ಸದ್ಬಳಕೆ ಮಾಡಿಕೊಂಡು ಸಮಸ್ಯೆ ಎದುರಾಗದಂತೆ ಎಚ್ಚರ ವಹಿಸಿ : ಶಾಸಕ ಬಿ.ಕೆ ಸಂಗಮೇಶ್ವರ್
ಕೊರೋನಾ ಸೋಂಕು ೨ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ಶುಕ್ರವಾರ ನಡೆದ ತುರ್ತು ಸಭೆಯ ನೇತೃತ್ವ ವಹಿಸಿ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿದರು.
ಭದ್ರಾವತಿ, ಮೇ. ೭: ತಾಲೂಕಿನಲ್ಲಿ ಕೊರೋನಾ ಸೋಂಕು ೨ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಸೋಂಕಿಗೆ ಒಳಗಾದವರಿಗೆ ಸೂಕ್ತ ಚಿಕಿತ್ಸೆ ನೀಡಲು ಅಗತ್ಯವಿರುವ ಸಿದ್ದತೆಗಳನ್ನು ಕೈಗೊಳ್ಳಲು ಶಾಸಕರ ಅನುದಾನದಲ್ಲಿ ೧ ಕೋ.ರು. ಬಿಡುಗಡೆಗೊಳಿಸಲಾಗುವುದು. ಯಾವುದೇ ರೀತಿ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಅಧಿಕಾರಿಗಳಿಗೆ ಸೂಚಿಸಿದರು.
ಅವರು ಶುಕ್ರವಾರ ಈ ಸಂಬಂಧ ನಗರಸಭೆ ಸಭಾಂಗಣದಲ್ಲಿ ನಡೆದ ತುರ್ತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗೆ ಸೋಮವಾರದೊಳಗೆ ಸೂಕ್ತ ವ್ಯವಸ್ಥೆ ರೂಪಿಸಿಕೊಳ್ಳಬೇಕು. ಪ್ರಸ್ತುತ ಆಸ್ಪತ್ರೆಯಲ್ಲಿರುವ ಹಾಸಿಗೆಗಳ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಬೇಕು. ಸೋಂಕಿತರನ್ನು ಮನೆಗಳಿಂದ ತುರ್ತು ಸಮಯದಲ್ಲಿ ಆಸ್ಪತ್ರೆಗೆ ಕರೆ ತರಲು ಹಾಗು ಬಿಡಲು ಹೆಚ್ಚುವರಿಯಾಗಿ ಆಂಬ್ಯುಲೆನ್ಸ್ ವ್ಯವಸ್ಥೆ ರೂಪಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಆಕ್ಸಿಜನ್ ಕೊರತೆ ಎದುರಾಗದಂತೆ ನೋಡಿಕೊಳ್ಳಬೇಕು. ಹೊಸ ಅಂಬ್ಯುಲೆನ್ಸ್, ಹಾಸಿಗೆ, ವೆಂಟಿಲೇಟರ್ ಸೇರಿದಂತೆ ಇನ್ನಿತರ ಸಾಮಗ್ರಿಗಳ ಖರೀದಿಗೆ ಅನುದಾನ ಸದ್ಬಳಕೆ ಮಾಡಿಕೊಳ್ಳಬೇಕು. ಜೊತೆಗೆ ಕೊರೋನಾ ಸೋಂಕು ಹರಡದಂತೆ ಮುನ್ನಚ್ಚರಿಕೆ ವಹಿಸಬೇಕು. ಸೋಂಕಿತರ ಕುರಿತು ನಿಖರವಾದ ಮಾಹಿತಿಯನ್ನು ದಾಖಲಿಸಿಕೊಂಡು ಹೆಚ್ಚಿನ ನಿಗಾವಹಿಸಬೇಕು. ಸೋಂಕು ಕುರಿತು ಜನರಿಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು. ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲೂ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಕಾಣಿಸಿಕೊಂಡಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲೂ ಹೆಚ್ಚಿನ ಕಾಳಜಿ ವಹಿಸಲು ಸಂಬಂಧಪಟ್ಟ ಅಧಿಕಾರಿಗಳು ಸೂಚಿಸಬೇಕೆಂದರು.
ಸಭೆಯಲ್ಲಿ ಉಪಸ್ಥಿತರಿದ್ದ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಕಾಳಜಿ ವಹಿಸಲಾಗುತ್ತಿದೆ. ಸೋಂಕು ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಲಾಗುತ್ತಿದೆ ಎಂದರು.
ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ತಾಲೂಕಿನ ಕೆಲವು ಗ್ರಾಮಗಳಲ್ಲಿ ಕಾಣಿಸಿಕೊಂಡಿರುವ ಸೋಂಕಿನ ಅಂಕಿ ಅಂಶಗಳ ಕುರಿತು ಮಾಹಿತಿ ನೀಡಿದರು. ಸೋಂಕು ಹರಡದಂತೆ ಹೆಚ್ಚಿನ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ನಗರಸಭೆ ಪೌರಾಯುಕ್ತ ಮನೋಹರ್ ನಗರಸಭೆ ವ್ಯಾಪ್ತಿಯಲ್ಲಿನ ಸೋಂಕಿನ ಅಂಕಿ ಅಂಶಗಳ ಕುರಿತು ಮಾಹಿತಿ ನೀಡಿದರು. ಉಳಿದಂತೆ ಪೊಲೀಸ್ ಉಪಾಧೀಕ್ಷಕ ಕೃಷ್ಣಮೂರ್ತಿ ಇಲಾಖೆ ವತಿಯಿಂದ ಕೈಗೊಂಡಿರುವ ಕ್ರಮಗಳನ್ನು ವಿವರಿಸಿದರು. ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಉಪಸ್ಥಿತರಿದ್ದರು.
No comments:
Post a Comment