Thursday, May 27, 2021

ವಿವಿಧ ಸೇವಾ ಸಂಸ್ಥೆಗಳಿಂದ ಸಂಕಷ್ಟದಲ್ಲಿರುವವರಿಗೆ ನೆರವು


ಭದ್ರಾವತಿ ನ್ಯೂಟೌನ್ ಪ್ರಶಾಂತಿ ಸೇವಾ ಟ್ರಸ್ಟ್, ಶ್ರೀ ಸತ್ಯಸಾಯಿ ಸೇವಾ ಸಂಸ್ಥೆ ವತಿಯಿಂದ ಕೋವಿಡ್ ಚಿಕಿತ್ಸೆ ಪಡೆಯುವವರ ಸಂಚಾರಕ್ಕೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಮಾರುತಿ ಇಕೊ ಮೊಬೈಲ್ ವ್ಯಾನ್ ಉಚಿತ ಸೇವೆಗಾಗಿ ಮೀಸಲಿಡಲಾಗಿದೆ.
    ಭದ್ರಾವತಿ, ಮೇ. ೨೭: ತಾಲೂಕಿನಲ್ಲಿ ಕೊರೋನಾ ಸೋಂಕು ೨ನೇ ಅಲೆ  ಭೀತಿ ನಡುವೆಯೂ ಲಾಕ್‌ಡೌನ್ ಪರಿಣಾಮ ಸಂಕಷ್ಟಕ್ಕೆ ಒಳಗಾಗಿರುವವರ ನೆರವಿಗೆ ದಾನಿಗಳು, ವಿವಿಧ ಸಂಘ-ಸಂಸ್ಥೆಗಳು ಹಾಗು ಸ್ವಯಂ ಸೇವಾ ಸಂಸ್ಥೆಗಳು ಮುಂದಾಗುವ ಮೂಲಕ ಮಾನವೀಯತೆ ಮೆರೆಯುತ್ತಿವೆ.
       ಪ್ರಶಾಂತಿ ಸೇವಾ ಟ್ರಸ್ಟ್, ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳು :
     ಸೇವೆಯಲ್ಲಿ ಭಗವಂತನನ್ನು ಕಾಣಬೇಕೆಂಬ ಮನೋಭಾವನೆಯೊಂದಿಗೆ ನಿರಂತರವಾಗಿ ಹಲವಾರು ಸೇವಾ ಕಾರ್ಯಗಳಲ್ಲಿ ಗುರುತಿಸಿಕೊಂಡಿರುವ ನಗರದ ನ್ಯೂಟೌನ್ ಪ್ರಶಾಂತಿ ಸೇವಾ ಟ್ರಸ್ಟ್, ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳು ಕೊರೋನಾ ಲಾಕ್‌ಡೌನ್ ಸಂದರ್ಭದಲ್ಲಿ ಸೇವಾ ಕಾರ್ಯಗಳನ್ನು ಮತ್ತಷ್ಟು ವಿಸ್ತರಿಸಿಕೊಂಡಿವೆ.
      ಮೇ.೪ ರಿಂದ ಕೊರೋನಾ ಸಂದಭದಲ್ಲಿನ ಸೇವಾ ಕಾರ್ಯಗಳಿಗೆ ಚಾಲನೆ ನೀಡಲಾಗಿದ್ದು, ಕೋವಿಡ್ ಚಿಕಿತ್ಸೆ ಪಡೆಯುವವರ ಸಂಚಾರಕ್ಕೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಮಾರುತಿ ಇಕೊ ಮೊಬೈಲ್ ವ್ಯಾನ್ ಉಚಿತ ಸೇವೆಗಾಗಿ ಮೀಸಲಿಡಲಾಗಿದೆ. ಮೇ.೭ರಿಂದ ಪ್ರತಿದಿನ ಸುಮಾರು ೧೫೦ ಮಂದಿಗೆ ಸಾಕಾಗುವಷ್ಟು ಆಹಾರ ತಯಾರಿಸಿ ಹಸಿವಿನಿಂದ ಬಳಲುತ್ತಿರುವವರಿಗೆ, ಮನೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರಿಗೆ ವಿತರಿಸಲಾಗುತ್ತಿದೆ. ಜೊತೆಗೆ ಭಿಕ್ಷುಕರು, ನಿರ್ಗತಿಕರು, ಅಸಹಾಯಕರಿಗೆ ಊಟದ ಜೊತೆ ಬಟ್ಟೆ ಸಹ ವಿತರಿಸಲಾಗುತ್ತಿದೆ. ಇವೆಲ್ಲದರ ಜೊತೆಗೆ ಸೋಂಕಿನಿಂದ ಗುಣಮುಖರಾಗಿರುವವರಿಗೆ ಒಂದು ಆಕ್ಸಿಜನ್ ಕಾನ್ಸನ್‌ಟ್ರೇಟರ್ ಮೀಸಲಾಗಿದ್ದು, ಸಂಸ್ಥೆಯ ಭಕ್ತರು ಹಾಗು ಶಿಕ್ಷಣ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ಶಾಲಾ ಸಿಬ್ಬಂದಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.



ಭದ್ರಾವತಿ ನ್ಯೂಟೌನ್ ಪ್ರಶಾಂತಿ ಸೇವಾ ಟ್ರಸ್ಟ್, ಶ್ರೀ ಸತ್ಯಸಾಯಿ ಸೇವಾ ಸಂಸ್ಥೆ ವತಿಯಿಂದ ಭಿಕ್ಷುಕರು, ನಿರ್ಗತಿಕರು, ಅಸಹಾಯಕರಿಗೆ ಸಿದ್ದಪಡಿಸಿದ ಆಹಾರದ ಜೊತೆಗೆ ಬಟ್ಟೆ ಸಹ ವಿತರಿಸುತ್ತಿರುವುದು.

     ಸಂಸ್ಥೆ ವತಿಯಿಂದ ಕೈಗೊಳ್ಳಲಾಗುತ್ತಿರುವ ಸೇವಾ ಕಾರ್ಯದಲ್ಲಿ ಪಾಲ್ಗೊಳ್ಳಲು ಇಚ್ಛಿಸುವವರು ಮೊ: ೯೮೪೪೨೩೮೫೮೬ ಅಥವಾ ಮೊ: ೯೧೪೧೬೪೨೪೩೨ ಸಂಖ್ಯೆಗೆ ಕರೆ ಮಾಡಬಹುದಾಗಿದೆ. ನಗರದಲ್ಲಿ ಸೇವಾ ಕಾರ್ಯಗಳು ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳ ರಾಜ್ಯ ಸಂಯೋಜಕ ಡಿ. ಪ್ರಭಾಕರ ಬೀರಯ್ಯನವರ ನೇತೃತ್ವದಲ್ಲಿ ನಡೆಯುತ್ತಿವೆ. ಈಗಾಗಲೇ ಸಂಸ್ಥೆಯ ಅನೇಕ ಭಕ್ತರು ಸ್ವಯಂ ಪ್ರೇರಣೆಯಿಂದ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡು ಗಮನ ಸೆಳೆದಿದ್ದಾರೆ.
    ಸಂಕಷ್ಟದಲ್ಲಿರುವ ಕಟ್ಟಡ ಕಾರ್ಮಿಕರಿಗೆ ನೆರವು:
   ಕರ್ನಾಟಕ ರಾಜ್ಯ ಕನ್ಸ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ತಾಲೂಕಿನಲ್ಲಿ ಸಂಕಷ್ಟದಲ್ಲಿರುವ ಕಟ್ಟಡ ಕಾರ್ಮಿಕರಿಗೆ ಅಗತ್ಯವಿರುವ ದಿನಸಿ ಸಾಮಗ್ರಿಗಳನ್ನು ವಿತರಿಸುವ ಮೂಲಕ ಮಾನವೀಯತೆ ಮೆರೆಯುತ್ತಿದೆ.
    ತಾಲೂಕಿನಲ್ಲಿ ಒಟ್ಟು ಸುಮಾರು ೪೦೦೦ ಕಟ್ಟಡ ಕಾರ್ಮಿಕರಿದ್ದು, ಈ ಪೈಕಿ ಬಹುತೇಕ ಮಂದಿ ಬಡತನ ರೇಖೆಗಿಂತ ಕೆಳಗಿನವರಾಗಿದ್ದಾರೆ. ಇಂತಹ ಕಟ್ಟಡ ಕಾರ್ಮಿಕರನ್ನು ಗುರುತಿಸಿ ಅಗತ್ಯವಿರುವ ದಿನಸಿ ಸಾಮಗ್ರಿಗಳನ್ನು ವಿತರಿಸಲಾಗುತ್ತಿದೆ. ನಗರದ ವಿವಿಧೆಡೆ ನೆಲೆಸಿರುವ ಕಟ್ಟಡ ಕಾರ್ಮಿಕರಿಗೆ ಆಯಾ ಭಾಗದಲ್ಲಿಯೇ ದಿನ ಸಾಮಗ್ರಿಗಳನ್ನು ವಿತರಿಸುವ ವ್ಯವಸ್ಥೆಯನ್ನು ಕೈಗೊಳ್ಳಲಾಗಿದ್ದು, ಇದುವರೆಗೂ ಸುಮಾರು ೫೦೦ ರಿಂದ ೬೦೦ ಮಂದಿಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಗಿದೆ. ಇನ್ನೂ ಸುಮಾರು ೧೦೦೦ ಮಂದಿಗೆ ವಿತರಿಸಬೇಕಾಗಿದೆ.
    ಗುರುವಾರ ಭಂಡಾರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಆವರಣದಲ್ಲಿ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು. ನಗರಸಭೆ ಮಾಜಿ ಸದಸ್ಯ ಗಂಗಾಧರ್, ತಾಲೂಕು ಆಟೋ ಚಾಲಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಲಕ್ಷಣ್, ಕರ್ನಾಟಕ ರಾಜ್ಯ ಕನ್ಸ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ಗೌರವಾಧ್ಯಕ್ಷ ಸುರೇಶ್‌ಕುಮಾರ್, ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್‌ಬಾಬು, ತಾಲೂಕು ಅಧ್ಯಕ್ಷ ನಾಗರಾಜ್, ಮನೋಹರ್, ಶೇಖರ್, ಪೇಂಟಿಂಗ್ ಸಂಘದ ಅಧ್ಯಕ್ಷ ಶಿವಣ್ಣ, ಶಿವಮೊಗ್ಗ ಗ್ರಾಮಾಂತರ ಅಧ್ಯಕ್ಷ ಸಂಜಯ್‌ಕುಮಾರ್, ನಾಗೇಶ್, ಗುರು, ಅಂತೋಣಿ ಕ್ರೂಸ್, ನಾರಾಯಣ ಸ್ವಾಮಿ, ಅಭಿಲಾಷ್, ಮಂಜುನಾಥ್, ಸುಬ್ರಮಣ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.



ಭದ್ರಾವತಿ ಭಂಡಾರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಆವರಣದಲ್ಲಿ ಕರ್ನಾಟಕ ರಾಜ್ಯ ಕನ್ಸ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ವತಿಯಿಂದ ಸಂಕಷ್ಟದಲ್ಲಿರುವ ಕಟ್ಟಡ ಕಾರ್ಮಿಕರಿಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು.

No comments:

Post a Comment