ಕಳೆದ ಬಾರಿ ಸಿದ್ದಪಡಿಸಿದ ಆಹಾರ, ಈ ಬಾರಿ ದಿನಸಿ ಸಾಮಗ್ರಿ ವಿತರಣೆ
ಭದ್ರಾವತಿ ತರೀಕೆರೆ ರಸ್ತೆಯ ವಲಯ ಅರಣ್ಯಾಧಿಕಾರಿಗಳ ಕಛೇರಿ ಪಕ್ಕದಲ್ಲಿ ಭದ್ರಾನದಿ ದಡದಲ್ಲಿರುವ ಶ್ರೀ ಧರ್ಮಶಾಸ್ತ ಅಯ್ಯಪ್ಪ ಸ್ವಾಮಿ ದೇವಸ್ಥಾನ ಸೇವಾ ಟ್ರಸ್ಟ್ ವತಿಯಿಂದ ತೀರ ಸಂಕಷ್ಟಕ್ಕೆ ಒಳಗಾದ ಬಡವರಿಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು.
ಭದ್ರಾವತಿ, ಜೂ. ೧೦: ನಗರದ ತರೀಕೆರೆ ರಸ್ತೆಯ ವಲಯ ಅರಣ್ಯಾಧಿಕಾರಿಗಳ ಕಛೇರಿ ಪಕ್ಕದಲ್ಲಿ ಭದ್ರಾನದಿ ದಡದಲ್ಲಿರುವ ಶ್ರೀ ಧರ್ಮಶಾಸ್ತ ಅಯ್ಯಪ್ಪ ಸ್ವಾಮಿ ದೇವಸ್ಥಾನ ಕೇವಲ ಧಾರ್ಮಿಕ ಆಚರಣೆಗಳಿಗೆ ಸೀಮಿತವಾಗದೆ. ಹಲವು ಸಾಮಾಜಿಕ ಸೇವಾ ಕಾರ್ಯಗಳನ್ನು ಸಹ ಮೈಗೂಡಿಸಿಕೊಂಡಿದೆ. ಕೊರೋನಾ ಹಿನ್ನಲೆಯಲ್ಲಿ ಸಂಕಷ್ಟಕ್ಕೆ ಒಳಗಾದವರ ನೆರವಿಗೆ ದೇವಸ್ಥಾನ ಸೇವಾ ಟ್ರಸ್ಟ್ ಮುಂದಾಗುತ್ತಿದೆ.
ಕೊರೋನಾ ಸೋಂಕಿನ ೨ನೇ ಅಲೆ ಹಿನ್ನಲೆಯಲ್ಲಿ ಜಾರಿಗೊಳಿಸಲಾದ ಸೆಮಿ ಲಾಕ್‌ಡೌನ್ ಪರಿಣಾಮ ಕಡು ಬಡವರು ತೀರ ಸಂಕಷ್ಟಕ್ಕೆ ಒಳಗಾಗಿದ್ದು, ಒಂದೊತ್ತಿನ ಊಟಕ್ಕೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂದಿಗ್ದ ಪರಿಸ್ಥಿತಿಯಲ್ಲಿ ಟ್ರಸ್ಟ್ ಮಾನವೀಯತೆ ಮೆರೆಯುವ ಮೂಲಕ ಸಂಕಷ್ಟಕ್ಕೆ ಒಳಗಾದವರಿಗೆ ಅಗತ್ಯವಿರುವ ದಿನಸಿ ಸಾಮಗ್ರಿಗಳನ್ನು ವಿತರಿಸುತ್ತಿದೆ. ಕಳೆದ ಬಾರಿ ಸಹ ಕೊರೋನಾ ಲಾಕ್‌ಡೌನ್ ಅವಧಿಯಲ್ಲಿ ಸಿದ್ದಪಡಿಸಿದ ಆಹಾರ ವಿತರಿಸುವ ಮೂಲಕ ಹಸಿದವರ ನೆರವಿಗೆ ಮುಂದಾಗಿತ್ತು.
ದೇವಸ್ಥಾನ ಸೇವಾ ಟ್ರಸ್ಟ್ ಅಧ್ಯಕ್ಷ ಮುನಿರಾಜು ಹಾಗು ಪ್ರಧಾನ ಅರ್ಚಕ ಸಂಜಯ್‌ಕುಮಾರ್ ನೇತೃತ್ವದಲ್ಲಿ ನಡೆದ ವಿತರಣಾ ಕಾರ್ಯಕ್ರಮದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಆರ್. ಕರುಣಾಮೂರ್ತಿ, ಯುವ ಮುಖಂಡ ಬಿ.ಎಸ್ ಗಣೇಶ್, ವಲಯ ಅರಣ್ಯಾಧಿಕಾರಿ ಮಂಜುನಾಥ್, ಉಪ ವಲಯ ಅರಣ್ಯಾಧಿಕಾರಿ ಬಿ.ಆರ್ ದಿನೇಶ್‌ಕುಮಾರ್, ಸಂಚಾರಿ ಪೊಲೀಸ್ ಠಾಣಾಧಿಕಾರಿ ಕವಿತಾ ಹಾಗು ಟ್ರಸ್ಟ್ ಪದಾಧಿಕಾರಿಗಳು, ಸೇವಾಕರ್ತರು ಉಪಸ್ಥಿತರಿದ್ದರು.
No comments:
Post a Comment