Saturday, May 29, 2021

ಈ ತಿಂಗಳ ಅಂತ್ಯದೊಳಗೆ ಶಾಸಕರ ಅನುದಾನದಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣ : ಬಿ.ಕೆ ಸಂಗಮೇಶ್ವರ್

ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ಶನಿವಾರ ಶಾಸಕರ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆಯಿತು.
     ಭದ್ರಾವತಿ, ಮೇ. ೨೯: ಶಾಸಕರ ಅನುದಾನದ ಒಂದು ಕೋಟಿ ರು. ವೆಚ್ಚದಲ್ಲಿ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಮಾಡಲು ಜಾಗ ಗುರುತಿಸಿದ್ದು, ಈ ತಿಂಗಳ ಅಂತ್ಯದೊಳಗೆ ಆಕ್ಸಿಜನ್ ಉತ್ಪಾದನೆ ನಡೆಯಲಿದೆ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ತಿಳಿಸಿದರು.
   ಅವರು ಶನಿವಾರ ನಗರಸಭೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ನೂತನ ಆಕ್ಸಿಜನ್ ಪ್ಲಾಂಟ್‌ನಲ್ಲಿ  ಒಂದು ನಿಮಿಷಕ್ಕೆ ೪೦೦ ಲೀಟರ್ ಗಾಳಿಯಿಂದ ಆಮ್ಲಜನಕ ಉತ್ಪಾದನೆಯಾಗಲಿದೆ. ಇದರಿಂದ ತಕ್ಷಣಕ್ಕೆ ಆಕ್ಸಿಜನ್ ಕೊರತೆ ಎದುರಾಗುವುದಿಲ್ಲ. ಈಗಾಗಲೇ ಆಸ್ಪತ್ರೆಯಲ್ಲಿ ಆಕ್ಸಿಜನ್ ಒಳಗೊಂಡ ೫೦ ಹಾಸಿಗೆಗಳಿದ್ದು, ಇದರ ಜೊತೆಗೆ ಇದೀಗ ೨೫ ಲಕ್ಷ ರು. ಶಾಸಕರ ಅನುದಾನದಲ್ಲಿ ಹೊಸದಾಗಿ ಆಕ್ಸಿಜನ್ ಒಳಗೊಂಡ ೫೦ ಹಾಸಿಗೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಪ್ರಸ್ತುತ ಆಸ್ಪತ್ರೆಯಲ್ಲಿ ಐಸಿಯು ಒಳಗೊಂಡ ೩ ಹಾಸಿಗೆಗಳಿದ್ದು, ಇದನ್ನು ೧೦ ಹಾಸಿಗೆಗಳಿಗೆ ಹೆಚ್ಚಳ ಮಾಡಲಾಗುವುದು ಎಂದರು.
     ಈಗಾಗಲೇ ನಗರದ ಎಂಪಿಎಂ ಕಲ್ಯಾಣ ಮಂಟಪದಲ್ಲಿ ೧೦೦ ಹಾಸಿಗೆಗಳ ಕೋವಿಡ್ ಆರೈಕೆ ಕೇಂದ್ರ ನಿರ್ಮಿಸಲಾಗಿದ್ದು, ಸರ್ಕಾರ ಇದೀಗ ಮನೆಗಳಲ್ಲಿಯೇ ಚಿಕಿತ್ಸೆ ಪಡೆಯುವ ವಿಧಾನವನ್ನು ಬದಲಿಸಿದೆ. ಇದರಿಂದ ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ತಾಲೂಕಿನ ದೇವರ ನರಸೀಪುರ ಮೊರಾರ್ಜಿ ವಸತಿ ಶಾಲೆಯಲ್ಲಿ ೧೬೦ ಹಾಸಿಗೆಯುಳ್ಳ ಆರೈಕೆ ಕೇಂದ್ರ ನಿರ್ಮಾಣ ಮಾಡಲಾಗಿದೆ.  ಈ ಕೇಂದ್ರ ಭಾನುವಾರದಿಂದಲೇ ಕಾರ್ಯಾರಂಭ ಮಾಡಲಿದೆ. ಪ್ರಸ್ತುತ ದಾಖಲಾಗುವವರನ್ನು ಈ ಕೇಂದ್ರಕ್ಕೆ ಕಳುಹಿಸಿಕೊಡಲಾಗುವುದು. ಮುಂದಿನ ದಿನಗಳಲ್ಲಿ ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿರುವ ಮೊರಾರ್ಜಿ ವಸತಿ ಶಾಲೆಯಲ್ಲೂ ಆರೈಕೆ ಕೇಂದ್ರ ತೆರೆಯಲಾಗುವುದು ಎಂದರು.
       ನಗರ ವ್ಯಾಪ್ತಿಯಲ್ಲಿ ಕೊರೋನಾ ಇಳಿಮುಖ:
   ನಗರ ವ್ಯಾಪ್ತಿಯಲ್ಲಿ ಕೊರೋನಾ ಸೋಂಕು ಇಳಿಮುಖವಾಗುತ್ತಿದೆ. ಈ ವ್ಯಾಪ್ತಿಯಲ್ಲಿ ಎಲ್ಲಾ ಇಲಾಖೆಗಳು ಉತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಿವೆ ಎಂದರು ಪ್ರಶಂಸೆ ವ್ಯಕ್ತಪಡಿಸಿದರು.
   ಗ್ರಾಮಾಂತರ ಭಾಗದಲ್ಲಿ ಸೋಂಕು ಹೆಚ್ಚಳವಾಗುತ್ತಿದ್ದು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿಗಳು ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ. ಸೋಂಕು ನಿಯಂತ್ರಣಕ್ಕೆ ಯಾವುದೇ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ಅಲ್ಲದೆ ಸ್ಯಾನಿಟೈಜರ್ ಸೇರಿದಂತೆ ಇನ್ನಿತರ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆಂದು ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿಗಳು ಬದಲಾಗದಿದ್ದಲ್ಲಿ ಅವರ ವಿರುದ್ಧ ಮೇಲಾಧಿಕಾರಿಗಳಿಗೆ ಪತ್ರ ಬರೆದು ಕಠಿಣ ಕ್ರಮಕ್ಕೆ ಆಗ್ರಹಿಸಲಾಗುವುದು ಎಂದು ಎಚ್ಚರಿಸಿದರು.
     ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಇಂಜಿನಿಯರ್ ರವಿಕಿರಣ್, ನಗರಸಭೆ ವ್ಯವಸ್ಥಾಪಕಿ ಸುನಿತಾಕುಮಾರಿ, ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು, ನೂತನ ಸದಸ್ಯರು, ಎರೆಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment