ತಾಲೂಕು ಮಟ್ಟದ ಕೋವಿಡ್-೧೯ ಕಾರ್ಯಪಡೆ ಸಭೆಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್
ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ಸೋಮವಾರ ತಾಲೂಕು ಮಟ್ಟದ ಕೋವಿಡ್-೧೯ ಕಾರ್ಯಪಡೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಿದ್ದರು.
ಭದ್ರಾವತಿ, ಜೂ. ೭: ನಗರಸಭೆ ೩೫ ವಾರ್ಡ್‌ಗಳಲ್ಲಿ ಸುಮಾರು ೧ ಕೋ. ರು. ವೆಚ್ಚದಲ್ಲಿ ೨೫ ಸಾವಿರ ಬಡಕುಟುಂಬಗಳಿಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಗುವುದು ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ತಿಳಿಸಿದರು.
ಅವರು ಸೋಮವಾರ ನಗರಸಭೆ ಸಭಾಂಗಣದಲ್ಲಿ ತಾಲೂಕು ಮಟ್ಟದ ಕೋವಿಡ್-೧೯ ಕಾರ್ಯ ಪಡೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಗರಸಭೆ ೩೫ ವಾರ್ಡ್‌ಗಳಲ್ಲಿ ಕೋವಿಡ್-೧೯ ಸೆಮಿ ಲಾಕ್‌ಡೌನ್ ಹಿನ್ನಲೆಯಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ಅರ್ಹ ಬಡವರನ್ನು ಗುರುತಿಸಿ ದಿನಸಿ ಸಾಮಗ್ರಿಗಳನ್ನು ವಿತರಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತವಾಗಿದ್ದು, ನಗರಸಭೆ ವಿಶೇಷ ಅನುದಾನದಲ್ಲಿ(ಸಿಎಸ್‌ಆರ್) ಜಿಲ್ಲಾಧಿಕಾರಿಗಳ ಒಪ್ಪಿಗೆ ಪಡೆದು ಸುಮಾರು ೧ ಕೋ. ರು. ವೆಚ್ಚದಲ್ಲಿ ಈ ಕಾರ್ಯ ಕೈಗೊಳ್ಳಲಾಗುತ್ತಿದೆ. ನಗರಸಭೆ ಇತಿಹಾಸದಲ್ಲಿಯೇ ಇದೊಂದು ಮೊದಲ ಪ್ರಯತ್ನವಾಗಿದೆ ಎಂದರೆ ತಪ್ಪಾಗಲಾರದು ಎಂದರು.
ಈಗಾಗಲೇ ಸರ್ಕಾರ ಬಡವರಿಗೆ ಉಚಿತ ಅಕ್ಕಿ ವಿತರಿಸಿದ್ದು, ಅಕ್ಕಿಯನ್ನು ಬಿಟ್ಟು ಇತರೆ ದಿನಸಿ ಸಾಮಗ್ರಿಗಳನ್ನು ನೀಡಲಾಗುವುದು. ಎಲ್ಲಾ ಪ್ರಕ್ರಿಯೆಗಳು ಮುಗಿಯಲು ಸುಮಾರು ೧೦ ದಿನಗಳು ಬೇಕಾಗುತ್ತದೆ. ಒಂದು ವೇಳೆ ಲಾಕ್‌ಡೌನ್ ಇಲ್ಲದಿದ್ದರೂ ಸಹ ದಿನಸಿ ಸಾಮಗ್ರಿಗಳನ್ನು ವಿತರಿಸಲಾಗುವುದು. ಈ ಸಂಬಂಧ ಶೀಘ್ರದಲ್ಲಿಯೇ ಟೆಂಡರ್ ಕರೆಯಲಾಗುವುದು. ನಿಗದಿಪಡಿಸಲಾದ ಮಾನದಂಡಗಳ ಆಧಾರದ ಮೇಲೆ ಆಯಾ ವಾರ್ಡ್‌ಗಳ ಸದಸ್ಯರು ಹಾಗು ಮುಖಂಡರು ಮತ್ತು ಅಧಿಕಾರಿಗಳನ್ನೊಳಗೊಂಡ ತಂಡ ಬಡವರನ್ನು ಗುರುತಿಸಿ ದಿನಸಿ ಸಾಮಗ್ರಿಗಳನ್ನು ವಿತರಿಸಲಿದೆ ಎಂದರು.
ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳಿಗೆ, ಸಿಬ್ಬಂದಿಗಳಿಗೆ ಲಸಿಕೆ:
ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯಿತಿಗಳ ಸದಸ್ಯರು, ಸಿಬ್ಬಂದಿಗಳು ಹಾಗು ನಗರಸಭೆ ೩೫ ವಾರ್ಡ್‌ಗಳ ಸದಸ್ಯರುಗಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಮಂಗಳವಾರ ಹಳೇನಗರದ ಶ್ರೀ ವೀರಶೈವ ಸಭಾ ಭವನದಲ್ಲಿ ಲಸಿಕೆ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು. ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.
೩೫ ವಾರ್ಡ್‌ಗಳ ವ್ಯಾಪ್ತಿಯಲ್ಲಿ ಲಸಿಕಾ ಕೇಂದ್ರ :
ನಗರಸಭೆ ವ್ಯಾಪ್ತಿಯ ೩೫ ವಾರ್ಡ್‌ಗಳಲ್ಲಿ ೧, ೨ ರಿಂದ ೩ ಹಾಗು ೩ ರಿಂದ ೪ ವಾರ್ಡ್‌ಗಳನ್ನು ಒಳಗೊಂಡಂತೆ ತಲಾ ಒಂದೊಂದು ಒಟ್ಟು ೧೨ ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗಪಡೆದುಕೊಳ್ಳಬೇಕು. ತಾಲೂಕಿನಲ್ಲಿ ಜನಸಂಖ್ಯೆ ಹೆಚ್ಚಾಗಿದ್ದು, ಕೇವಲ ೧ ಸಾವಿರ ಲಸಿಕೆ ಮಾತ್ರ ಬರುತ್ತಿದೆ. ಆದರೆ ಶಿವಮೊಗ್ಗಕ್ಕೆ ಹೆಚ್ಚಿನ ಲಸಿಕೆ ನೀಡಲಾಗುತ್ತಿದೆ. ಈ ರೀತಿಯ ತಾರತಮ್ಯ ಸರಿಯಲ್ಲ. ಭದ್ರಾವತಿಗೂ ಹೆಚ್ಚಿನ ಲಸಿಕೆ ನೀಡಬೇಕೆಂದು ಆಗ್ರಹಿಸಿದರು.
ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗೆ ಹೋದವರು ಜೀವಂತವಾಗಿ ಬರುತ್ತಿಲ್ಲ:
ತಾಲೂಕಿನಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಹೆಚ್ಚಿನ ಜಾಗೃತಿ ವಹಿಸಬೇಕು. ಸಾಮಾಜಿಕ ಅಂತರ, ಕಡ್ಡಾಯವಾಗಿ ಸ್ಯಾನಿಟೈಜರ್ ಮತ್ತು ಮಾಸ್ಕ್ ಬಳಸಬೇಕು. ಅನಾವಶ್ಯಕವಾಗಿ ಮನೆಯಿಂದ ಹೊರಬರದೆ ಸಹಕರಿಸಬೇಕು. ಅಲ್ಲದೆ ಕೊರೋನಾ ನಿಯಂತ್ರಿಸಲು ಎಲ್ಲಾ ಇಲಾಖೆಗಳು ಸಹ ಇನ್ನೂ ಹೆಚ್ಚಿನ ಶ್ರಮ ವಹಿಸಬೇಕಾಗಿದೆ ಎಂದರು.
ಸೋಂಕಿಗೆ ಒಳಗಾಗಿ ತುರ್ತು ಚಿಕಿತ್ಸೆಗೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಾದವರು ಪುನಃ ಜೀವಂತವಾಗಿ ಹಿಂದಿರುಗುತ್ತಿಲ್ಲ. ಮೆಗ್ಗಾನ್ ಆಸ್ಪತ್ರೆಯಲ್ಲಿ ಸೂಕ್ತ ಸೌಲಭ್ಯಗಳು ಇವೆಯೋ, ಇಲ್ಲವೋ ಒಂದು ಗೊತ್ತಾಗುತ್ತಿಲ್ಲ. ಇಂದಿಗೂ ಆಕ್ಸಿಜನ್, ವೆಂಟಿಲೇಟರ್ ಕೊರತೆ ಕಂಡು ಬರುತ್ತಿದ್ದು, ಯಾರಾದರೂ ಸತ್ತರೆ ಮಾತ್ರ ಹೊಸಬರಿಗೆ ವ್ಯವಸ್ಥೆ ಕಲ್ಪಿಸುವಂತಾಗಿದೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವರು ಪತ್ರಕರ್ತರು, ಮಾಧ್ಯಮಗಳಿಗೆ ಎಲ್ಲವೂ ಸರಿಯಾಗಿದೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಸರ್ಕಾರ ತಕ್ಷಣ ಆಸ್ಪತ್ರೆಯಲ್ಲಿ ಉಂಟಾಗಿರುವ ಸಮಸ್ಯೆಗಳನ್ನು ಬಗೆಹರಿಸಲು ಗಮನ ಹರಿಸಬೇಕೆಂದು ಒತ್ತಾಯಿಸಿದರು.
ಲಸಿಕಾ ಕೇಂದ್ರಗಳಿಗೆ ಸಂಬಂಧಿಸಿದಂತೆ ನಗರಸಭಾ ಸದಸ್ಯರು, ಮುಖಂಡರುಗಳಿಂದ ಹಲವು ಸಲಹೆ ಸೂಚನೆಗಳು ವ್ಯಕ್ತವಾದವು. ತಾಲೂಕು ಆರೋಗ್ಯಾಧಿಕಾರಿಗಳು ಸಮಸ್ಯೆಗಳನ್ನು ಸಾಧ್ಯವಾದಷ್ಟು ಬಗೆಹರಿಸುವುದಾಗಿ ಭರವಸೆ ನೀಡಿದರು.
ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್, ನಗರಸಭೆ ಪೌರಾಯುಕ್ತ ಕೆ. ಪರಮೇಶ್, ನಗರ ಪೊಲೀಸ್ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ ಉಪಸ್ಥಿತರಿದ್ದರು.
ನಗರಸಭಾ ಸದಸ್ಯರಾದ ಬಿ.ಕೆ ಮೋಹನ್, ಬಸವರಾಜ ಬಿ. ಆನೇಕೊಪ್ಪ, ಕೆ ಸುದೀಪ್‌ಕುಮಾರ್, ಬಿ.ಟಿ ನಾಗರಾಜ್, ವಿ. ಕದಿರೇಶ್, ಟಿಪ್ಪು ಸುಲ್ತಾನ್, ಕೋಟೇಶ್ವರರಾವ್, ಚನ್ನಪ್ಪ, ಮುಖಂಡರಾದ ಎಸ್.ಎಸ್ ಭೈರಪ್ಪ, ವಸಂತಕುಮಾರ್, ರಾಜ್‌ಕುಮಾರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment