ಭದ್ರಾವತಿ, ಏ. ೧೨: ನಗರದ ಕನಕಮಂಟಪ ಮೈದಾನದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಹೊನಲು ಬೆಳಕಿನ ಪ್ರೊ ಕಬಡ್ಡಿ ಪಂದ್ಯಾವಳಿ ಮುಕ್ತಾಯದ ವೇಳೆ ನಡೆದಿದ್ದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದ್ದ ಶಾಸಕರ ಪುತ್ರನಿಗೆ ರಾಜ್ಯ ಉಚ್ಛ ನ್ಯಾಯಾಲಯ ಸೋಮವಾರ ಜಾಮೀನು ಮಂಜೂರು ಮಾಡಿದೆ.
ಶಾಸಕ ಬಿ.ಕೆ ಸಂಗಮೇಶ್ವರ್ ಪುತ್ರ ಬಿ.ಎಸ್ ಬಸವೇಶ್‌ನನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಾ.೬ರಂದು ಬಂಧಿಸಿದ್ದರು. ಈ ಸಂಬಂಧ ನಗರದ ಜೆಎಂಎಫ್‌ಸಿ ಹಾಗು ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಈ ಹಿನ್ನಲೆಯಲ್ಲಿ ಉಚ್ಛ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಘಟನೆ ವಿವರ : ಫೆ.೨೭ ಮತ್ತು ೨೮ರಂದು ಎರಡು ದಿನಗಳ ಕಾಲ ಕನಕಮಂಟಪ ಮೈದಾನದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಹೊನಲು ಬೆಳಕಿನ ಪ್ರೊ ಕಬಡ್ಡಿ ಪಂದ್ಯಾವಳಿ ಮುಕ್ತಾಯದ ವೇಳೆ ಬಹುಮಾನ ವಿತರಣೆ ನಂತರ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದು ಹಲವರ ವಿರುದ್ಧ ದೂರು, ಪ್ರತಿ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಬಸವೇಶ್ ವಿರುದ್ಧ ಸೆಕ್ಷನ್ ೩೦೭ರ ಅಡಿಯಲ್ಲಿ ಹಲ್ಲೆ ಹಾಗು ಜಾತಿ ನಿಂದನೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಈ ಹಿನ್ನಲೆಯಲ್ಲಿ ತಲೆ ಮರೆಸಿಕೊಂಡಿದ್ದ ಬಸವೇಶ್‌ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು.
ಪುತ್ರ ಬಸವೇಶ್ ಹಾಗು ಕುಟುಂಬ ಸದಸ್ಯರು ಮತ್ತು ಕಾರ್ಯಕರ್ತರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವುದನ್ನು ವಿರೋಧಿಸಿ ಶಾಸಕ ಬಿ.ಕೆ ಸಂಗಮೇಶ್ವರ್ ವಿಧಾನಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ಶಿವಮೊಗ್ಗದಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸುವ ಮೂಲಕ ಸರ್ಕಾರದ ವಿರುದ್ಧ ಸಿಡಿದೆದಿದ್ದರು.
ಚಿತ್ರ: ಡಿ೧೨-ಬಿಡಿವಿಟಿ೪
ಬಿ.ಎಸ್ ಬಸವೇಶ್
No comments:
Post a Comment