ನೂ ಹೆಚ್ಚಿನ ಜಾಗೃತಿ ಮೂಡಿಸಬೇಕೆಂದರು.
ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಮಾತನಾಡಿ, ಕೋವಿಡ್-೧೯ ಸೋಂಕಿತರ ತಪಾಸಣೆ ನಡೆಸಿ ಸೋಂಕು ಕಂಡು ಬಂದಲ್ಲಿ ತಕ್ಷಣ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಸ್ತುತ ಆಸ್ಪತ್ರೆಯಲ್ಲಿ ೧೧ ಕೋವಿಡ್-೧೯ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಒಟ್ಟು ೧೬ ವೆಂಟಿಲೇಟರ್ ಮತ್ತು ಆಕ್ಸಿಜನ್ ಇದ್ದು, ಪ್ರಸ್ತುತ ಯಾವುದೇ ಕೊರತೆ ಕಂಡು ಬಂದಿಲ್ಲ ಎಂದು ಮಾಹಿತಿ ನೀಡಿದರು.
ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್, ನಗರಸಭೆ ಪೌರಾಯುಕ್ತ ಮನೋಹರ್ ಹಾಗು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ಕೊವಿಡ್-೧೯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೈಗೊಂಡಿರುವ ಕ್ರಮಗಳನ್ನು ವಿವರಿಸಿದರು. ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಓ. ಮಲ್ಲಪ್ಪ ಉಪಸ್ಥಿತರಿದ್ದರು. ನಗರ ಆರೋಗ್ಯ ವೈದ್ಯಾಧಿಕಾರಿಗಳು, ಆರೋಗ್ಯ ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment